ಭದ್ರಾವತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ಅಪಾಯಕಾರಿ ರೀತಿಯಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಕಟಿಸಲಾಗಿರುವ ಚಿತ್ರ.
ಭದ್ರಾವತಿ : ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ಅಪಾಯಕಾರಿ ರೀತಿಯಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಹಿನ್ನಲೆಯಲ್ಲಿ ಸ್ಥಳೀಯ ನ್ಯಾಯಾಲಯ ವಾಹನ ಮಾಲೀಕರಿಗೆ ೨೫ ಸಾವಿರ ರು. ದಂಡ ವಿಧಿಸಿದೆ.
ಕಳೆದ ಸುಮಾರು ಒಂದು ತಿಂಗಳ ಹಿಂದೆ ಸಿದ್ದರೂಢನಗರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ರಾತ್ರಿ ವೇಳೆ ಅಪಾಯಕಾರಿಯಾಗಿ ವಾಹನ ಚಾಲನೆ ಮಾಡಿದ್ದು, ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿಯ ತುಣುಕು ಶಿವಮೊಗ್ಗ ಜಿಲ್ಲಾ ಪೊಲೀಸ್ ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಪ್ರಕಟಿಸಲಾಗಿತ್ತು. ಇದನ್ನು ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಸಂಚಾರಿ ಪೊಲೀಸರಿಗೆ ಆದೇಶಿಸಿದ್ದರು.
ಈ ಹಿನ್ನಲೆಯಲ್ಲಿ ಸಂಚಾರಿ ಪೊಲೀಸರು ದಂಡ ವಿಧಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ವಾಹನ ಮಾಲೀಕರಿಗೆ ೨೫ ಸಾವಿರ ರು. ದಂಡ ವಿಧಿಸಿದ್ದಾರೆ.
ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಸಂಚಾರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕಿ ಶಾಂತಲರವರು, ಕಾನೂನು ಉಲ್ಲಂಘಿಸಿ ಅಥವಾ ಅಪಾಯಕಾರಿ ರೀತಿಯಲ್ಲಿ ವಾಹನ ಚಾಲನೆ ಮಾಡುವುದು ತಪ್ಪು. ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಯಾವುದೇ ಕಾರಣಕ್ಕೂ ಚಾಲನೆ ಮಾಡಲು ವಾಹನಗಳನ್ನು ನೀಡಬಾರದು. ಒಂದು ವೇಳೆ ಯಾರಿಗಾದರೂ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸೆರೆ ಹಿಡಿದಿರುವ ಘಟನೆಯ ದೃಶ್ಯಾವಳಿ ತುಣುಕು ಅಥವಾ ಚಿತ್ರ ಶಿವಮೊಗ್ಗ ಜಿಲ್ಲಾ ಪೊಲೀಸ್ ಸಾಮಾಜಿಕ ಜಾಲತಾಣಗಳಿಗೆ ಅಥವಾ ಹೊಸದಾಗಿ ಸ್ಥಳೀಯ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಆರಂಭಿಸಲಾಗಿರುವ ಫೇಸ್‌ಬುಕ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುವುದು. ಇತ್ತೀಚೆಗೆ ನಗರದಲ್ಲಿ ವಾಹನಗಳ ಮಿತಿ ೫೦ ಕಿ.ಲೋ. ಮೀಟರ್ ಮೀರಿದ್ದು, ಇಂತಹ ವಾಹನಗಳನ್ನು ಸ್ಪೀಡ್ ರಾಡರ್ ಗನ್ ಮೂಲಕ ಪತ್ತೆ ಹಚ್ಚಿ ೧೦೦೦ ರು. ದಂಡ ವಿಧಿಸಲಾಗುವುದು. ಸಾರ್ವಜನಿಕರು ಕಡ್ಡಾಯವಾಗಿ ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ಸ್ಥಳೀಯ ಸಂಚಾರಿ ಠಾಣೆ ಸಂಪರ್ಕಿಸುವಂತೆ ಕೋರಿದ್ದಾರೆ.
No comments:
Post a Comment