Saturday, December 23, 2023

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಕೊಡುಗೆ ಅಪಾರ : ಎಸ್. ಮಧುಬಂಗಾರಪ್ಪ

ಭದ್ರಾವತಿ ತಾಲೂಕಿನ ಯರೇಹಳ್ಳಿಯಲ್ಲಿ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೮೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಶಾಲೆಯ ಹಳೇಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧುಬಂಗಾರಪ್ಪ ಅವರಿಗೆ ಶಿಕ್ಷಕರ ವಿವಿಧ ಸಂಘಟನೆಗಳ ವತಿಯಿಂದ ಮನವಿ ಸಲ್ಲಿಸಲಾಯಿತು.
    ಭದ್ರಾವತಿ: ಸರ್ಕಾರಿ ಶಾಲೆಗಳ ಅಭಿವೃದ್ದಿಯಲ್ಲಿ ಆ ಶಾಲೆಯಲ್ಲಿ ಓದಿದ ಹಿರಿಯ ವಿದ್ಯಾರ್ಥಿಗಳ ಕೊಡುಗೆಯೂ ಪ್ರಮುಖವಾಗಿದ್ದು,  ಓದಿದ ಶಾಲೆಯ ಅಭಿವೃದ್ಧಿಗೆ ಶ್ರಮಿಸುವುದು ಸಹ ಸೇವೆಯೇ ಆಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧುಬಂಗಾರಪ್ಪ ಹೇಳಿದರು.
    ಅವರು ಶನಿವಾರ ತಾಲೂಕಿನ ಯರೇಹಳ್ಳಿಯಲ್ಲಿ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೮೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಶಾಲೆಯ ಹಳೇಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
    ಮುಂಬರುವ ವರ್ಷದಲ್ಲಿ ಇಡೀ ರಾಜ್ಯದಲ್ಲಿ ೧ ರಿಂದ ೭ನೇ ತರಗತಿವರೆಗಿನ ಯಾವ ಮಕ್ಕಳು ಸಹ ಕೆಳಗೆ ನೆಲದ ಮೇಲೆ ಕೂರದಂತೆ ಸಕಲ ವಿದ್ಯಾರ್ಥಿಗಳಿಗೂ ಆಸನದ ವ್ಯವಸ್ಥೆ ಒದಗಿಸಲು ಚಿಂತನೆ ನಡೆಸಿದ್ದು, ೧ ವರ್ಷ ಅವಧಿಯಲ್ಲಿ ಸಂಪೂರ್ಣ ಅನುಷ್ಠಾನಗೊಳಿಸುವುದಾಗಿ ಭರವಸೆ ವ್ಯಕ್ತಪಡಿಸಿದರು.
    ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಜ್ಞಾನವೇ ದೇಶದ ದೊಡ್ಡ ಆಸ್ತಿ ಎಂದು ತಿಳಿಸಿದ ಅವರು, ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಪ್ರೌಢಶಾಲೆ ಆರಂಭಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.  
    ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ತೊರೆದು ಒಟ್ಟಾಗಿ ಕೆಲಸ ನಿರ್ವಹಿಸುತ್ತೇವೆ. ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿರುವುದರಿಂದ ಮಲೆನಾಡಿನ ಸರ್ಕಾರಿ ಶಾಲೆಗಳಲ್ಲಿನ ಸಮಸ್ಯೆಗಳು ಖಂಡಿತವಾಗಿ ಬಗೆಹರಿಯುವ ವಿಶ್ವಾಸವಿದೆ ಎಂದರು.
    ಶಾಸಕ ಬಿ.ಕೆ.ಸಂಗಮೇಶ್ವರ್ ಮಾತನಾಡಿ, ಯರೇಹಳ್ಳಿ ಸರ್ಕಾರಿ ಶಾಲೆಯ ಊಟದ ಹಾಲ್ ವಿಸ್ತರಣೆಗೆ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಮಾತ್ರ ಗುಣಮಟ್ಟದ ಶಿಕ್ಷಣ ಎಂಬುದು ಪೋಷಕರ ಭ್ರಮೆ. ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಇಚ್ಛಾಶಕ್ತಿ ಇಲ್ಲದಿದ್ದರೆ ಯಾವ ಶಾಲೆಯಲ್ಲಿ ಓದಿದರೂ ಅಷ್ಟೆ ಎಂದರು.
    ವೇದಿಕೆಯಲ್ಲಿ ಜಿ.ಪಂ ಮಾಜಿ ಸದಸ್ಯ ಎಸ್. ಕುಮಾರ್, ತಹಶೀಲ್ದಾರ್ ಕೆ.ಆರ್ ನಾಗರಾಜು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್,  ಅಮೃತ ಮಹೋತ್ಸವ ಸಂಭ್ರಮಾಚರಣೆ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗು ಗ್ರಾಮದ ಮುಖಂಡರು  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಶಾಲೆಯ ಮುಖ್ಯ ಶಿಕ್ಷಕ ಕೋಗಲೂರು ತಿಪ್ಪೇಸ್ವಾಮಿ ನಿರೂಪಿಸಿದರು. ಗಾಯಕ ಹರೋನಹಳ್ಳಿ ಸ್ವಾಮಿ ಪ್ರಾರ್ಥಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಇ. ಚಂದ್ರಶೇಖರ್ ಸ್ವಾಗತಿಸಿದರು.

No comments:

Post a Comment