ಭದ್ರಾವತಿ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಉಪಾಧ್ಯಕ್ಷರಾದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣರವರ ಅಧ್ಯಕ್ಷತೆಯಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು.
ಭದ್ರಾವತಿ: ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ, ವಾಲ್ಮೀಕಿ ಸಮಾಜ ಹಾಗು ವಿವಿಧ ಇಲಾಖೆಗಳ ಸಹಯೋಗದಲ್ಲಿ ಅ.೨೮ರಂದು ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.
ಗುರುವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಉಪಾಧ್ಯಕ್ಷರಾದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಈ ಬಾರಿ ನಗರದ ವೀರಶೈವ ಸಭಾ ಭವನದಲ್ಲಿ ಆಚರಿಸಲು ನಿರ್ಧರಿಸಲಾಯಿತು.
ಸಭೆ ಆರಂಭದಲ್ಲಿ ಕೆಲವು ಸರ್ಕಾರಿ ಇಲಾಖೆ ಅಧಿಕಾರಿಗಳ ಗೈರು ಹಾಜರಿಗೆ ಅಸಮಾಧಾನ ವ್ಯಕ್ತಪಡಿಸಲಾಯಿತು. ನಗರಸಭೆ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಮಹನೀಯರ ಜಯಂತಿ ಕಾರ್ಯಕ್ರಮಗಳಲ್ಲಿ ಸರ್ಕಾರಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಸಮಾಜದ ನಗರ ಅಧ್ಯಕ್ಷ ಬಸವರಾಜ್ ಬಿ. ಆನೇಕೊಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ಪೂರ್ವಭಾವಿ ಸಭೆ ೧ ತಿಂಗಳು ಮುಂಚಿತವಾಗಿ ನಡೆಸಬೇಕು. ಇಲ್ಲವಾದರೆ ಆಚರಣೆಗೆ ತೊಡಕಾಗುತ್ತದೆ ಎಂದರು.
ಸಮಾಜದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಪ್ರತಿಭಾ ಪುರಸ್ಕಾರದ ಸಂಖ್ಯೆ ಹೆಚ್ಚಿಸುವುದರ ಜೊತೆಗೆ ಸಮಾಜದ ಸಾಧಕರಿಗೂ ಪುರಸ್ಕಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮಂಡಿಸಿದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎನ್. ಗೋಪಾಲಪ್ಪ, ಕ್ಷೇತ್ರಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಉಪತಹಸೀಲ್ದಾರ್ ಅರಸು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಟರಾಜ್, ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್, ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ಪೊಲೀಸ್ ನಿರೀಕ್ಷಕ ಜಯಪ್ಪ, ಸಮಾಜದ ಮುಖಂಡರಾದ ಶೇಖರಪ್ಪ, ಶಿವಣ್ಣ, ಶಿವಾನಂದ್, ಲಕ್ಷ್ಮೀದೇವಿ, ದಸಂಸ ಮುಖಂಡರಾದ ಈಶ್ವರಪ್ಪ, ತಮ್ಮಯ್ಯ, ವಿ. ವಿನೋದ್, ರವಿನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು ಹಾಜರಿದ್ದರು.
No comments:
Post a Comment