Thursday, March 6, 2025

೪ ದಶಕಗಳ ಹೋರಾಟಕ್ಕೆ ಇದೀಗ ಫಲ : ಶೀಘ್ರದಲ್ಲಿಯೇ ಉದ್ಘಾಟನೆಗೊಳ್ಳಲಿದೆ ಡಾ.ಬಿ.ಆರ್ ಅಂಬೇಡ್ಕರ್ ಭವನ

ಭದ್ರಾವತಿ ಹಳೇನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನ. 
* ಅನಂತಕುಮಾರ್
     ಭದ್ರಾವತಿ: ಕ್ಷೇತ್ರದಲ್ಲಿ ಸುಮಾರು ೪ ದಶಕಗಳ ಹೋರಾಟಕ್ಕೆ ಇದೀಗ ಫಲ ಲಭಿಸಿದ್ದು, ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಇದೀಗ ಬಹುತೇಕ ಪೂರ್ಣಗೊಂಡು ಉದ್ಘಾಟನೆಗೆ ಸಿದ್ದಗೊಳ್ಳುತ್ತಿದೆ. 
    ದಲಿತ ಚಳುವಳಿ ಹುಟ್ಟಿದ ನೆಲದಲ್ಲಿ ಅದರ ಮೂಲ ಪ್ರೇರಕ ಶಕ್ತಿ, ಜಗತ್ತಿನ ಶ್ರೇಷ್ಠ ಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಾ. ಬಿ.ಆರ್ ಅಂಬೇಡ್ಕರ್‌ರವರ ಭವನದ ಕನಸು ಇದೀಗ ನನಸಾಗುತ್ತಿದೆ. ಕ್ಷೇತ್ರದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಿಸಬೇಕೆಂದು ವಿವಿಧ ದಲಿತಪರ ಸಂಘಟನೆಗಳು ಸುಮಾರು ೪ ದಶಕಗಳ ಹಿಂದೆ ಆರಂಭಿಸಿದ ಹೋರಾಟ ಇದೀಗ ಅಂತ್ಯಗೊಳ್ಳುವಂತಾಗಿದೆ.
    ಆರಂಭದ ಹೋರಾಟದಲ್ಲಿ ಜಯ ಲಭಿಸಿದಾದರೂ ನಿರೀಕ್ಷೆಯಂತೆ ಸುಸಜ್ಜಿತ ಭವನ ನಿರ್ಮಾಣಗೊಳ್ಳಲಿಲ್ಲ. ಆರಂಭದಲ್ಲಿ ನಗರದ ಬಿ.ಎಚ್ ರಸ್ತೆ ಅಪ್ಪರ್ ಹುತ್ತಾ ರೈಲ್ವೆ ಕೆಳಸೇತುವೆ ಬಳಿ ಅತಿ ಚಿಕ್ಕದಾದ, ಗುಡಿಸಲಿನ ಮಾದರಿಯ ಭವನ ನಿರ್ಮಾಣಗೊಂಡಿತು. ಆದರೆ ಈ ಭವನವನ್ನು ಯಾರು ಸಹ ಅಂಬೇಡ್ಕರ್ ಭವನವೆಂದು ಸ್ವೀಕರಿಸಲು ಸಿದ್ದರಿರಲಿಲ್ಲ. ಈ ಹಿನ್ನಲೆಯಲ್ಲಿ ಈ  ಭವನ ಸುಮಾರು ೪-೫ ವರ್ಷಗಳವರೆಗೆ ಪಾಳು ಬಿದ್ದಿತ್ತು. ನಂತರದ ದಿನಗಳಲ್ಲಿ ಈ ಭವನವನ್ನು ನಗರಸಭೆ ಆಡಳಿತ ಸಾರ್ವಜನಿಕ ಗ್ರಂಥಾಲಯಕ್ಕೆ ಬಿಟ್ಟುಕೊಡುವ ಮೂಲಕ ಇದರ ನಿರ್ವಹಣೆ ಜವಾಬ್ದಾರಿಯನ್ನು ಗ್ರಂಥಾಲಯ ಇಲಾಖೆಗೆ ವಹಿಸಿದೆ.
     ಪುನಃ ಮುಂದುವರೆದ ಹೋರಾಟ : ಜಾಗ ಹುಡುಕಾಟ
    ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಪುನಃ ದಲಿತಪರ ಸಂಘಟನೆಗಳು ಹೋರಾಟ ಮುಂದುವರೆಸಿದ ಪರಿಣಾಮ ನಗರಸಭೆ ವ್ಯಾಪ್ತಿಯಲ್ಲಿ ಜಾಗ ಹುಡುಕುವ ಪ್ರಕ್ರಿಯೆ ಆರಂಭಗೊಂಡಿತು. ಮೊದಲು ಹೊಸಮನೆ ಮುಖ್ಯರಸ್ತೆಯಲ್ಲಿರುವ ಹಳೇ ಸಂತೆ ಮೈದಾನದಲ್ಲಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಸಲಾಯಿತು. ಆದರೆ ಈ ಸ್ಥಳ ಸೂಕ್ತವಲ್ಲ ಬೇರೆಡೆ ನಿರ್ಮಿಸಬೇಕೆಂದು ಒತ್ತಾಯಗಳು ಕೇಳಿ ಬಂದ ಹಿನ್ನಲೆಯಲ್ಲಿ ಕೈಬಿಡಲಾಯಿತು. ನಂತರ ಜಟ್‌ಪಟ್ ನಗರದಲ್ಲಿ ಭವನಕ್ಕೆ ಜಾಗ ಮಂಜೂರಾತಿ ಪಡೆದುಕೊಂಡರೂ ಈ ಜಾಗ ಸಹ ಸೂಕ್ತವಲ್ಲ ಎಂದು ಕೈಬಿಡಲಾಯಿತು. ಕೊನೆಯದಾಗಿ ತಾಲೂಕು ಕಚೇರಿ ರಸ್ತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗ ನಗರಸಭೆಗೆ ಸೇರಿದ ಖಾಲಿ ಜಾಗದಲ್ಲಿ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು. ೨೦೧೭ರಲ್ಲಿ ಅಂದಿನ ಶಾಸಕರಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿಯವರು ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಸುಮಾರು ೮ ವರ್ಷಗಳ ನಂತರ ಬಹುತೇಕ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಭವನ ಉದ್ಘಾಟನೆಗೊಳ್ಳಲಿದೆ.  
ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದ ಪರಿಣಾಮವಾಗಿ ಅಂಬೇಡ್ಕರ್ ಭವನದ ಕಾಮಗಾರಿ ಮುಕ್ತಾಯ ಹಂತ ತಲುಪುತ್ತಿದೆ. ಏ.೧೦ರೊಳಗೆ ಕಾಮಗಾರಿ ಕಾಮಗಾರಿ ಪೂರ್ಣಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲು ಸೂಚಿಸಲಾಗಿದೆ. ಕೊನೆಗೂ ನಮ್ಮ ಹೋರಾಟಕ್ಕೆ ಫಲ ಲಭಿಸುತ್ತಿದೆ. ನಮ್ಮ ಹೋರಾಟಕ್ಕೆ ಸ್ಪಂದಿಸಿ ಈ ನಡುವೆ ಸರ್ಕಾರದಿಂದ ಪುನಃ ೧ ಕೋ.ರು. ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ. 
        -ಬಿ.ಎನ್ ರಾಜು, ಅಧ್ಯಕ್ಷರು, ಮಾನವ ಹಕ್ಕುಗಳ ಹೋರಾಟ ಸಮಿತಿ. 
 
