ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ತುರ್ತು ಸಭೆ
ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಿತು.
ಭದ್ರಾವತಿ : ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಸೋಮವಾರ ನಡೆದ ಸಭೆಯಲ್ಲಿ ಆಗ್ರಹಿಸಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಕುಡಿಯುವ ನೀರು, ಸ್ಮಶಾನ ಭೂಮಿ, ನಿವೇಶನ ಹಂಚಿಕೆ ಸೇರಿದಂತೆ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು.
ನೀರು ಸರಬರಾಜು ಇಲಾಖೆ ಇಂಜಿನಿಯರ್ ಶಿವಕುಮಾರ್ ಸಭೆಗೆ ಮಾಹಿತಿ ನೀಡಿ, ತಡಸ ಮತ್ತು ದೊಣಬಘಟ್ಟ ಗ್ರಾಮಗಳಲ್ಲಿ ಮಾತ್ರ ನೀರಿನ ಸಮಸ್ಯೆ ಇದ್ದು, ಈ ಗ್ರಾಮಗಳಲ್ಲಿ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಉಳಿದಂತೆ ಎಲ್ಲಾ ಗ್ರಾಮಗಳಲ್ಲೂ ಸಮರ್ಪಕವಾಗಿ ನೀರು ಪೂರೈಸಲಾಗುತ್ತಿದೆ. ಹಣದ ಸಮಸ್ಯೆ ಇಲ್ಲ. ನೀರಿಗಾಗಿ ಬಹುತೇಕ ಭದ್ರಾ ಜಲಾಶಯ ಅವಲಂಬಿಸಲಾಗಿದ್ದು, ಈ ಹಿನ್ನಲೆಯಲ್ಲಿ ಜಲಾಶಯದಲ್ಲಿ ನೀರಿನ ಕೊರತೆ ಎದುರಾದಲ್ಲಿ ಜನವರಿ ನಂತರ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದೆ ಎಂದರು.
ಆದರೂ ಈ ನಡುವೆ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಶಾಸಕ ಸಂಗಮೇಶ್ವರ್ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಹಸೀಲ್ದಾರ್ ಕೆ.ಆರ್ ನಾಗರಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ನಗರಸಭೆ ಸದಸ್ಯರಾದ ಬಿ.ಕೆ ಮೋಹನ್, ಜಾರ್ಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment