ಭದ್ರಾವತಿ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ಹತ್ಯೆಯಾದ ರೌಡಿಶೀಟರ್ ಮುಜ್ಜು ಅಲಿಯಾಸ್ ಮುಜಾಯಿದ್ದೀನ್.
ಭದ್ರಾವತಿ, ಜು. ೨೧ : ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್ ಓರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮುಜ್ಜು ಅಲಿಯಾಸ್ ಮುಜಾಯಿದ್ದೀನ್(32) ಹತ್ಯೆಯಾಗಿದ್ದು, ಈತನ ವಿರುದ್ಧ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಈತನಿಗೆ ಇಬ್ಬರು ಪತ್ನಿಯರಿದ್ದು, ಗುರುವಾರ ಮಧ್ಯ ರಾತ್ರಿ ಈತನ ಎರಡನೇ ಪತ್ನಿ ಮನೆ ಮುಂಭಾಗದಲ್ಲಿಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.
ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ, ಹಿರಿಯ ಪೊಲೀಸ್ ಅಧೀಕ್ಷಕ ಜಿತೇಂದ್ರಕುಮಾರ್ ದಯಾಮ ಹಾಗು ಪೇಪರ್‌ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತದೇಹದ ಶವ ಪರೀಕ್ಷೆ ನಡೆಸಲಾಗಿದ್ದು, ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಹತ್ಯೆಗೊಳಗಾಗಿರುವ ಮುಜಾಯಿದ್ದೀನ್ ಸಹೋದರ(ತಮ್ಮ) ದೂರು ದಾಖಲಿಸಿದ್ದು, ಪೊಲೀಸರು ಮುಂದಿನ ಕ್ರಮ ಕೈ ಗೊಂಡಿದ್ದಾರೆ. ಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
No comments:
Post a Comment