Sunday, December 22, 2024

ಕಸಾಪ ಮನವಿಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಪೂರಕ ಸ್ಪಂದನೆ

ವಿಐಎಸ್‌ಎಲ್ ಕಾರ್ಖಾನೆ ೧೫ ಸಾವಿರ ಕೋ. ರು. ಬಂಡವಾಳ ಹೂಡುವ ಭರವಸೆ 

ಮಂಡದಲ್ಲಿ ಆಯೋಜಿಸಲಾಗಿದ್ದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಪಾಲ್ಗೊಂಡಿದ್ದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರು ಮಾತನಾಡಿ, ಭದ್ರಾವತಿ ಸರ್ ಎಂ. ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಸುಮಾರು ರು.೧೫,೦೦೦ ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದರು.
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿ ಪಡಿಸುವ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್‌ರವರು ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿಯವರಿಗೆ ಸಲ್ಲಿಸಿದ್ದ ಮನವಿಗೆ ಕೇಂದ್ರ ಉಕ್ಕು ಹಾಗು ಬೃಹತ್ ಕೈಗಾರಿಕೆ ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಪೂರಕವಾಗಿ ಸ್ಪಂದಿಸಿದ್ದು, ಕಾರ್ಖಾನೆಗೆ ಅಗತ್ಯವಿರುವ ಸುಮಾರು ೧೫,೦೦೦ ಕೋಟಿ ರು. ಬಂಡವಾಳ ತೊಡಗಿಸುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ. 
    ಮಂಡದಲ್ಲಿ ಆಯೋಜಿಸಲಾಗಿದ್ದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಪಾಲ್ಗೊಂಡಿದ್ದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರು ಮಾತನಾಡಿ, ಸರ್ ಎಂ. ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಸುಮಾರು ರು.೧೫,೦೦೦ ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದರು.
    ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಆ ನಿಟ್ಟಿನಲ್ಲಿಯೇ ವಿಐಎಸ್‌ಎಲ್ ಕಾರ್ಖಾನೆಗೆ ಮರುಜೀವ ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.
    ಮೈಸೂರು ಮಹಾ ಸಂಸ್ಥಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಭಾರತ ರತ್ನ ಸರ್ ಎಂ ವಿಶ್ವೇಶ್ವರಾಯ ಅವರ ದೂರದೃಷ್ಟಿಯ ಫಲವಾಗಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಸ್ಥಾಪನೆ ಮಾಡಲಾಗಿತ್ತು. ಇದರಿಂದ ಸಾವಿರಾರು ಜನರಿಗೆ ಉದ್ಯೋಗ ಲಭಿಸಿತ್ತು. ಲಕ್ಷಾಂತರ ಜನರು ಪರೋಕ್ಷವಾಗಿ ಬದುಕು ಕಟ್ಟಿಕೊಂಡಿದ್ದರು. ಇಂತಹ ವೈಭವದ ದಿನಗಳು ಮರುಕಳಿಸುವ ದಿನಗಳು ದೂರವಿಲ್ಲ ಎಂದರು. 
    ಕಾರ್ಮಿಕರಿಂದ ಕೃತಜ್ಞತೆ : 
    ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರಿಗೆ ಕಾರ್ಖಾನೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಿ ಅವರ ಗಮನ ಸೆಳೆದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ, ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷ ಕೋಡ್ಲುಯಜ್ಞಯ್ಯ ಸೇರಿದಂತೆ ಪರಿಷತ್ ಪ್ರಮುಖರಿಗೆ ವಿಐಎಸ್‌ಎಲ್ ಗುತ್ತಿಗೆ ಹಾಗು ನಿವೃತ್ತ ಕಾರ್ಮಿಕರು ಕೃತಜ್ಞತೆ ಸಲ್ಲಿಸಿದ್ದಾರೆ. 
    ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ರಾಕೇಶ್, ನಿವೃತ್ತ ನಿವೃತ್ತ ನೌಕರರ ನರಸಿಂಹಚಾರ್ ಸೇರಿದಂತೆ ಗುತ್ತಿಗೆ ಹಾಗು ನಿವೃತ್ತ ಕಾರ್ಮಿಕರು ಕಾರ್ಖಾನೆ ಅಭಿವೃದ್ಧಿಪಡಿಸುವ ಸಂಬಂಧ ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ ಪೂರಕವಾಗಿ ಸ್ಪಂದಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 

1 comment:

  1. ಸರ್ ವಂದನೆಗಳು ಉತ್ತಮ ನಿರ್ಣಯ

    ReplyDelete