ಭದ್ರಾವತಿ ನಗರದ ರೋಟರಿ ಸಭಾಂಗಣದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ರೋಟರಿ ಕ್ಲಬ್ ಹಾಗು ಶ್ರೀ ಸತ್ಯಸಾಯಿ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಉದ್ಘಾಟಿಸಿದರು.
ಭದ್ರಾವತಿ: ವಿಶೇಷ ಚೇತನ ಮಕ್ಕಳಲ್ಲಿ ಪಂಚೇಂದ್ರಿಯಗಳಲ್ಲಿ ನ್ಯೂತನೆಯಿದ್ದರೂ 6ನೇ ಇಂದ್ರಿಯವಾಗಿ ಅವರೊಳಗಿನ ಪ್ರತಿಭೆ ಕಾರ್ಯನಿರ್ವಹಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಹೇಳಿದರು.
ನಗರದ ರೋಟರಿ ಸಭಾಂಗಣದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ರೋಟರಿ ಕ್ಲಬ್ ಹಾಗು ಶ್ರೀ ಸತ್ಯಸಾಯಿ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಶೇಷ ಚೇತನರ ದಿನಾಚರಣೆಗಳು ಆಚರಣೆಗೆ ಸೀಮಿತವಾಗದೆ ಮಕ್ಕಳಲ್ಲಿ ಮನೋಬಲ ಹೆಚ್ಚಿಸುವ ಕಾರ್ಯಕ್ರಮಗಳಾಗಬೇಕು. ವಿಶ್ವ ವಿಶೇಷ ಚೇತನರ ದಿನಾಚರಣೆ ಕಾರ್ಯಕ್ರಮಗಳ ಅಂಗವಾಗಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಬದಲು ವಿಶಿಷ್ಟ ಚೇತನ ಸಾಧಕರನ್ನು ಮಕ್ಕಳಿಗೆ ಪರಿಚಯಿಸಬೇಕು. ಈ ಮೂಲಕ ಮಕ್ಕಳಲ್ಲಿ ಆತ್ಮಸ್ಥೈರ್ಯ ಮೂಡಿಸಬೇಕು. ಇಂತಹ ಪ್ರಯತ್ನಕ್ಕೆ ಸಂಘಸಂಸ್ಥೆಗಳು, ಮಾಧ್ಯಮಗಳು, ಜನಪ್ರತಿನಿಧಿಗಳು, ಪೋಷಕರು, ಶಿಕ್ಷಕರು ಎಲ್ಲರೂ ಕೈಜೋಡಿಸಬೇಕೆಂದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್ ಮಾತನಾಡಿ, ಮಕ್ಕಳ ದಿನಾಚರಣೆ ಎಷ್ಟು ಮುಖ್ಯವೋ, ಅದೇರೀತಿ ವಿಶೇಷ ಚೇತನ ಮಕ್ಕಳಿಗೆ ವಿಶ್ವ ವಿಶೇಷಚೇತನರ ದಿನಾಚರಣೆ ಮುಖ್ಯ. ಪ್ಯಾರಾ ಒಲಂಪಿಕ್ ಕ್ರೀಡೆಯಲ್ಲಿ ಇವರ ಸಾಧನೆ ಅಪಾರವಾಗಿರುವುದು ಭಾರತೀಯರ ಹೆಮ್ಮೆ ಎಂದರು.
ಹಳೆನಗರದ ಮಹಿಳಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಮಾತನಾಡಿ, ಪೋಷಕರು ಮಕ್ಕಳನ್ನು ತರಬೇತಿ ನೀಡಿ ಪ್ರೋತ್ಸಾಹಿಸಬೇಕು. ತಾವೇ ಎಲ್ಲ ಕೆಲಸ ಮಾಡುವುದರಿಂದ ಮಕ್ಕಳ ಸಾಮರ್ಥ್ಯ ಕುಗ್ಗಿಸಿದಂತಾಗುತ್ತದೆ. ಆದ್ದರಿಂದ ವಿಶೇಷ ಚೇತನ ಮಕ್ಕಳಿಗೆ ನೆರವಾಗುವುದಕ್ಕಿಂತ ಅವರನ್ನು ಸ್ವಾವಲಂಬಿಗಳಾಗಿಸುವುದು ಮುಖ್ಯ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಪಂಚಾಕ್ಷರಿ, ಮಹಿಳಾ ಸೇವಾ ಸಮಾಜದ ಪ್ರಮುಖರಾದ ಅನ್ನಪೂರ್ಣ ಸತೀಶ್, ಜಯಂತಿ ಶೇಟ್, ಅನುಸೂಯ, ಇಂದಿರಾ ರಮೇಶ್ ಮತ್ತಿತರರಿದ್ದರು.
ಟಿ.ಎನ್.ಪ್ರತಿಭಾ ಸಂವಿಧಾನ ಪೀಠಿಕೆ ವಾಚಿಸಿದರು. ತೀರ್ಥಪ್ಪ ಸ್ವಾಗತಿಸಿ, ನಿರೂಪಿಸಿದರು. ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಹಾಗು ಪೋಷಕರಿಗೆ ಬಹುಮಾನ ವಿತರಿಸಲಾಯಿತು.
No comments:
Post a Comment