ಶ್ರೀ ಕಾಲಭೈರವೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ನಗರದ ಬಿ.ಎಚ್ ರಸ್ತೆ, ಕಡದಕಟ್ಟೆಯಲ್ಲಿ ನಿರ್ಮಿಸಲಾಗಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿಯ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ಹಾಗು ಸ್ಥಿತಬಿಂಬ ಪ್ರತಿಷ್ಠಾಪನೆ ಹಾಗು ದೀಪಸ್ತಂಭ ಪ್ರತಿಷ್ಠಾಪನಾ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ: ಶ್ರೀ ಕಾಲಭೈರವೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ನಗರದ ಬಿ.ಎಚ್ ರಸ್ತೆ, ಕಡದಕಟ್ಟೆಯಲ್ಲಿ ನಿರ್ಮಿಸಲಾಗಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿಯ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ಹಾಗು ಸ್ಥಿತಬಿಂಬ ಪ್ರತಿಷ್ಠಾಪನೆ ಹಾಗು ದೀಪಸ್ತಂಭ ಪ್ರತಿಷ್ಠಾಪನಾ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ಜರುಗಿತು.
ಗಂಗಾಪೂಜೆ, ಗೋಪೂಜೆ, ಆಲಯ ಪ್ರವೇಶ, ಪಂಚಾಮೃತ ಅಭಿಷೇಕ, ಅಲಂಕಾರ ಪ್ರತಿಷ್ಠಾಪನಾ ಅಂಗವಾಗಿ ಪ್ರತಿಷ್ಠಾಪನಾದಿ ಮೂರ್ತಿ ಹೋಮಗಳು, ಮಹಾ ಪೂರ್ಣಾಹುತಿ, ಅಷ್ಟವದಾನ ಸೇವೆ, ಮಹಾಮಂಗಳಾರತಿ, ಬಿಂಬ ದರ್ಶನ ಮತ್ತು ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಶಿವಮೊಗ್ಗ ಬೆಕ್ಕಿನಕಲ್ಮಠ ಶ್ರೀ ಡಾ. ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ, ಚಿತ್ರದುರ್ಗ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮತ್ತು ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಮೇಷ ಲಗ್ನದಲ್ಲಿ ಶ್ರೀಗಳಿಂದ ಆಲಯ ಶಿಲಾಮಯ ದೇವಾಲಯ ಲೋಕಾರ್ಪಣೆಗೊಂಡಿತು. ನಂತರ ಜರುಗಿದ ಧಾರ್ಮಿಕ ಸಭೆಯಲ್ಲಿ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿದರು.
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ವಿಧಾನ ಪರಿಷತ್ ಮಾಜಿ ಸದಸ್ಯ, ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಹೆಗಡೆ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ಭಾರತಿ ರಾಮಕೃಷ್ಣ ಸೇರಿದಂತೆ ಇನ್ನಿತರರು ಪಾಲ್ಗೊಂಡು ಮಾತನಾಡಿದರು.
ಶ್ರೀ ಕಾಲಭೈರವೇಶ್ವರ ದೇವಸ್ಥಾನ ಮತ್ತು ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಲಕ್ಷಣ್‌ಗೌಡರು ಅಧ್ಯಕ್ಷತೆ ವಹಿಸಿದ್ದರು. ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗರಕಟ್ಟೆ ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.
ಮಧ್ಯಾಹ್ನ ಸಹಸ್ರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಭದ್ರಾವತಿ-ಶಿವಮೊಗ್ಗ ನಗರ ಹಾಗು ಗ್ರಾಮಾಂತರ ಪ್ರದೇಶಗಳಿಂದ ಭಕ್ತರು ಆಗಮಿಸಿದ್ದರು.
No comments:
Post a Comment