Wednesday, October 9, 2024

ವಿಶಿಷ್ಟ ವೇಷ ಭೂಷಣಗಳ ನೃತ್ಯ ಸ್ಪರ್ಧೆ : ಡಾ. ಬಿ.ಆರ್ ಅಂಬೇಡ್ಕರ್ ಮಹಿಳಾ ಸಂಘ ಪ್ರಥಮ ಸ್ಥಾನ

ಭದ್ರಾವತಿಯಲ್ಲಿ ನಾಡ ಹಬ್ಬ ದಸರಾ ಅಂಗವಾಗಿ ನಗರಸಭೆ ವತಿಯಿಂದ ಕನಕ ಮಂಟಪ ಮೈದಾನದಲ್ಲಿ ಜರುಗಿದ ಮಹಿಳಾ ದಸರಾ ಸಾಂಸ್ಕೃತಿಕ ಚಟುವಟಿಕೆ ವಿವಿಧ ವಿಶಿಷ್ಟ ವೇಷ ಭೂಷಣಗಳ ನೃತ್ಯ ಸ್ಪರ್ಧೆಗಳಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಮಹಿಳಾ ಸಂಘ ಪ್ರಥಮ ಸ್ಥಾನ ಪಡೆದುಕೊಂಡಿದೆ.
    ಭದ್ರಾವತಿ: ನಾಡ ಹಬ್ಬ ದಸರಾ ಅಂಗವಾಗಿ ನಗರಸಭೆ ವತಿಯಿಂದ ಕನಕ ಮಂಟಪ ಮೈದಾನದಲ್ಲಿ ಜರುಗಿದ ಮಹಿಳಾ ದಸರಾ ಸಾಂಸ್ಕೃತಿಕ ಚಟುವಟಿಕೆ ವಿವಿಧ ವಿಶಿಷ್ಟ ವೇಷ ಭೂಷಣಗಳ ನೃತ್ಯ ಸ್ಪರ್ಧೆಗಳಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಮಹಿಳಾ ಸಂಘ ಪ್ರಥಮ ಸ್ಥಾನ ಪಡೆದುಕೊಂಡಿದೆ.
    ವಿಶಿಷ್ಟ ವೇಷ ಭೂಷಣಗಳ ನೃತ್ಯ ಸ್ಪರ್ಧೆಗಳಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಮಹಿಳಾ ಸಂಘ ಎಲ್ಲರ ಗಮನ ಸೆಳೆಯುವ ಮೂಲಕ ಮೆಚ್ಚುಗೆಗೆ ಪಾತ್ರವಾಯಿತು.  ಪ್ರಥಮ ಸ್ಥಾನದೊಂದಿಗೆ ೪ ಸಾವಿರ ರು. ನಗದು ಹಾಗೂ ಪ್ರಶಸ್ತಿ ಪತ್ರ ತನ್ನದಾಗಿಸಿಕೊಂಡಿತು.
    ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕಂದಾಯಾಧಿಕಾರಿ ಓಂಕಾರಪ್ಪ, ಸಮುದಾಯ ಸಂಘಟನಾಧಿಕಾರಿ ಎಂ. ಸುಹಾಸಿನಿ,ನಿವೃತ್ತ ಪ್ರಾಚಾರ್ಯ ಶಿವಬಸಪ್ಪ, ಉಪನ್ಯಾಸಕಿ ಎಸ್. ಸೃಷ್ಟಿ ಸೇರಿದಂತೆ ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು. 

ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಉತ್ತಮ ಸೇವೆಗೆ ಸಹಕಾರ ನೀಡಲು ಬದ್ಧ

ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ 

ಭದ್ರಾವತಿ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಬುಧವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯವಿರುವ ವೈದ್ಯರು ಹಾಗು ಸಿಬ್ಬಂದಿಗಳನ್ನು ನೇಮಕಗೊಳಿಸುವ ಜೊತೆಗೆ ಉತ್ತಮ ಸೇವೆ ಕಲ್ಪಿಸಿಕೊಡಲು ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಾಗಿದ್ದೇನೆ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು. 
    ಅವರು ಬುಧವಾರ ಸುಮಾರು ೧.೯೫ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಹೊಸ ಕಟ್ಟಡದಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳು, ವೈದ್ಯರು ಹಾಗು ಸಿಬ್ಬಂದಿಗಳು ನೇಮಕಗೊಳಿಸುವಂತೆ ಮನವಿ ಮಾಡಲಾಗಿದೆ. ಇನ್ನೂ ಹೆಚ್ಚಿನ ಸೇವೆ ಈ ಆಸ್ಪತ್ರೆಯಿಂದ ಲಭಿಸುವಂತಾಗಬೇಕು. ಅಲ್ಲದೆ ಮುಂದಿನ ದಿನಗಳಲ್ಲಿ ಈ ಆಸ್ಪತ್ರೆಯನ್ನು ತಾಯಿ-ಮಕ್ಕಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಹಾಗು ಇಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಮತ್ತು ಸಿಬ್ಬಂದಿಗಳಿಗೆ ವಸತಿಗೃಹಗಳನ್ನು ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. 
    ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು ಮಾತನಾಡಿ, ಈ ಅಸ್ಪತ್ರೆ ನೂತನ ಕಟ್ಟಡ ಉದ್ಘಾಟನೆಗೊಳ್ಳಲು ಶಾಸಕರ ಪರಿಶ್ರಮ ಹೆಚ್ಚಿನದ್ದಾಗಿದೆ. ಅಲ್ಲದೆ ಕ್ಷೇತ್ರದಲ್ಲಿ ಪ್ರತಿಯೊಂದು ಅಭಿವೃದ್ಧಿ ಕಾರ್ಯಗಳಿಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ವೈದ್ಯರು ಹಾಗು ಸಿಬ್ಬಂದಿಗಳು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಸದ್ಬಳಕೆ ಮಾಡಿಕೊಳ್ಳಕೊಂಡು ಉತ್ತಮ ಸೇವೆ ನೀಡಬೇಕೆಂದರು. 


    ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಮಾತನಾಡಿ, ಈ ಕಟ್ಟಡ ಈ ಹಿಂದೆಯೇ ಉದ್ಘಾಟನೆಗೊಳ್ಳಬೇಕಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಶಾಸಕರ ಶ್ರಮದಿಂದ ಇದೀಗ ಉದ್ಘಾಟನೆಗೊಂಡಿದೆ. ಇದು ಶಾಸಕರು ಬಡ ವರ್ಗದ ಜನರಿಗೆ ನೀಡುತ್ತಿರುವ ಕೊಡುಗೆಯಾಗಿದೆ. ಶಿಕ್ಷಣ ಮತ್ತು ಆರೋಗ್ಯ ಪ್ರತಿಯೊಬ್ಬರಿಗೂ ಅತಿ ಅವಶ್ಯಕ ಎಂಬುದನ್ನು ಶಾಸಕರು ಸೇರಿದಂತೆ ನಮ್ಮ ಕುಟುಂಬ ವರ್ಗದವರಿಗೆ ತಿಳಿದಿದೆ. ಈ ಹಿನ್ನಲೆಯಲ್ಲಿ ಶಾಸಕರು ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದರು. 
    ಈ ವ್ಯಾಪ್ತಿಯ ನಗರಸಭೆ ಸದಸ್ಯ ಚನ್ನಪ್ಪ ನೂತನ ಕಟ್ಟಡ ನಿರ್ಮಾಣಗೊಳ್ಳಲು ಕಾರಣಕರ್ತರಾದ ಶಾಸಕರು, ಆರೋಗ್ಯ ಸಚಿವರು ಹಾಗು ಇಲಾಖೆ ಅಧಿಕಾರಿಗಳು ಹಾಗು ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು. 
    ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಹಿರಿಯ ಸದಸ್ಯ ಬಿ.ಟಿ ನಾಗರಾಜ್, ಶಶಿಕಲಾ ನಾರಾಯಣಪ್ಪ, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಎರೆಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಶಿವರಾಂ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಪಿ.ಜಿ ವಿಶ್ವನಾಥ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಸ್ವಾಗತಿಸಿದರು.