ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿರುದ್ಧ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಆರೋಪ
ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಬರೆದಿರುವ ಪತ್ರ.
ಭದ್ರಾವತಿ : ಶಿವಮೊಗ್ಗ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ದೋಷಾರೋಪಣ ಪಟ್ಟಿ ಆಧಾರದ ಮೇಲೆ ಉಪವಲಯ ಅರಣ್ಯಾಧಿಕಾರಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕೋರಿ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪತ್ರ ಬರೆದು ಸುಮಾರು ೩ ತಿಂಗಳು ಕಳೆದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಆರೋಪಿಸಿದ್ದಾರೆ.
ಉಪವಲಯ ಅರಣ್ಯಾಧಿಕಾರಿ ಸಂತೋಷ್ ರಾಠೋಡ್‌ರವರಿಗೆ ವಲಯ ಅರಣ್ಯಾಧಿಕಾರಿ ಪ್ರಭಾರ ನೀಡಿದ್ದ ಸಂದರ್ಭದಲ್ಲಿ ಜಿ.ಪಂ ವ್ಯಾಪ್ತಿಯ ವಿವಿಧ ನರ್ಸರಿ/ನೆಡುತೋಪು ಕಾಮಗಾರಿಗಳಲ್ಲಿ ಅಕ್ರಮ ಎಸಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಸಾಮಾಜಿಕ ಹೋರಾಟಗಾರ ಶಿವಕುಮಾರ್‌ರವರು ೨೦೨೧ರಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅರಣ್ಯ ಪಡೆ ಮುಖ್ಯಸ್ಥರು)ಯವರಿಗೆ ದೂರು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಸೂಚಿಸಿದ್ದರು.
ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೋಷಾರೋಪಣ ಪಟ್ಟಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಲ್ಲಿಸಿದ್ದರು. ಉಪವಲಯ ಅರಣ್ಯಾಧಿಕಾರಿಗೆ ನೇಮಕಾತಿ ಪ್ರಾಧಿಕಾರ/ಶಿಸ್ತು ಪ್ರಾಧಿಕಾರ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಶಿವಮೊಗ್ಗ ವೃತ್ತರವರು ಆಗಿರುವುದರಿಂದ ತಮ್ಮ ಹಂತದಲ್ಲಿಯೇ ಆರೋಪವಿರುವ ಅಧಿಕಾರಿಯ ವಿರುದ್ಧ ಕರ್ನಾಟಕ ನಾಗರೀಕ ಸೇವೆ(ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ ೧೯೫೭ ರ ನಿಯಮ ದಂತೆ ಶಿಸ್ತುಕ್ರಮ ಜರುಗಿಸಲು ಕೋರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ೯ ಅಕ್ಟೋಬರ್ ೨೦೨೪ರಂದು ಪತ್ರ ಬರೆದಿದ್ದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಪತ್ರದ ಆಧಾರದ ಮೇಲೆ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರು ೩ ತಿಂಗಳು ಕಳೆದರೂ ಸಹ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತನ ಧೋರಣೆ ಅನುಸರಿಸುತ್ತಿದ್ದಾರೆಂದು ಸಾಮಾಜಿಕ ಹೋರಾಟಗಾರ ಶಿವಕುಮಾರ್ ದೂರುವ ಜೊತೆಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
No comments:
Post a Comment