ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ಧಿಕೃತ, ಅನಧಿಕೃತ ಆಸ್ತಿಗಳಿಗೆ ಇ-ಖಾತಾ ಅಭಿಯಾನ ಕುರಿತು ಸಭೆ ನಡೆಯಿತು.
ಭದ್ರಾವತಿ : ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನಧಿಕೃತ ಆಸ್ತಿಗಳಿಗೆ ಖಾತಾ ನೀಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದ್ದು, ಈ ಹಿನ್ನಲೆಯಲ್ಲಿ ಇ-ಖಾತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ನಗರಸಭೆ ವ್ಯಾಪ್ತಿಯಲ್ಲಿ ಅಧಿಕೃತ ಮತ್ತು ಅನಧಿಕೃತ ಆಸ್ತಿಗಳಿಗೆ ತಂತ್ರಾಂಶದಲ್ಲಿ ಇ-ಖಾತಾ ನೀಡಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳುವಂತೆ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಮನವಿ ಮಾಡಿದರು.
ಈ ಕುರಿತು ಗುರುವಾರ ನಗರಸಭೆ ಅಧ್ಯಕ್ಷರ ಕಛೇರಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ನಗರಸಭೆ ವ್ಯಾಪ್ತಿಯಲ್ಲಿ ೧೦ ಸೆಪ್ಟಂಬರ್ ೨೦೨೪ರ ಪೂರ್ವದಲ್ಲಿ ನೋಂದಣಿಯಾದ ಅನಧಿಕೃತ ಆಸ್ತಿಗಳಿಗೆ ಇ-ಖಾತಾ ನೀಡಲು ಅವಕಾಶ ನೀಡಲಾಗಿದೆ. ಅಧಿಕೃತ ಆಸ್ತಿಗಳಿಗೆ ಎ-ರಿಜಸ್ಟರ್ ಮತ್ತು ಅನಧಿಕೃತ ಆಸ್ತಿಗಳಿಗೆ ಬಿ-ರಿಜಿಸ್ಟರ್ ನಿರ್ವಹಿಸಲಾಗುವುದು. ೧೦ ಸೆಪ್ಟಂಬರ್ ೨೦೨೪ರ ಪೂರ್ವದಲ್ಲಿ ವಹಿವಾಟು ಮಾಡಲಾದ ಅನಧಿಕೃತ ಆಸ್ತಿಗಳಿಗೆ (ಖಾಲಿ ನಿವೇಶನಗಳು ಸೇರಿ) ನಮೂನೆ ೨ಎ/೩ಎ ನೀಡಲಾಗುವುದು. ಅನಧಿಕೃತ ಆಸ್ತಿಗಳಿಗೆ ಮೊದಲನೇ ಬಾರಿಗೆ ತೆರಿಗೆಯ ಎರಡು ಪಟ್ಟು ಶುಲ್ಕ ವಿಧಿಸಲಾಗುವುದು ಎಂದರು.
ಇ-ಖಾತಾ ಪಡೆಯಲು ಸ್ವೀಕೃತವಾದ ಅರ್ಜಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಸಂಗ್ರಹಣೆ ಮಾಡಿಕೊಂಡು ೭ ದಿನಗಳೊಳಗಾಗಿ ತಂತ್ರಾಂಶದಲ್ಲಿ ನಿಗದಿಪಡಿಸಲಾಗಿರುವ ಕಾರ್ಯ ಹರಿವಿನಲ್ಲಿ ನಿರ್ವಹಿಸಿ ಇ-ಖಾತಾ ನೀಡಲಾಗುವುದು. ಇ-ಖಾತಾ ನಮೂನೆ ೨/೩ ಹಾಗು ೨ಎ/೩ಎ ನೀಡಲು ನಿಗದಿಪಡಿಸಲಾಗಿರುವ ಶುಲ್ಕ ಮಾತ್ರ ಪಾವತಿಸಬೇಕಾಗಿದೆ. ಈ ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಇ-ಖಾತಾ ಪಡೆಯಬಹುದಾಗಿದೆ ಎಂದರು.
ಅಧಿಕೃತ ಆಸ್ತಿಗೆ ಇ-ಖಾತಾ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು/ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು/ ಕಂದಾಯ ಇಲಾಖೆಯಿಂದ ೯೪ ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ ಹಾಗು ಮಾಲೀಕರ ಗುರುತಿನ ದಾಖಲೆ ಪ್ರತಿ ಸಲ್ಲಿಸಬೇಕು ಎಂದರು.
ಅನಧಿಕೃತ ಆಸ್ತಿಗೆ ಇ-ಖಾತಾ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ೧೦ ಸೆಪ್ಟಂಬರ್ ೨೦೨೪ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಗರಸಭೆ ಕಛೇರಿಯ ಕೆಲಸದ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದರು.
ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಕಂದಾಯಾಧಿಕಾರಿ ರಮೇಶ್ ಉಪಸ್ಥಿತರಿದ್ದರು.
No comments:
Post a Comment