    ಅನುದಾನ ಬಿಡುಗಡೆಯಾದರೂ ಕಾಮಗಾರಿ ವಿಳಂಬ : 
    ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭವನ ನಿರ್ಮಿಸಲಾಗುತ್ತಿದ್ದು, ಆರಂಭದಲ್ಲಿ ಇಲಾಖೆಗೆ ಸರ್ಕಾರದಿಂದ ರು. ೧ ಕೋ. ಅನುದಾನ ಬಿಡುಗಡೆಗೊಂಡಿದ್ದು, ಈ ಅನುದಾನ ಬಳಸಿಕೊಂಡು ಮೊದಲ ಹಂತದ ಕಾಮಗಾರಿ ನಡೆಸಲಾಯಿತು. ಹೆಚ್ಚಿನ ಅನುದಾನ ಅಗತ್ಯತೆ ಹಿನ್ನಲೆಯಲ್ಲಿ ಪುನಃ ಇಲಾಖೆಗೆ ರು. ೧ ಕೋ. ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ನಗರಸಭೆ ವತಿಯಿಂದ ರು.೫೦ ಲಕ್ಷ ಬಿಡುಗಡೆಗೊಳಿಸಲಾಗಿದೆ. ಅಲ್ಲದೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರು.೩೭.೩೭ ಲಕ್ಷ ರು. ಹಾಗು ಸಂಸದರ ನಿಧಿಯಿಂದ ೨೫ ಲಕ್ಷ ರು. ಸೇರಿದಂತೆ ಒಟ್ಟು ೩.೧೨ ಕೋ. ರು. ಅನುದಾನ ಲಭ್ಯವಾದರೂ ಸಹ ಭವನ ಪೂರ್ಣಗೊಳ್ಳಲಿಲ್ಲ. ಈ ನಡುವೆ ಸರ್ಕಾರ ಹೆಚ್ಚುವರಿಯಾಗಿ ಪುನಃ ೧.೫೦ ಕೋ.ರು ಅನುದಾನ ಬಿಡುಗಡೆಗೊಳಿಸಿದ್ದು, ಆದರೂ ಸಹ ಕಾಮಗಾರಿ ಪೂರ್ಣಗೊಳಿಸುವಲ್ಲಿ ನಿರ್ಮಿತಿ ಕೇಂದ್ರ ವಿಳಂಬ ಧೋರಣೆ ಅನುಸರಿಸುತ್ತಿದ್ದು, ಈ ನಡುವೆ ಹೋರಾಟಗಳು ತೀವ್ರಗೊಂಡು ಭವನ ಕಾಮಗಾರಿ ಪೂರ್ಣಗೊಳಿಸುವಂತೆ ಎಚ್ಚರಿಸಿದ ಹಿನ್ನಲೆಯಲ್ಲಿ ಇದೀಗ ಕಾಮಗಾರಿ ಶೀಘ್ರವಾಗಿ ಮುಕ್ತಾಯಗೊಳ್ಳುವ ಲಕ್ಷಣಗಳು ಕಂಡು ಬರುತ್ತಿವೆ. ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆ ಕಳೆದ ಎರಡು ದಿನಗಳ ಹಿಂದೆ ನಿರ್ಮಿತಿ ಕೇಂದ್ರಕ್ಕೆ ಪತ್ರ ಬರೆದು ಉಳಿದಿರುವ ಕಾಮಗಾರಿ ಪೂರ್ಣಗೊಳಿಸಿ ಇಲಾಖೆಗೆ ಹಸ್ತಾಂತರಿಸುವಂತೆ ಸೂಚಿಸಿದೆ. ಬುಧವಾರದಿಂದ ಕಾಮಗಾರಿ ಆರಂಭಗೊಂಡಿದ್ದು, ಶೀಘ್ರದಲ್ಲಿಯೇ ಮುಕ್ತಾಯಗೊಳ್ಳುವ ನಿರೀಕ್ಷೆ ಇದೆ. 

No comments:

Post a Comment