ಗೀತಾ ರಾಜ್‌ಕುಮಾರ್
ಭದ್ರಾವತಿ : ನಗರಸಭೆ ಅಧ್ಯಕ್ಷರ ಚುನಾವಣೆ ಫೆ.೧೫ರಂದು ನಡೆಯಲಿದ್ದು, ೨ನೇ ಅವಧಿಗೂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಇದರಿಂದಾಗಿ ಈ ಹಿಂದೆ ಮೊದಲ ಅವಧಿಗೆ ಮೊದಲ ಬಾರಿಗೆ ಅಧ್ಯಕ್ಷರಾಗಿದ್ದ ಗೀತಾ ರಾಜ್‌ಕುಮಾರ್ ಪುನಃ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.
೩೫ ಸದಸ್ಯ ಬಲ ಹೊಂದಿರುವ ನಗರಸಭೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚಿನ ಸದಸ್ಯರನ್ನು ಹೊಂದುವ ಮೂಲಕ ಅಧಿಕಾರದ ಗದ್ದುಗೆ ಹಿಡಿದಿದೆ. ಮೊದಲ ಅವಧಿಯ ೩೦ ತಿಂಗಳಿಗೆ ಅಧಿಕಾರ ಹಂಚಿಕೆ ಮಾಡಿಕೊಂಡು ಗೀತಾ ರಾಜ್‌ಕುಮಾರ್, ಅನುಸುಧಾ ಮೋಹನ್ ಪಳನಿ, ಶೃತಿ ವಸಂತಕುಮಾರ್ ಮತ್ತು ಲತಾ ಚಂದ್ರಶೇಖರ್ ಒಟ್ಟು ೪ ಮಹಿಳೆಯರು ಅಧಿಕಾರ ಅನುಭವಿಸಿದ್ದರು. ೨ನೇ ಅವಧಿಗೆ ಮೀಸಲಾತಿ ಘೋಷಣೆ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಈ ಹಿನ್ನಲೆಯಲ್ಲಿ ಉಪಾಧ್ಯಕ್ಷ ಸ್ಥಾನದ ಚುನಾವಣೆ ಮಾತ್ರ ನಡೆದು ಎಂ. ಮಣಿ ಎಎನ್‌ಎಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರ ಇವರನ್ನು ಪ್ರಭಾರ ಅಧ್ಯಕ್ಷರಾಗಿ ನಿಯೋಜನೆಗೊಳಿಸಲಾಗಿತ್ತು. ನ್ಯಾಯಾಲಯದಲ್ಲಿ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನಲೆಯಲ್ಲಿ ಚುನಾವಣೆ ಘೋಷಣೆಯಾಗಿದ್ದು, ಎರಡನೇ ಅವಧಿಗೂ ಮೊದಲ ಅವಧಿಗೆ ಮೊದಲ ಬಾರಿಗೆ ಅಧ್ಯಕ್ಷರಾಗಿದ್ದ ಗೀತಾ ರಾಜ್‌ಕುಮಾರ್ ಪುನಃ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.
ಈಗಾಗಲೇ ಈ ಸಂಬಂಧ ಶಾಸಕರ ಸಮ್ಮುಖದಲ್ಲಿ ಮಾತುಕತೆ ನಡೆದು ಗೀತಾ ರಾಜ್‌ಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ. ಆದರೆ ಈ ಬಾರಿ ಅಧಿಕಾರ ಹಂಚಿಕೆ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ೨ನೇ ಅವಧಿ ಸಂಪೂರ್ಣ ಗೀತಾ ರಾಜ್‌ಕುಮಾರ್ ಅಧಿಕಾರ ಅನುಭವಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
No comments:
Post a Comment