ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಇಲಾಖೆ ವತಿಯಿಂದ ಗುರುವಾರ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗು ಕುಂದುಕೊರತೆ ಸಭೆಯಲ್ಲಿ ಲೋಕಾಯುಕ್ತ ನಿರೀಕ್ಷಕ ಎಚ್.ಎಸ್ ಸುರೇಶ್ ಪಾಲ್ಗೊಂಡು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಭದ್ರಾವತಿ: ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರು ಮಾಹಿತಿ ಕೇಳಿದಾಗ ಕೂಡಲೇ ಸ್ಪಂದಿಸಿದರೆ ಬಹಳಷ್ಟು ಸಮಸ್ಯೆಗಳು ಆರಂಭಿಕ ಹಂತದಲ್ಲಿಯೇ ಬಗೆಹರಿಯುತ್ತವೆ. ಅಸಮಂಜಸ ಉತ್ತರಗಳು ಹಾಗು ನಿರ್ಲಕ್ಷ್ಯದ ಕಾರಣದಿಂದ ದೂರುಗಳು ಸಲ್ಲಿಕೆಯಾಗುತ್ತವೆ ಎಂದು ಲೋಕಾಯುಕ್ತ ನಿರೀಕ್ಷಕ ಎಚ್.ಎಸ್ ಸುರೇಶ್ ಹೇಳಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಇಲಾಖೆ ವತಿಯಿಂದ ಗುರುವಾರ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗು ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಸಂಘಟನೆಗಳ ಪದಾಧಿಕಾರಿಗಳು ಕುಂದುಕೊರತೆ ಸಭೆಯಲ್ಲಿ ಸಮಸ್ಯೆ ಬಗ್ಗೆ ಚರ್ಚಿಸಬೇಕು ಹೊರತು ಭಾಷಣ ಮಾಡಬಾರದು. ಅದೇರೀತಿ ಸಾರ್ವಜನಿಕರು ಕೇಳುವ ಪ್ರಶ್ನೆಗೆ ಉತ್ತರ ನೀಡುವುದು ಅಧಿಕಾರಿಗಳ ಜವಾಬ್ದಾರಿ ಎಂದರು.
ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗು ನೌಕರರು ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ಧರಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ್, ಪೊಲೀಸ್ ವೃತ್ತ ನಿರೀಕ್ಷಕ ಜಗದೀಶ್ ಹಂಚಿನಾಳ್ ಉಪಸ್ಥಿತರಿದ್ದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಗೋಪಾಲಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಟರಾಜ್, ಕಾರ್ಮಿಕ ನಿರೀಕ್ಷಕ ಭೀಮೇಶ್, ಪೇಪರ್‌ಟೌನ್ ಪೊಲೀಸ್ ಠಾಣಾ ನಿರೀಕ್ಷಕಿ ನಾಗಮ್ಮ, ತಾಲೂಕು ವೈದ್ಯಾಧಿಕಾರಿ ಡಾ. ಎಂ.ಬಿ.ಅಶೋಕ್, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್, ಸಮುದಾಯ ಸಂಘಟನಾಧಿಕಾರಿ ಸುಹಾಸಿನಿ, ಉಪ ತಹಸೀಲ್ದಾರ್ ರಾಧಾಕೃಷ್ಣ ಭಟ್, ಕಂದಾಯ ಇಲಾಖೆ ಕಂದಾಯ ನಿರೀಕ್ಷಕ ಪ್ರಶಾಂತ್, ಎನ್.ಎಂ ಬಸವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
No comments:
Post a Comment