Monday, July 24, 2023

ಸುಜ್ಞಾನನಿಧಿ ವಿದ್ಯಾರ್ಥಿ ವೇತನ : ವೃತ್ತಿಪರ ವಿದ್ಯಾರ್ಥಿಗಳಿಗೆ ಆಶಾಕಿರಣ

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಶಂಸೆ  

ಭದ್ರಾವತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ -೨ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಉದ್ಘಾಟಿಸಿದರು.
    ಭದ್ರಾವತಿ, ಜು. ೨೪:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಜ್ಞಾನನಿಧಿ ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳ ಪಾಲಿಗೆ ಆಶಾ ಕಿರಣವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಶಂಸೆ ವ್ಯಕ್ತಪಡಿಸಿದರು.
    ಅವರು ಸೋಮವಾರ  ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ -೨ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಯೋಜನೆ ವತಿಯಿಂದ ವಿದ್ಯಾರ್ಥಿಗಳ ನೆರವಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿರುವುದು ಸಮಾಜದಲ್ಲಿ ಉತ್ತಮ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಇವುಗಳ ಸದುಪಯೋಗಪಡೆದುಕೊಂಡು ಉತ್ತಮ ಸಾಧನೆ ಮಾಡಬೇಕೆಂದರು.
    ಯೋಜನಾಧಿಕಾರಿ ಮಾಧವಗೌಡ ಮಾತನಾಡಿ, ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗಾಗಿ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ ಜಾರಿಗೆ ತರಲಾಗಿದೆ.  ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗಡೆಯವರು ಯೋಜನೆಯ ಪ್ರಸಕ್ತ ಸಾಲಿನ ಮಾಸಿಕ ವಿದ್ಯಾರ್ಥಿ ವೇತನ  ಮಂಜೂರಾತಿ ಮಾಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಕೋರಿದರು.  
    ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಎನ್‌ ಶ್ರೀಹರ್ಷ, ಜಿಲ್ಲಾ ಜನಜಾಗೃತಿ ವೇದಿಕೆ  ಅಧ್ಯಕ್ಷ ಜಿ. ಆನಂದ ಕುಮಾರ್‌, ಸದಸ್ಯ ಆರ್. ಕರುಣಾಮೂರ್ತಿ, ಸ್ಥಳೀಯ ಒಕ್ಕೂಟದ ಅಧ್ಯಕ್ಷೆ ಕೌಸರ್‌ ಬಾನು, ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
    ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸೌಮ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜಲಪಾತದಲ್ಲಿ ಕೊಚ್ಚಿ ಹೋದ ಯುವಕ : ವಿಡಿಯೋ ವೈರಲ್‌

ಜಲಪಾತದಲ್ಲಿ ಕೊಚ್ಚಿ ಹೋದ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಎಚ್‌ ನಗರದ ಯುವಕ ಶರತ್‌ ಕುಮಾರ್‌.
    ಭದ್ರಾವತಿ, ಜು. ೨೪:  ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಎಚ್‌ ನಗರದ ಯುವಕನೋರ್ವ ಜಲಪಾತದಲ್ಲಿ ಕೊಚ್ಚಿ ಹೋಗಿದ್ದು, ಈ ದುರ್ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅಲ್ಲದೆ ಇತರರಿಗೆ ಎಚ್ಚರಿಕೆ ಗಂಟೆಯಾಗಿ ಕಂಡು ಬರುತ್ತಿದೆ.
    ಕೆ.ಎಚ್‌ ನಗರದ ಮೇಸ್ತ್ರಿ ಮುನಿಸ್ವಾಮಿ ಅವರ ಪುತ್ರ ಶರತ್‌ ಕುಮಾರ್‌(೨೩) ಭಾನುವಾರ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಜಲಪಾತದಲ್ಲಿ ಕೊಚ್ಚಿ ಹೋಗಿದ್ದು, ಈ ದೃಶ್ಯ ಮತ್ತೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸೋಮವಾರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
    ಶರತ್‌ಕುಮಾರ್‌ ತಂದೆಯ ಅಡಕೆ ತಟ್ಟೆ ತಯಾರಿಕ ಘಟಕ ನೋಡಿಕೊಳ್ಳುತ್ತಿದ್ದನು. ಕಳೆದ ೨-೩ ದಿನಗಳ ಹಿಂದೆ ಸ್ವಂತ ಕಾರಿನಲ್ಲಿ ತೆರಳಿದ್ದನು ಎನ್ನಲಾಗಿದೆ. ಈ ನಡುವೆ ಕೆ.ಎಚ್‌ ನಗರದಲ್ಲಿ ಶೋಕ  ಮನೆ ಮಾಡಿದ್ದು, ಶರತ್‌ ಕುಮಾರ್‌ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಘಟನೆ ಸಂಬಂಧ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹದ ಶೋಧಕಾರ್ಯ ಮುಂದುವರೆದಿದೆ ಎನ್ನಲಾಗಿದೆ.


ಜಲಪಾತದ ಬಳಿ ಅಪಕಾರಿ ಸ್ಥಳದಲ್ಲಿ ನಿಂತಕೊಂಡು ವೀಕ್ಷಣೆ ಮಾಡುತ್ತಿರುವ ಶರತ್‌ಕುಮಾರ್‌

ಅಮಲೋದ್ಭವಿ ಮಾತೆ ದೇವಾಲಯದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಅಭಿನಂದನೆ

ಭದ್ರಾವತಿ ನ್ಯೂಟೌನ್, ಅಮಲೋದ್ಭವಿ ಮಾತೆ ದೇವಾಲಯದಲ್ಲಿ 2022-2023ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ  ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಜು. ೨೪ :  ನಗರದ ನ್ಯೂಟೌನ್, ಅಮಲೋದ್ಭವಿ ಮಾತೆ ದೇವಾಲಯದಲ್ಲಿ 2022-2023ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ  ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಧರ್ಮಕೇಂದ್ರದ ಗುರು ಫಾದರ್ ಲ್ಯಾನ್ಸಿ ಡಿಸೋಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಪಾಲನಾ ಪರಿಷತ್ತಿನ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಕಾರ್ಯಕ್ರಮದ ಮಹತ್ವದ ತಿಳಿಸಿದರು.  
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ  ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ಮಕ್ಕಳಿಗೂ ಉಡುಗೊರೆ ನೀಡಿ
    ಪ್ರೋತ್ಸಾಹಿಸಲಾಯಿತು. ವಿಮಲಾ ಕಾರ್ಯಕ್ರಮ ನಿರೂಪಿಸಿದರು.  ಫಾದರ್ ಲ್ಯಾನ್ಸಿ ಡಿಸೋಜಾ ವಂದಿಸಿದರು.