Monday, July 31, 2023

ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ : ಡಾ. ಸಿದ್ದಲಿಂಗಮೂರ್ತಿ

ಭದ್ರಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ  ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್‌ ಶ್ರೀಹರ್ಷ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜು. ೩೧ : ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕೆಂದು ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿ ಪ್ರಾಂಶುಪಾಲ ಡಾ. ಸಿದ್ದಲಿಂಗಮೂರ್ತಿ ಕರೆ ನೀಡಿದರು.
    ಅವರು ಸೋಮವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು.
    ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಪಾತ್ರ ಬಹಳ ಮುಖ್ಯವಾಗಿದೆ.  ಇಂದು ದೃಶ್ಯ ಮಾಧ್ಯಮಗಳಿಗೆ ಜನರು ಜೋತು ಬಿದ್ದಿದ್ದು, ಈ ನಡುವೆಯೂ ಪತ್ರಿಕೆಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸುತ್ತಿವೆ. ಯಾವುದೇ ಸ್ವಾರ್ಥವಿಲ್ಲದೆ ಸಮಾಜದ ಸ್ವಾಸ್ಥ್ಯಕ್ಕಾಗಿ  ಪತ್ರಕರ್ತರು ಇದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆಗಳನ್ನು ಓದುವ ಮೂಲಕ ಸಮಾಜದ ಎಲ್ಲಾ ವಿಚಾರಗಳ ಕುರಿತು ಅರಿವು ಹೊಂದಬೇಕೆಂದರು.
    ಪತ್ರಿಕಾಭವನ ಟ್ರಸ್ಟ್‌ ಅಧ್ಯಕ್ಷ ಕಣ್ಣಪ್ಪ, ಹಿರಿಯ ಪತ್ರಕರ್ತ ಎನ್. ಬಾಬು, ಜಿಲ್ಲಾ ಸಂಘದ ಪ್ರಮುಖರಾದ ಪ್ರಧಾನ ಕಾರ್ಯದರ್ಶಿ ಅರುಣ್‌, ಆರ್.ಎಸ್‌ ಹಾಲಪ್ಪ ಸೇರಿದಂತೆ ಇನ್ನಿತರರು ಮಾತನಾಡಿ, ಇಂದು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಗೆ ನೀಡುವಷ್ಟು ಮಹತ್ವ ಪತ್ರಿಕೆಗಳಿಗೂ ನೀಡಬೇಕು. ಆ ಮೂಲಕ ತಮ್ಮ ಭವಿಷ್ಯಕ್ಕೆ ಸಹಕಾರಿಯಾಗಿರುವ ವಿಚಾರಗಳನ್ನು ಅರಿತುಕೊಳ್ಳಬೇಕೆಂದರು.
    ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್‌ ಶ್ರೀಹರ್ಷ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಪತ್ರಿಕಾ ದಿನಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಮ್ಮಿಕೊಳ್ಳಲಾಗಿದ್ದ ಚರ್ಚಾಸ್ಪರ್ಧೆಯಲ್ಲಿ ವಿಜೇತರಾದ ಮಾಯಾವತಿ, ಕೃಪಾಶ್ರೀ, ಆರ್. ಮೇಘನಾ, ಸುಚಿತ್ರ ಹಾಗು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಎಚ್‌.ಎಸ್‌ ರಚನಾ, ಎಸ್. ದೀಕ್ಷಿತಾ, ಓ. ಪೂಜಾ ಮತ್ತು ಎಚ್.ಎಸ್‌ ಸಂಜನಾ ಅವರಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
    ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್‌ ಸ್ವಾಗತಿಸಿದರು. ಕಾಲೇಜಿನ ಚನ್ನಯ್ಯ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಕೂಡ್ಲಿಗೆರೆ ಮಂಜುನಾಥ್‌ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಖಜಾಂಚಿ ಅನಂತಕುಮಾರ್‌ ವಂದಿಸಿದರು.
    ಸಂಘದ ಹಿರಿಯ ಹಾಗು ಕಿರಿಯ ಸದಸ್ಯರು, ಕಾಲೇಜಿನ ಬೋಧಕ ಹಾಗು ಬೋಧಕೇತರ ಸಿಬ್ಬಂದಿಗಳು ಹಾಗು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.  

No comments:

Post a Comment