Saturday, November 23, 2024

೩ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು : ವಿಜಯೋತ್ಸವ

ರಾಜ್ಯದ ೩ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಶನಿವಾರ ಭದ್ರಾವತಿಯಲ್ಲಿ ನಗರ ಹಾಗು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯೋತ್ಸವ ನಡೆಸಲಾಯಿತು. 
    ಭದ್ರಾವತಿ: ರಾಜ್ಯದ ೩ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಶನಿವಾರ ನಗರ ಹಾಗು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯೋತ್ಸವ ನಡೆಸಲಾಯಿತು. 
    ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗು ಅಭಿಮಾನಿಗಳು ನಗರದ ರಂಗಪ್ಪ ವೃತ್ತದಲ್ಲಿ ವಿಜಯೋತ್ಸವ ನಡೆಸಿದರು. ಪಕ್ಷದ ಪ್ರಮುಖರು ಮಾತನಾಡಿ, ಚನ್ನಪಟ್ಟಣ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ್, ಶಿಗ್ಗಾಂವಿ ಕ್ಷೇತ್ರದಿಂದ ಯಾಸಿರ್ ಅಹಮದ್ ಪಠಾಣ್ ಮತ್ತು ಸಂಡೂರ್ ಕ್ಷೇತ್ರದಿಂದ ಅನ್ನಪೂರ್ಣ ತುಕಾರಾಂರವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಬಿಜೆಪಿ ಹಾಗು ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ನಡೆಸಿದ ಅಪಪ್ರಚಾರಕ್ಕೆ ಕಿವಿಗೊಡದೆ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ತಕ್ಕ ಉತ್ತರ ನೀಡಿದ್ದಾರೆ ಎಂದರು.  
    ರಾಜ್ಯದ ೩ ವಿಧಾನಸಭಾ ಕ್ಷೇತ್ರಗಳ ಗೆಲುವಿನ ನಡುವೆ ಜಾರ್ಖಂಡ್ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟ ಭಾರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿದಿರುವುದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗು ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಪಕ್ಷ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಸಂಘಟಿಗೊಳ್ಳುವ ಆಶಾಭಾವನೆ ಪಕ್ಷದ ಕಾರ್ಯಕರ್ತರಲ್ಲಿ ಮೂಡಿಸಿದೆ ಎಂದರು. 
    ಪಕ್ಷದ ನಗರ ಘಟಕದ ಅಧ್ಯಕ್ಷ ಎಸ್.ಕುಮಾರ್, ಪ್ರಧಾನ ಕಾರ್ಯದರ್ಶಿ ಸಿ.ಜಯಪ್ಪ ಹೆಬ್ಬಳಗೆರೆ, ಪ್ರಮುಖರಾದ ಚನ್ನಪ್ಪ, ಬಿ. ಗಂಗಾಧರ್, ಕೆ. ಮಂಜುನಾಥ್, ಅಮೀರ್ ಜಾನ್,  ಜಹೀರ್‌ಜಾನ್, ಮುಸ್ವೀರ್ ಬಾಷಾ, ಕುಮಾರ್(ಮಾಸ್ಟರ್), ಬಷೀರ್ ಅಹಮದ್, ಜುಂಜ್ಯಾನಾಯ್ಕ, ಎಂ. ಅನಸೂಯ, ಕೆ. ರುಕ್ಮಿಣಿ, ಅರುಣ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.  
    ಗೆಲುವು ಸಾಧಿಸಿದ ೩ ಅಭ್ಯರ್ಥಿಗಳಿಗೆ ಶಾಸಕರಿಂದ ಅಭಿನಂದನೆ : 
    ಚನ್ನಪಟ್ಟಣ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ್, ಶಿಗ್ಗಾಂವಿ ಕ್ಷೇತ್ರದಿಂದ ಯಾಸಿರ್ ಅಹಮದ್ ಪಠಾಣ್ ಮತ್ತು ಸಂಡೂರ್ ಕ್ಷೇತ್ರದಿಂದ ಅನ್ನಪೂರ್ಣ ತುಕಾರಾಂರವರು ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಹೆಚ್ಚಿನ ಶಕ್ತಿ ಬಂದಿದ್ದು, ಗೆಲುವು ಸಾಧಿಸಿರುವ ೩ ಅಭ್ಯರ್ಥಿಗಳಿಗೂ ಅಭಿನಂದನೆ ಸಲ್ಲಿಸುವುದಾಗಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದ್ದಾರೆ. 
    ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗು ಅಭಿಮಾನಿಗಳು ಮತ್ತು ಮತ ನೀಡಿದ ೩ ಕ್ಷೇತ್ರಗಳ ಮತದಾರರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.  

No comments:

Post a Comment