ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ನಗರದ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ: ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
ರಥೋತ್ಸವದ ಅಂಗವಾಗಿ ಬೆಳಿಗ್ಗೆ ಗಣಪತಿ ಪೂಜೆ, ಪುಣ್ಯಾಹ ಪ್ರಧಾನ ಹೋಮ ಜರುಗಿದವು. ನಂತರ ರಥಶುದ್ಧಿ, ಬಲಿಪೂರ್ವಕ ಶ್ರೀ ಸ್ವಾಮಿಯ ರಥೋತ್ಸವ ಮಧ್ಯಾಹ್ನ ೧೨.೩೦ಕ್ಕೆ ಜರುಗಿತು. ಸುಮಾರು ೩೦ ನಿಮಿಷ ನಾದಸ್ವರ ಸೇರಿದಂತೆ ಕಲಾತಂಡಗಳೊಂದಿಗೆ ಸ್ವಾಮಿಯ ರಥೋತ್ಸವದ ರಾಜಬೀದಿ ಉತ್ಸವ ಮೆರವಣಿಗೆ ನಡೆಯಿತು. ಮೆರವಣಿಗೆ ಆರಂಭಗೊಳ್ಳುತ್ತಿದ್ದು, ಭಕ್ತರು ಸ್ವಾಮಿಗೆ ಜೈಕಾರ ಹಾಕುವ ಮೂಲಕ ಸಂಭ್ರಮಿಸಿದರು.
ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ ವಿತರಣೆ ನಡೆಯಿತು. ಅಲ್ಲದೆ ಪ್ರತಿ ವರ್ಷದಂತೆ ಈ ಬಾರಿ ಸಹ ಸೇವಾಕರ್ತರಾದ ಎಚ್.ಸಿ ದಾಸೇಗೌಡ ಅವರಿಂದ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನ ಸೇವಾ ಸಮಿತಿ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.
No comments:
Post a Comment