Saturday, September 23, 2023

ಸೆ.26ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಿವಿಧ ಧಾರ್ಮಿಕ ಆಚರಣೆ


ಭದ್ರಾವತಿಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿವತಿಯಿಂದ 51ನೇ ವರ್ಷದ ವಿನಾಯಕ ಮೂರ್ತಿ ಮಹೋತ್ಸವ ಅಂಗವಾಗಿ ಪ್ರತಿದಿನ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿದ್ದು, ಶುಕ್ರವಾರ ಬಜರಂಗದಳ ವತಿಯಿಂದ ಸಾಮೂಹಿಕ ದೀಪ ಲಕ್ಷ್ಮೀ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಭದ್ರಾವತಿ : ನಗರದ ಹೊಸಮನೆ ಮುಖ್ಯ ರಸ್ತೆಯಲ್ಲಿ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀವಿನಾಯಕ ಸೇವಾ ಸಮಿತಿ ವತಿಯಿಂದ 51ನೇ ವರ್ಷದ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಸೆ.26ರಂದು ನಡೆಯಲಿದೆ.

    ಪ್ರತಿ ವರ್ಷದಂತೆ ಈ ಬಾರಿ ಸಹ ವಿಸರ್ಜನೆಗೂ ಮೊದಲು ವೈಭವದ ರಾಜಬೀದಿ ಉತ್ಸವ ಮೆರವಣಿಗೆ ನಡೆಯಲಿದ್ದು, ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ವಯಸ್ಸಿನ ಮಿತಿ ಇಲ್ಲದೆ ಎಲ್ಲಾ ಜಾತಿಯ, ಧರ್ಮದ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆಯಿಂದ ಸಂಜೆವರೆಗೂ ಹಬ್ಬದ ವಾತಾವರಣ ಕಂಡು ಬರುತ್ತದೆ.

    ಮೆರವಣಿಗೆಗೆ ವಿನಾಯಕ ಸೇವಾ ಸಮಿತಿ ಈಗಾಗಲೇ ಸಿದ್ದತೆಗಳನ್ನು ಕೈಗೊಂಡಿದ್ದು, ಪೊಲೀಸ್ ಇಲಾಖೆ ಸಹ ಈ ಬಾರಿ ಹೆಚ್ಚಿನ ಬಿಗಿ ಬಂದೋಬಸ್ತ್ ಕೈಗೊಳ್ಳಲು ಮುಂದಾಗಿದೆ.



    ಪ್ರತಿದಿನ ಧಾರ್ಮಿಕ ಕಾರ್ಯಕ್ರಮ:

    ವಿನಾಯಕ ಮೂರ್ತಿ ಮಹೋತ್ಸವ ಅಂಗವಾಗಿ ಪ್ರತಿದಿನ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿದ್ದು, ಶುಕ್ರವಾರ ಬಜರಂಗದಳ ವತಿಯಿಂದ ಸಾಮೂಹಿಕ ದೀಪ ಲಕ್ಷ್ಮೀ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಸುಮಾರು 300ಕ್ಕೂ ಹೆಚ್ಚು ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಹಾಗು ಪದಾಧಿಕಾರಿಗಳು, ಬಜರಂಗದಳ ಜಿಲ್ಲಾ ಸಂಯೋಜಕ ರಾಘವನ್ ವಡಿವೇಲು ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment