Monday, June 5, 2023

ಸ್ವಚ್ಛತೆ ಕಾಪಾಡಲು ಆರ್‌ಆರ್‌ಆರ್ ಕೇಂದ್ರಗಳನ್ನು ಸದ್ಬಳಕೆ ಮಾಡಿಕೊಳ್ಳಿ

ಪರಿಸರ ದಿನಾಚರಣೆ, ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಲ್ಲಿ ಪೌರಾಯುಕ್ತ ಮನುಕುಮಾರ್

ಭದ್ರಾವತಿ ನಗರಸಭೆ ವತಿಯಿಂದ ಸೋಮವಾರ ಲೈಫ್ ನನ್ನ ಸ್ವಚ್ಛ ನಗರ ಹಾಗು ವಿಶ್ವ ಪರಿಸರ ದಿನಾಚರಣೆ  ಕಾರ್ಯಕ್ರಮದ ಅಂಗವಾಗಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಇಂದಿರಾ ಕ್ಯಾಂಟೀನ್ ಬಳಿ ಮಾಜಿ ಸೈನಿಕರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
    ಭದ್ರಾವತಿ, ಜೂ. ೫ : ನಗರದಲ್ಲಿ ಸ್ವಚ್ಛತೆ ಕಾಪಾಡಲು ಮರುಬಳಕೆ ಮಾಡಿಕೊಳ್ಳಬಹುದಾದ ತ್ಯಾಜ್ಯ ವಸ್ತುಗಳನ್ನು ನಗರಸಭೆ ವತಿಯಿಂದ ಸಂಗ್ರಹಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ನಗರದ ೫ ಭಾಗಗಳಲ್ಲಿ ಆರ್‌ಆರ್‌ಆರ್ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳುವಂತೆ ಪೌರಾಯುಕ್ತ ಮನುಕುಮಾರ್ ಹೇಳಿದರು.
    ಅವರು ಸೋಮವಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಲೈಫ್ ನನ್ನ ಸ್ವಚ್ಛ ನಗರ ಹಾಗು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮರುಬಳಕೆ ಮಾಡಿಕೊಳ್ಳಬಹುದಾದ ಬಟ್ಟೆ, ದಿನಪತ್ರಿಕೆ, ಪುಸ್ತಕ, ಆಟಿಕೆ ಸಾಮಗ್ರಿಗಳು ಮತ್ತು ಪ್ಲಾಸ್ಟಿಕ್ ಕವರ್‌ಗಳು ಸೇರಿದಂತೆ ೬ ಬಗೆಯ ತ್ಯಾಜ್ಯಗಳನ್ನು ನಗರಸಭೆ ವತಿಯಿಂದ ಸಂಗ್ರಹಿಸಲಾಗುತ್ತಿದೆ. ಇದರಿಂದ ಹೆಚ್ಚಿನ ಅನುಕೂಲವಾಗಲಿದ್ದು, ಸಾರ್ವಜನಿಕರು ಹೆಚ್ಚು ಹೆಚ್ಚು ಮರುಬಳಕೆ ಮಾಡಿಕೊಳ್ಳಬಹುದಾದ ತ್ಯಾಜ್ಯ ನೀಡಿದ್ದಲ್ಲಿ ಅಂತಹವರಿಗೆ ಪ್ರೋತ್ಸಾಹಕವಾಗಿ ನಗರಸಭೆ ವತಿಯಿಂದ ತಯಾರಿಸಲಾಗುತ್ತಿರುವ ೧ ಕೆ.ಜಿ ಗೊಬ್ಬರ ಉಚಿತವಾಗಿ ನೀಡಲಾಗುವುದು ಎಂದರು.
    ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಇಂದಿರಾ ಕ್ಯಾಂಟೀನ್ ಬಳಿ ಮಾಜಿ ಸೈನಿಕರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಇದಕ್ಕೂ ಮೊದಲು ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಸಹಿ ಅಭಿಯಾನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
    ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರಸಭೆ ಮುಂಭಾಗದ ಉದ್ಯಾನವನದಲ್ಲಿ ಸಸಿಗಳನ್ನು ನೆಡಲಾಯಿತು. ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು. ಸಸಿಗಳನ್ನು ನೆಟ್ಟು ಪೋಷಿಸುವಂತೆ ಕರೆ ನೀಡಲಾಯಿತು.
    ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ಸದಸ್ಯರಾದ ಲತಾ ಚಂದ್ರಶೇಖರ್, ಚನ್ನಪ್ಪ, ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.


ಭದ್ರಾವತಿ ನಗರಸಭೆ ವತಿಯಿಂದ ಸೋಮವಾರ ಲೈಫ್ ನನ್ನ ಸ್ವಚ್ಛ ನಗರ ಹಾಗು ವಿಶ್ವ ಪರಿಸರ ದಿನಾಚರಣೆ  ಕಾರ್ಯಕ್ರಮದ ಅಂಗವಾಗಿ ನಗರಸಭೆ ಮುಂಭಾಗದ ಉದ್ಯಾನವನದಲ್ಲಿ ಸಸಿಗಳನ್ನು ನೆಡಲಾಯಿತು.