ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಶಂಸೆ
ಭದ್ರಾವತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ -೨ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಉದ್ಘಾಟಿಸಿದರು.
ಭದ್ರಾವತಿ, ಜು. ೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಜ್ಞಾನನಿಧಿ ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳ ಪಾಲಿಗೆ ಆಶಾ ಕಿರಣವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಶಂಸೆ ವ್ಯಕ್ತಪಡಿಸಿದರು.
ಅವರು ಸೋಮವಾರ ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ -೨ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯೋಜನೆ ವತಿಯಿಂದ ವಿದ್ಯಾರ್ಥಿಗಳ ನೆರವಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿರುವುದು ಸಮಾಜದಲ್ಲಿ ಉತ್ತಮ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಇವುಗಳ ಸದುಪಯೋಗಪಡೆದುಕೊಂಡು ಉತ್ತಮ ಸಾಧನೆ ಮಾಡಬೇಕೆಂದರು.
ಯೋಜನಾಧಿಕಾರಿ ಮಾಧವಗೌಡ ಮಾತನಾಡಿ, ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗಾಗಿ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ ಜಾರಿಗೆ ತರಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗಡೆಯವರು ಯೋಜನೆಯ ಪ್ರಸಕ್ತ ಸಾಲಿನ ಮಾಸಿಕ ವಿದ್ಯಾರ್ಥಿ ವೇತನ ಮಂಜೂರಾತಿ ಮಾಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಕೋರಿದರು.
ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಆನಂದ ಕುಮಾರ್, ಸದಸ್ಯ ಆರ್. ಕರುಣಾಮೂರ್ತಿ, ಸ್ಥಳೀಯ ಒಕ್ಕೂಟದ ಅಧ್ಯಕ್ಷೆ ಕೌಸರ್ ಬಾನು, ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸೌಮ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
No comments:
Post a Comment