ಭದ್ರಾವತಿ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ, ನಗರಸಭೆ ಹಾಗು ತಾಲೂಕು ಬಂಜಾರ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಸಂತ ಸೇವಾಲಾಲ್ ಜಯಂತಿ ಆಯೋಜಿಸಲಾಗಿತ್ತು.
ಭದ್ರಾವತಿ : ಕ್ಷೇತ್ರದಲ್ಲಿ ಬಂಜಾರ ಸಮಾಜ ತಮ್ಮದೇ ಆದ ಸ್ವಂತ ಕಟ್ಟಡ ಹೊಂದುವ ಮೂಲಕ ಇತರೆ ಸಮಾಜದವರೊಂದಿಗೆ ಸರಿ ಸಮಾನವಾಗಿ ಮುನ್ನಡೆಯಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಹೇಳಿದರು.
ಶನಿವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ, ನಗರಸಭೆ ಹಾಗು ತಾಲೂಕು ಬಂಜಾರ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ತನ್ನದೇ ಆದ ಸೂರು ಇರಬೇಕೆಂಬ ಮಹಾದಾಸೆ ಇರುತ್ತದೆ. ಅದೇ ರೀತಿ ಬಂಜಾರ ಸಮಾಜಕ್ಕೂ ಸಹ ಒಂದು ಕಟ್ಟಡದ ಅಗತ್ಯವಿದೆ. ಸಮಾಜಕ್ಕೆ ನಿವೇಶನ ಕಲ್ಪಿಸಿಕೊಡುವಲ್ಲಿ ಶಾಸಕರ ಪ್ರಯತ್ನ ಹೆಚ್ಚಿನದ್ದಾಗಿದ್ದು, ಅಲ್ಲದೆ ಸ್ವಂತ ಕಟ್ಟಡ ಹೊಂದಲು ಸರ್ಕಾರದಿಂದ ೨ ಕೋ. ರು. ಅನುದಾನ ಸಹ ಬಿಡುಗಡೆಯಾಗಲಿದೆ. ಮುಂದಿನ ದಿನಗಳಲ್ಲಿ ಸಮಾಜದವರು ಇನ್ನೂ ಹೆಚ್ಚಿನ ರೀತಿಯಲ್ಲಿ ಒಗ್ಗಟ್ಟಾಗಿ ಕಟ್ಟಡ ನಿರ್ಮಿಸಲು ಮುಂದಾಗಬೇಕೆಂದರು.
ಯಾವುದೇ ಕೆಲಸ ಅಸಾಧ್ಯವಲ್ಲ. ಗುರಿ ಮುಟ್ಟುವ ವಿಶ್ವಾಸ ಪ್ರತಿಯೊಬ್ಬರಲ್ಲೂ ಇರಬೇಕು. ದೊಡ್ಡ ಸಮಾಜವಿರಲಿ, ಸಣ್ಣ ಸಮಾಜವಿರಲಿ ಆಗ ಮಾತ್ರ ಗುರಿ ಮುಟ್ಟಲು ಸಾಧ್ಯ. ಸಮಾಜಕ್ಕೆ ಸ್ವಂತ ಕಟ್ಟಡವಿದ್ದಲ್ಲಿ ಹೆಚ್ಚಿನ ಅನುಕೂಲವಾಗಲಿದೆ. ಸಮಾಜದ ಪ್ರತಿಯೊಬ್ಬರೂ ಸಹ ಅದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದರು.
ತಾಲೂಕು ಬಂಜಾರ ಸಮಾಜದ ಅಧ್ಯಕ್ಷ ಪ್ರೇಮ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಪಾರ್ವತಿ ಬಾಯಿ, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಮುಖಂಡರಾದ ಜುಂಜ್ಯಾನಾಯ್ಕ, ಕೋಕಿಲ ಬಾಯಿ, ಟಿ. ವೆಂಕಟೇಶ್, ದಶರಥಗಿರಿ, ಉಪತಹಸೀಲ್ದಾರ್ ಮಂಜಾನಾಯ್ಕ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment