Monday, December 30, 2024

ಪ್ರಸ್ತುತ ರಾಜಕಾರಣದಲ್ಲಿ ಪಾಳೇಗಾರಿಕೆ ಸಂಸ್ಕೃತಿ : ಜಿ.ಬಿ ವಿನಯ್ ಕುಮಾರ್

ಇನ್‌ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಭದ್ರಾವತಿ ನಗರದ ಬಿ.ಎಚ್ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕುರುಬರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭದಲ್ಲಿ ವಿಶೇಷ ಸನ್ಮಾನಿತರಾಗಿ ಮಾತನಾಡಿದರು. 
    ಭದ್ರಾವತಿ : ಇಂದು ರಾಜಕಾರಣದಲ್ಲಿ ಪಾಳೇಗಾರಿಕೆ ಸಂಸ್ಕೃತಿ ವಿಜೃಂಭಿಸುತ್ತಿದ್ದು, ಎಲ್ಲೆಡೆ ಸಾಮಾನ್ಯ ಎಂಬಂತಾಗಿಬಿಟ್ಟಿದೆ. ಗಂಡ, ಹೆಂಡತಿ, ಮಕ್ಕಳು, ಸೊಸೆ, ಮೊಮ್ಮಕ್ಕಳು ರಾಜಕಾರಣದಲ್ಲಿದ್ದು, ಕುಟುಂಬದ ಅಧಿಕಾರ ಸಾಮ್ರಾಜ್ಯ ಕಟ್ಟಿಕೊಂಡಿದ್ದಾರೆ. ಈ ವ್ಯವಸ್ಥೆ ತೊಡೆದು ಹಾಕಲು ಎಲ್ಲಾ ಸಮಾಜದವರು ಬೆಂಬಲ ನೀಡಬೇಕು ಎಂದು ಇನ್‌ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಹೇಳಿದರು.
    ನಗರದ ಬಿ.ಎಚ್ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕುರುಬರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭದಲ್ಲಿ ವಿಶೇಷ ಸನ್ಮಾನಿತರಾಗಿ ಮಾತನಾಡಿದ ಅವರು, ಗುಲಾಮಗಿರಿ ಬಿಟ್ಟು ಸ್ವಾಭಿಮಾನಿಗಳಾಗಿ, ಸ್ವಾವಲಂಬಿಗಳಾಗಿ ಹೋರಾಡಬೇಕಿದೆ ಎಂದರು. 
    ಪ್ರತಿಷ್ಠೆಗೋಸ್ಕರ ಜನಪ್ರತಿನಿಧಿಗಳಾಗುತ್ತಿದ್ದಾರೆ. ಜನಸೇವೆಗೆಂದು ಬರುತ್ತಿಲ್ಲ. ಕುರುಬರು ಕುರಿ ಕಾಯಬೇಕು, ಮಡಿವಾಳರು ಬಟ್ಟೆ ಸ್ವಚ್ಚಗೊಳಿಸಬೇಕು ಎಂಬಂತೆ ಹಿಂದುಳಿದ ವರ್ಗದ ಜನರು ಹಿಂದಿನಿಂದಲೂ ಮಾಡಿಕೊಂಡು ಬಂದಿರುವ ಕಾಯಕ ಮುಂದುವರಿಸಿಕೊಂಡು ಹೋಗಬೇಕೆಂದು ರಾಜಕೀಯ ನೇತಾರರು ಅಂದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಂಭೀರ ಚಿಂತನೆ ನಡೆಸಬೇಕಾದ ಅವಶ್ಯಕತೆ ಇದೆ ಎಂದರು.
    ಕುರುಬ ಸಮಾಜದವರು ರಾಜ್ಯದಲ್ಲಿ ೬೫ ಲಕ್ಷದಷ್ಟಿದ್ದಾರೆ. ಆದರೆ ಶಾಸಕರಿರುವುದು ಕೇವಲ ೧೨ ಮಂದಿ ಮಾತ್ರ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ ಎಂದರೂ ಸಮಾಜದ ೩೦ ಶಾಸಕರು ವಿಧಾನಸೌಧಕ್ಕೆ ಆರಿಸಿ ಹೋಗಬೇಕು. ಆಗ ಮಾತ್ರ ಸಾಮಾಜಿಕ ನ್ಯಾಯ ಸಿಗಲು ಸಾಧ್ಯ ಎಂದರು.
    ಹೊಸದುರ್ಗದ ಶ್ರೀ ಕಾಗಿನೆಲೆ ಕನಕ ಗುರುಪೀಠ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಈಶ್ವರಾನಂದಪುರಿ ಮಹಾಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಂ. ಸಂತೋಷ್ ಅಧ್ಯಕ್ಷತೆ ವಹಿಸಿದ್ದರು.
    ವೇದಿಕೆಯಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಉದ್ಯಮಿ ಸಿ.ಮಹೇಶ್‌ಕುಮಾರ್, ಸಮಾಜದ ಮುಖಂಡರುಗಳಾದ ಕರಿಯಪ್ಪ, ಡಾ. ಡಿ. ಪ್ರಭಾಕರ ಬೀರಯ್ಯ, ಡಾ. ಎಚ್. ಆರ್.ನರೇಂದ್ರ, ರಾಕೇಶ್, ಹೇಮಾವತಿ, ವೈ.ರೇಣುಕಮ್ಮ, ಬಿ.ಎಚ್ ವಸಂತ, ಬಿ.ಎಸ್ ನಾಗರಾಜ್, ಬಿ.ಎಸ್.ಗೋಪಾಲ್, ಎಚ್. ರವಿಕುಮಾರ್, ಎನ್.ಸತೀಶ್, ವಿನೋದ್‌ಕುಮಾರ್, ಸಣ್ಣಯ್ಯ, ಕೇಶವ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 

ಜ.೨ರವರೆಗೆ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ

ಭದ್ರಾವತಿ ನಗರದ ಬಿ.ಎಚ್ ರಸ್ತೆ, ಮೀನುಗಾರರ ಬೀದಿಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ ಜ.೨ರವರೆಗೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಸೋಮವಾರ ಬೆಳಿಗ್ಗೆ ಭದ್ರಾ ನದಿಯಿಂದ ತೀರ್ಥ ಕೊಡ ತೆಗೆದುಕೊಂಡು ಅಮ್ಮನವರ ಗರ್ಭಗುಡಿಗೆ ಅಭಿಷೇಕ ನಡೆಸಲಾಯಿತು. 

   ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಮೀನುಗಾರರ ಬೀದಿಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ ಜ.೨ರವರೆಗೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಸೋಮವಾರ ಬೆಳಿಗ್ಗೆ ಭದ್ರಾ ನದಿಯಿಂದ ತೀರ್ಥ ಕೊಡ ತೆಗೆದುಕೊಂಡು ಅಮ್ಮನವರ ಗರ್ಭಗುಡಿಗೆ ಅಭಿಷೇಕ ನಡೆಸಲಾಯಿತು. 
   ೩೧ರ ಮಂಗಳವಾರ ರಾತ್ರಿ ೮ ಗಂಟೆಗೆ ಭದ್ರಾ ನದಿಯಿಂದ ಶಕ್ತಿ ಕರಗ ತರುವುದು ಮತ್ತು ಅಗ್ನಿಕುಂಡ ತ್ರಿಶೂಲ ಮದ್ರೆಯೊಂದಿಗೆ ದೇವಸ್ಥಾನಕ್ಕೆ ಬಂದು ಸೇರುವ ಕಾರ್ಯಕ್ರಮ ನಡೆಯಲಿದೆ. 
   ಜ.೧ರಂದು ಬುಧವಾರ ಬೆಳಿಗ್ಗೆ ೫ ಗಂಟೆಗೆ ಪೊಂಗಲ್ ಹಾಗು ಅನ್ನಸಂತರ್ಪಣೆ ಕಾರ್ಯಕ್ರಮ ಮತ್ತು ಸಂಜೆ ೪ ಗಂಟೆಗೆ ಶ್ರೀ ಮಾರಿಯಮ್ಮ ದೇವಿಯ ರಾಜಬೀದಿ ಉತ್ಸವ ಹಾಗು ಮಹಾಮಂಗಳಾರತಿಯೊಂದಿಗೆ ಪೂಜೆ ನಡೆಯಲಿದೆ. 
    ಜ.೨ರಂದು ಗುರುವಾರ ಅಮ್ಮನವರಿಗೆ ಅರಿಶಿನ ನೀರಿನ ಅಭಿಷೇಕ ನಡೆಯಲಿದ್ದು, ಸಂಜೆ ೬ ಗಂಟೆಗೆ ರಂಸಮಂಜರಿ ಕಾರ್ಯಕ್ರಮದೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ. 
 

