ಕಾಲೇಜು ವಿದ್ಯಾರ್ಥಿಗಳಿಂದ ಪತ್ರ ಬರವಣಿಗೆ, ಫೆ.೩ರಂದು ಎಚ್‌ಡಿಕೆ ಬೆಂಬಲ, ಸೇಲಂನಲ್ಲಿ ಪ್ರತಿಭಟನೆ
ಭದ್ರಾವತಿಯಲ್ಲಿ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಹೋರಾಟ ಬೆಂಬಲಿಸಿ ಕಾರ್ಖಾನೆ ಉಳಿವಿಗಾಗಿ ಕಾಲೇಜು ವಿದ್ಯಾರ್ಥಿಗಳಿಂದ ಪತ್ರ ಬರವಣಿಗೆ ನಡೆಯಿತು.
ಭದ್ರಾವತಿ, ಫೆ. ೨ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಗುರುವಾರ ೧೫ನೇ ದಿನ ಪೂರೈಸಿತು. ಹೋರಾಟಕ್ಕೆ ವಿವಿಧೆಡೆಗಳಿಂದ ಬೆಂಬಲ ವ್ಯಕ್ತವಾಗುತ್ತಿದ್ದು, ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.
ಕಾರ್ಖಾನೆ ಉಳಿವಿಗಾಗಿ ವಿದ್ಯಾರ್ಥಿಗಳಿಂದ ಪತ್ರ ಬರವಣಿಗೆ :
ಯುವ ಮುಖಂಡ ಬಿ.ಎಸ್ ಗಣೇಶ್ ಮಾರ್ಗದರ್ಶನದಲ್ಲಿ ಜೀವಸ್ವರ ಚಾರಿಟಬಲ್ ಟ್ರಸ್ಟ್ ಹಾಗು ಕುವೆಂಪು ಪ್ರವಾಸಿ ವಾಹನ ಚಾಲಕರ ಹಾಗು ಮಾಲೀಕರ ಸಂಘದ ಸಹಯೋಗದೊಂದಿಗೆ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಗು ಬೊಮ್ಮನಕಟ್ಟೆ ಸರ್.ಎಂ.ವಿ ಸರ್ಕಾರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಿಂದ 'ಸೇವ್ ವಿಐಎಸ್‌ಎಲ್, ಸೇವ್ ಭದ್ರಾವತಿ' (Save VISL, Save Bhadravathi) ಎಂಬ ಘೋಷಣೆಯ ಪತ್ರ ಬರವಣಿಗೆ ನಡೆಯಿತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗು ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಪತ್ರ ಬರೆವಣಿಗೆ ಬರೆಯುವ ಮೂಲಕ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಲಾಯಿತು.
ಜೀವಸ್ವರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಫ್ರಾನ್ಸಿಸ್, ಕಾರ್ಯದರ್ಶಿ ಪ್ರಸನ್ನ ಕುಮಾರ್, ಸತೀಶ್, ಪ್ರದೀಪ್, ವಾಸು, ಶಿವಣ್ಣ, ವೆಂಕಟ್, ಸೈಯದ್ ಅಲಿ, ರವಿ, ದಾಸ್, ಅಪ್ಪು, ಐಸಾಕ್, ವಿನ್ಸೆಂಟ್, ಚಂದ್ರಣ್ಣ ಹಾಗು ಕುವೆಂಪು ಪ್ರವಾಸಿ ವಾಹನ ಚಾಲಕರ ಹಾಗು ಮಾಲೀಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿಯಲ್ಲಿ ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿ ಫೆ.೩ರ ಶುಕ್ರವಾರ ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಶಾರದ ಅಪ್ಪಾಜಿ ಖುದ್ದಾಗಿ ಅಂಗಡಿ-ಮುಂಗಟ್ಟು, ಮನೆ ಮನೆಗಳಿಗೆ ತೆರಳಿ ಕರ ಪತ್ರಗಳನ್ನು ವಿತರಿಸುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತಿದ್ದಾರೆ.
ಬೃಹತ್ ಪ್ರತಿಭಟನೆಗೆ ಜೆಡಿಎಸ್ ಸಿದ್ದತೆ :
ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಜಾತ್ಯತೀತ ಜನತಾದಳ ಬೆಂಬಲ ವ್ಯಕ್ತಪಡಿಸಿದ್ದು, ಫೆ.೩ರ ಶುಕ್ರವಾರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಬೃಹತ್ ಪ್ರಭಟನೆಗೆ ಮುಂದಾಗಿದೆ. ಈ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನಪರಿಷತ್ ಸದಸ್ಯ ಬೋಜೇಗೌಡ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ನಗರದೆಲ್ಲೆಡೆ ಕಳೆದ ೨ ದಿನಗಳಿಂದ ಫ್ಲೆಕ್ಸ್, ಬ್ಯಾನರ್‌ಗಳು ರಾರಾಜಿಸುತ್ತಿವೆ. ಈ ನಡುವೆ ಶಾರದ ಅಪ್ಪಾಜಿ ಖುದ್ದಾಗಿ ಅಂಗಡಿ-ಮುಂಗಟ್ಟು, ಮನೆ ಮನೆಗಳಿಗೆ ತೆರಳಿ ಕರ ಪತ್ರಗಳನ್ನು ವಿತರಿಸುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು ಸಹ ಪ್ರತಿಭಟನೆ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ.
ತಮಿಳುನಾಡು ಸೇಲಂ ಕಾರ್ಖಾನೆಯಲ್ಲಿ ಪ್ರತಿಭಟನೆ:
ನಗರದ ವಿಐಎಸ್‌ಎಲ್ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಿ ಅಭಿವೃದ್ಧಿಗೊಳಿಸುವಂತೆ ಆಗ್ರಹಿಸಿ ಕಳೆದ ೨ ದಿನಗಳ ಹಿಂದೆ ತಮಿಳುನಾಡು ಸೇಲಂ ಸ್ಟೀಲ್ ಕಾರ್ಖಾನೆಯಲ್ಲಿ ಅಲ್ಲಿನ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿರುವುದು ತಿಳಿದು ಬಂದಿದೆ.
ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆಗಳನ್ನು ಖಂಡಿಸುವ ಜೊತೆಗೆ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚದಂತೆ ಆಗ್ರಹಿಸಿ ಕಾರ್ಮಿಕರ ಹಾಗು ಅವರ ಅವಲಂಬಿತರ ಹಿತಕಾಪಾಡುವಂತೆ ಒತ್ತಾಯಿಸಿದ್ದಾರೆ.
ಭದ್ರಾವತಿಯಲ್ಲಿ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ತಮಿಳುನಾಡು ಸೇಲಂ ಸ್ಟೀಲ್ ಕಾರ್ಖಾನೆಯಲ್ಲಿ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.