Saturday, June 3, 2023

ಜಾನಪದ ಕಲಾವಿದರಿಂದ ಬೀದಿ ನಾಟಕ ಪ್ರದರ್ಶನದ ಮೂಲಕ ಸ್ವಚ್ಛತೆ, ನೀರಿನ ಅರಿವು

ಭದ್ರಾವತಿ ಜನ್ನಾಪುರ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘ ನೆಹರು ಯುವ ಕೇಂದ್ರ, ಶಿವಮೊಗ್ಗ ಸಹಯೋಗದೊಂದಿಗೆ ಬೀದಿ ನಾಟಕ ಪ್ರದರ್ಶನಗಳ ಮೂಲಕ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.
    ಭದ್ರಾವತಿ, ಜೂ. ೩ : ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸುಂದರ ಪರಿಸರ ನಿರ್ಮಿಸಿಕೊಳ್ಳುವ ಹಾಗು ನೀರಿನ ಮಹತ್ವ ಹಾಗು ಸದ್ಬಳಕೆ ಕುರಿತು ಅರಿವು ಮೂಡಿಸುವಲ್ಲಿ ಜನ್ನಾಪುರ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘ ಮುಂದಾಗಿದೆ.  
    ನೆಹರು ಯುವ ಕೇಂದ್ರ, ಶಿವಮೊಗ್ಗ ಸಹಯೋಗದೊಂದಿಗೆ ಬೀದಿ ನಾಟಕ ಪ್ರದರ್ಶನಗಳ ಮೂಲಕ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಸೋಮವಾರ ಬೆಳಿಗ್ಗೆ ತಾಲೂಕು ಕಛೇರಿ ಮಿನಿ ವಿಧಾನಸೌಧದ ಆವರಣದಲ್ಲಿ  ಮಿಷನ್ ಲೈಫ್ ೨೦೨೩-೨೪ರ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಪ್ರದರ್ಶನಕ್ಕೆ ತಹಸೀಲ್ದಾರ್ ಸುರೇಶ್ ಆಚಾರ್ ಚಾಲನೆ ನೀಡಿದರು.
    ಕಲಾಸಂಘದ ಮುಖ್ಯಸ್ಥ ತಮಟೆ ಜಗದೀಶ್, ಟಿ. ರಘುನಾಯ್ಕ, ಕೆ.ಆರ್ ಆಂಜನೇಯ, ನಾಗರಾಜ್ ನೀಲ್, ಬಿ. ಪ್ರವೀಣ್ ಕುಮಾರ್, ವೈ.ಕೆ ಹನುಮಂತಯ್ಯ, ಎಸ್. ಪಂಕಜ್, ಜಿ. ದಿವಾಕರ ಸೇರಿದಂತೆ ಇನ್ನಿತರ ಕಲಾವಿದರು ಪ್ರದರ್ಶನ ಯಶಸ್ವಿಯಾಗಿ ಕೈಗೊಂಡರು.
    ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಪ್ಪ ಹಾಗೂ ರಂಗ ಕಲಾವಿದರು ಭದ್ರಾವತಿ ಸಂಘದ ಅಧ್ಯಕ್ಷ ಬಿ. ಕಮಲಕರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶಾಸಕ ಸಂಗಮೇಶ್ವರನ್ನು ಸದ್ಯಕ್ಕೆ ನಿಗಮಮಂಡಳಿಗೆ ಅಧ್ಯಕ್ಷರಾಗಿ ನೇಮಕಗೊಳಿಸಿ

ಜೂ.೪ರಂದು ಸಚಿವೆಯಾಗಿ ಮೊದಲ ಬಾರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ನಗರಕ್ಕೆ ಆಗಮನ

ಭದ್ರಾವತಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ಮಾತನಾಡಿದರು.  .
    ಭದ್ರಾವತಿ, ಜೂ. ೩: ಮುಂದಿನ ಅವಧಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದ್ದು, ಸದ್ಯಕ್ಕೆ ಯಾವುದಾದರೂ ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಸೂಕ್ತ ಸ್ಥಾನಮಾನ ನೀಡುವಂತೆ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ಮನವಿ ಮಾಡಿದರು.
    ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ೧೩೫ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಉತ್ತಮ ಆಡಳಿತ ನೀಡುವ ಭರವಸೆ ಇದ್ದು, ಈಗಾಗಲೇ ಗ್ಯಾರಂಟಿ ಕಾರ್ಡ್‌ನಲ್ಲಿ ಘೋಷಿಸಲಾಗಿದ್ದ ೫ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿದೆ ಎಂದರು.
    ಶಾಸಕರಿಗೆ ಮೊದಲ ಅವಧಿಯಲ್ಲಿಯೇ ಸಚಿವ ಸ್ಥಾನ ಸಿಗುವ ವಿಶ್ವಾಸವಿತ್ತು. ಸಾಕಷ್ಟು ಪ್ರಯತ್ನಿಸಿದರೂ ಸಹ ಈ ಬಾರಿ ಕೈತಪ್ಪಿದ್ದು, ಮುಂದಿನ ೨ನೇ ಅವಧಿಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಶಾಸಕರನ್ನು ಯಾವುದಾದರೂ ನಿಗಮ ಮಂಡಳಿಗೆ ನೇಮಕಗೊಳಿಸಿ ಸೂಕ್ತ ಸ್ಥಾನಮಾನ ನೀಡಬೇಕೆಂದರು.
    ಜೂ.೪ರಂದು ನಗರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ :
    ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ, ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬ ಸಂಬಂಧಿಕರಾದ ಲಕ್ಷ್ಮೀ ಹೆಬ್ಬಾಳ್ಕರ್‌ರವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ನಂತರ ಮೊದಲ ಬಾರಿಗೆ ಕ್ಷೇತ್ರಕ್ಕೆ ಜೂ.೪ರಂದು ಆಗಮಿಸುತ್ತಿದ್ದಾರೆ.
    ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಶಿವಕುಮಾರ್‌ರವರ ಗಾಂಧಿನಗರದ ನಿವಾಸದ ಆವರಣದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
    ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಮುಖಂಡರಾದ ಬಿ.ಕೆ ಮೋಹನ್, ಫೀರ್‌ಷರೀಫ್, ಅರುಣ್, ಎಚ್. ರವಿಕುಮಾರ್, ರಮೇಶ್, ಎಸ್.ಎನ್ ಶಿವಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ : ಪ್ರಕರಣ ದಾಖಲು

    ಭದ್ರಾವತಿ, ಜೂ. ೩: ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಕ್ಕೆ ಅಶೋಕ್ ಲೈಲ್ಯಾಂಡ್ ಗೂಡ್ಸ್ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿರುವ ಘಟನೆ ನಡೆದಿದ್ದು, ಈ ಸಂಬಂಧ ದೂರು ದಾಖಲಾಗಿದೆ.
    ಮಂಜುನಾಥ್ ಎಂಬುವರು ಜೂ.೨ರ ಮಧ್ಯಾಹ್ನ ೨.೪೫ರ ಸಮಯದಲ್ಲಿ ರಸ್ತೆ ಪಕ್ಕದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ಜಮೀನಿಗೆ ನಡೆದು ಕೊಂಡು ಹೋಗುತ್ತಿದ್ದಾಗ ಕಾಚಗೊಂಡನಹಳ್ಳಿ ಕಡೆಯಿಂದ ಬರುತ್ತಿದ್ದ ಅಶೋಕ್ ಲೈಲ್ಯಾಂಡ್ ಗೂಡ್ಸ್ ಕ್ಯಾಂಟರ್ ವಾಹನ ಯಮಹಾ ಫ್ಯಾಸಿನೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
    ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.