ಲೋಕಾಯುಕ್ತಕ್ಕೆ ೯ಕ್ಕೂ ಹೆಚ್ಚು ದೂರು ಸಲ್ಲಿಕೆ

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಸೋಮವಾರ ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಯಿತು. 
    ಭದ್ರಾವತಿ: ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಇಲಾಖೆಗೆ ಸೋಮವಾರ ಸುಮಾರು ೯ಕ್ಕೂ ಹೆಚ್ಚು ದೂರುಗಳು ಸಲ್ಲಿಕೆಯಾದವು. 
    ನಗರಸಭೆ ಸಭಾಂಗಣದಲ್ಲಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕುಂದು ಕೊರತೆಗಳ ಸಭೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ನಿರೀಕ್ಷಕ ವೀರಬಸಪ್ಪರವರಿಗೆ ತಾಲೂಕು ಆಡಳಿತ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ವಿರುದ್ಧ ದೂರುಗಳು ಸಲ್ಲಿಕೆಯಾದವು. 
    ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ದೂರು ಸಲ್ಲಿಸಿ, ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೨೮ ಕೋ.ರು ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಫುಟ್‌ಪಾತ್ ಕಾಮಗಾರಿ ವಿಳಂಬವಾಗಿದ್ದು, ಅಲ್ಲದೆ ಕಳಪೆ ಗುಣಮಟ್ಟದಿಂದ ಕೂಡಿದೆ ಇದರ ಕ್ರಮ ಕೈಗೊಳ್ಳುವಂತೆ ಹಾಗು ನಗರದಲ್ಲಿ ಅನಧಿಕೃತ ಫ್ಲೆಕ್ಸ್‌ಗಳ ಹಾವಳಿ ಹೆಚ್ಚಾಗಿದ್ದು, ಇದರ ವಿರುದ್ಧ ಸಹ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. 
    ಸಾಮಾಜಿಕ ಹೋರಾಟಗಾರ ಜನ್ನಾಪುರ ಫಿಲ್ಟರ್‌ಶೆಡ್ ನಿವಾಸಿ ಶಶಿಕುಮಾರ್ ಗೌಡ, ಶಿಕ್ಷಕನೋರ್ವನ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಶಾಲೆಯೊಂದರ ವಿರುದ್ಧ  ಕ್ರಮ ಕೈಗೊಳ್ಳುವಂತೆ ಹಾಗು ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಡೊನೇಷನ್ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದಾರೆ. 
    ಪ್ರಗತಿಪರ ಸಂಘಟನೆಗಳ ಮುಖಂಡ ಸುರೇಶ್ ದೂರು ಸಲ್ಲಿಸಿ, ಕ್ಷೇತ್ರದಲ್ಲಿ ನಡೆಯುವ ಸರ್ಕಾರಿ ಕಾಮಗಾರಿಗಳ ಸ್ಥಳದಲ್ಲಿ ಕರ್ನಾಟಕ ಪಾರದರ್ಶಕ ೨೦೧೬ರ ಕಾಯ್ದೆಯಡಿ ಕಾಮಗಾರಿ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 
    ನಗರಸಭೆ ಹಿರಿಯ ಸದಸ್ಯ ಬಿ.ಟಿ ನಾಗರಾಜ್‌ರವರು ದೂರು ಸಲ್ಲಿಸಿ, ತಮಗೆ ಸೇರಿದ ನಗರದ ಜೇಡಿಕಟ್ಟೆಯಲ್ಲಿರುವ ನಿವೇಶನದ ಜಾಗದ ಅಳತೆಯಲ್ಲಿ ೧೦ ಅಡಿ ಜಾಗ ವಂಚನೆಯಾಗಿದ್ದು, ಇದಕ್ಕೆ ಕಾರಣಕರ್ತರಾಗಿರುವ ಸರ್ವೇಯರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.  
    ಉಜ್ಜನಿಪುರ ನಗರಸಭೆ ವಾರ್ಡ್ ೨೨ವ್ಯಾಪ್ತಿಯಲ್ಲಿ ಸುಮಾರು ೩೦೦೦ ಆಶ್ರಯ ಮನೆಗಳಿಗಿದ್ದು, ಈ ಭಾಗದ ಗೊಂದಿ ನಾಲೆಯಲ್ಲಿ ಹರಿಯುತ್ತಿರುವ ನೀರಿಗೆ ತ್ಯಾಜ್ಯ ಎಸೆಯಲಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ರವಿಕುಮಾರ್ ಎಂಬುವರು ದೂರು ಸಲ್ಲಿಸಿ ಮನವಿ ಮಾಡಿದ್ದಾರೆ. 
    ಉಳಿದಂತೆ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಇದರಿಂದಾಗಿ ಕಳೆದ ೩ ವರ್ಷಗಳಿಂದ ರಥೋತ್ಸವ ನಡೆಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ನಿವಾಸಿಗಳು ಹಾಗು ಭಕ್ತರು ನಿರಾಸೆಗೊಂಡಿದ್ದು, ತಕ್ಷಣ ನಗರಸಭೆ ಆಡಳಿತ ರಸ್ತೆ ಕಾಮಗಾರಿ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ನ್ಯಾಯವಾದಿ ಸುಧೀಂದ್ರ ಮಾತನಾಡಿ, ನಗರದ ಪ್ರಮುಖ ವಾಣಿಜ್ಯ ರಸ್ತೆಯೊಂದರಲ್ಲಿ ನಿರ್ಮಿಸಲಾಗುತ್ತಿರುವ ಕಟ್ಟಡದ ಮಾಲೀಕರು ಚರಂಡಿಗೆ ಮೀಸಲಿಟ್ಟಿರುವ ಜಾಗವನ್ನು ಅತಿಕ್ರಮಿಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. 
    ಒಟ್ಟಾರೆ ೯ಕ್ಕೂ ಹೆಚ್ಚು ದೂರುಗಳು ಸಲ್ಲಿಕೆಯಾದವು. ಸಭೆಯಲ್ಲಿ ಉಪತಹಸೀಲ್ದಾರ್ ಮಂಜ್ಯಾನಾಯ್ಕ, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ತಾಲೂಕು ಕಂದಾಯ ಇಲಾಖೆ, ನಗರಸಭೆ ಹಾಗು ಇನ್ನಿತರ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.