ಭದ್ರಾವತಿ ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರು, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ. ರಾಘವೇಂದ್ರ ಉದ್ಘಾಟಿಸಿದರು.
ಭದ್ರಾವತಿ: ಯಾರು ಈ ದೇಶವನ್ನು ಸಮರ್ಥವಾಗಿ, ಸರಿದಾರಿಯಲ್ಲಿ ಕೊಂಡೊಯ್ಯುತ್ತಾರೋ ಅಂತಹ ಸರ್ಕಾರವನ್ನು ನಾವೆಲ್ಲರೂ ಸೇರಿ ರಚಿಸಿಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರು, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ. ರಾಘವೇಂದ್ರ ಹೇಳಿದರು.
ಅವರು ಶನಿವಾರ ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಈ ದೇಶದಲ್ಲಿ ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ಮತ ಚಲಾಯಿಸುವ ಹಕ್ಕು ನೀಡಿದೆ. ಈ ಹಕ್ಕು ನಾವೆಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಸರ್ಕಾರದ ರಚನೆಯಲ್ಲಿ ಪಾಲ್ಗೊಳ್ಳಬೇಕೆಂದರು.
ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ರವಿಕುಮಾರ್ ಮಾತನಾಡಿ, ಮತದಾನದ ಮಹತ್ವ ಹಾಗು ಜಾಗೃತಿ ಮೂಡಿಸುವುದು ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ದೇಶವಾಗಿದೆ. ಅದರಲ್ಲೂ ಯುವ ಮತದಾರರಲ್ಲಿ ಈ ಕುರಿತು ಹೆಚ್ಚಿನ ಅರಿವು ಮೂಡಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಚುನಾವಣೆ ಆಯೋಗ ಮುಂದಿನ ದಿನಗಳಲ್ಲಿ ಕಾಲೇಜುಗಳಲ್ಲಿ ಈ ಕಾರ್ಯಕ್ರಮ ಆಯೋಜಿಸುವುದು ಸೂಕ್ತವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಸೇವೆಗಳ ಸಮಿತಿ ಸಹ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.
ತಹಸೀಲ್ದಾರ್ ಪರುಸಪ್ಪ ಕುರುಬರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಸಹಾಯಕ ಸರ್ಕಾರಿ ಅಭಿಯೋಜಕ ವಿ. ಪ್ರಸನ್ನ ಕುಮಾರ್, ತಾಲೂಕು ಪಂಚಾಯಿತಿ ಅಧಿಕಾರಿ ಉಪೇಂದ್ರ ಬಾಬು, ಉಪ ತಹಸೀಲ್ದಾರ್ ರಾಜ್ ಅರಸು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಉಪ ತಹಸೀಲ್ದಾರ್ ಮಂಜಾನಾಯ್ಕ ಸ್ವಾಗತಿಸಿ, ಸುಮತಿ ಕಾರಂತ್ ಮತ್ತು ಸಂಗಡಿಗರು ಪ್ರಾರ್ಥಿಸಿದರು.
ಭದ್ರಾವತಿ ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ(ಸ್ಮಾರ್ಟ್ ಕಾರ್ಡ್) ವಿತರಿಸಲಾಯಿತು.
No comments:
Post a Comment