ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಬರೆದಿರುವ ಪತ್ರ.
ಭದ್ರಾವತಿ : ಶಿವಮೊಗ್ಗ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ದೋಷಾರೋಪಣ ಪಟ್ಟಿ ಆಧಾರದ ಮೇಲೆ ಉಪವಲಯ ಅರಣ್ಯಾಧಿಕಾರಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪತ್ರ ಬರೆದು ಕೋರಿದ್ದಾರೆ.
ಉಪವಲಯ ಅರಣ್ಯಾಧಿಕಾರಿ ಸಂತೋಷ್ ರಾಠೋಡ್‌ರವರಿಗೆ ವಲಯ ಅರಣ್ಯಾಧಿಕಾರಿ ಪ್ರಭಾರ ನೀಡಿದ್ದ ಸಂದರ್ಭದಲ್ಲಿ ಜಿ.ಪಂ ವ್ಯಾಪ್ತಿಯ ವಿವಿಧ ನರ್ಸರಿ/ನೆಡುತೋಪು ಕಾಮಗಾರಿಗಳಲ್ಲಿ ಅಕ್ರಮ ಎಸಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ, ಸಾಮಾಜಿಕ ಹೋರಾಟಗಾರ ಶಿವಕುಮಾರ್‌ರವರು ೨೦೨೧ರಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅರಣ್ಯ ಪಡೆ ಮುಖ್ಯಸ್ಥರು)ಯವರಿಗೆ ದೂರು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಸೂಚಿಸಿದ್ದರು.
ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೋಷಾರೋಪಣ ಪಟ್ಟಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಲ್ಲಿಸಿದ್ದರು. ಉಪವಲಯ ಅರಣ್ಯಾಧಿಕಾರಿಗೆ ನೇಮಕಾತಿ ಪ್ರಾಧಿಕಾರ/ಶಿಸ್ತು ಪ್ರಾಧಿಕಾರ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಶಿವಮೊಗ್ಗ ವೃತ್ತರವರು ಆಗಿರುವುದರಿಂದ ತಮ್ಮ ಹಂತದಲ್ಲಿಯೇ ಆರೋಪವಿರುವ ಅಧಿಕಾರಿಯ ವಿರುದ್ಧ ಕರ್ನಾಟಕ ನಾಗರೀಕ ಸೇವೆ(ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ ೧೯೫೭ ರ ನಿಯಮ ದಂತೆ ಶಿಸ್ತುಕ್ರಮವನ್ನು ಜರುಗಿಸಲು ಕೋರಿದ್ದಾರೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಪತ್ರದ ಆಧಾರದ ಮೇಲೆ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರು ತಕ್ಷಣ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಆಗ್ರಹಿಸಿದ್ದಾರೆ.
ಭದ್ರಾವತಿ ಉಕ್ಕುಂದ ಗ್ರಾಮದ ನಿವಾಸಿ, ಸಾಮಾಜಿಕ ಹೋರಾಟಗಾರ ಶಿವಕುಮಾರ್.
No comments:
Post a Comment