Thursday, April 17, 2025

ಪಿ.ಎಂ.ಶ್ರೀ ಯೋಜನೆಗೆ ಆಯ್ಕೆಯಾದ ತಾಲೂಕಿನ ೨ನೇ ಹಿರಿಯ ಪ್ರಾಥಮಿಕ ಶಾಲೆ

ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದ ಎದುರು ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪಕ್ಕದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 
    ಭದ್ರಾವತಿ: ಹಳೇನಗರದ ಕನಕಮಂಟಪ ಮೈದಾನದ ಎದುರು ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪಕ್ಕದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಈ ಬಾರಿ ಕೇಂದ್ರ ಸರ್ಕಾರದ ಪಿ.ಎಂ.ಶ್ರೀ ಯೋಜನೆಗೆ ಆಯ್ಕೆಯಾಗಿದೆ. 
    ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಧ್ಯೇಯದೊಂದಿಗೆ ಕೇಂದ್ರ ಸರ್ಕಾರ ಪ್ರತಿ ವರ್ಷ ತಾಲೂಕಿನಲ್ಲಿ ಒಂದೊಂದು ಶಾಲೆಯನ್ನು ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ(ಪಿ.ಎಂ.ಶ್ರೀ) ಯೋಜನೆಯಡಿ ಅಭಿವೃದ್ಧಿಪಡಿಸುತ್ತಿದೆ. ೨೦೨೩-೨೪ನೇ ಸಾಲಿನಲ್ಲಿ ತಾಲೂಕಿನ ಮೈದೊಳಲು ಗ್ರಾಮದ ಸರ್ಕಾರಿ ಶಾಲೆಯಈ ಯೋಜನೆಗೆ ಆಯ್ಕೆಯಾಗಿತ್ತು. ೨೦೨೪-೨೫ನೇ ಸಾಲಿನಲ್ಲಿ ಈ ಶಾಲೆ ಆಯ್ಕೆಯಾಗಿದೆ. 
    ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಶಾಲೆಯ ಮುಖ್ಯ ಶಿಕ್ಷಕ ಮೊಹಿದ್ದಿನ್‌ರವರು, ಈ ಶಾಲೆಯಲ್ಲಿ ಎಲ್‌ಕೆಜಿ ತರಗತಿಯಿಂದ ೮ನೇ ತರಗತಿವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಇದು ಮಾದರಿ ಶಾಲೆಯಾಗಿದ್ದು, ಕಳೆದ ವರ್ಷ ಎಲ್‌ಕೆಜಿ ಮತ್ತು ೧ನೇ ತರಗತಿಗೆ ಆಂಗ್ಲ ಮಾಧ್ಯಮ ಆರಂಭಿಸಲಾಗಿತ್ತು. ಆದರೆ ಈ ಬಾರಿ ಪ್ರಸಕ್ತ ಸಾಲಿನಲ್ಲಿ ಎಲ್‌ಕೆಜಿ, ಯುಕೆಜಿ, ೧ ಮತ್ತು ೨ ಹಾಗು ೬ ತರಗತಿಗೆ ಆಂಗ್ಲ ಮಾಧ್ಯಮ ಆರಂಭಿಸಲಾಗುವುದು ಎಂದರು.   
    ಈ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಪಿ.ಎಂ.ಶ್ರೀ ಯೋಜನೆ ಸಹಕಾರಿಯಾಗಿದೆ. ಶಾಲೆಯಲ್ಲಿ  ಸಮರ್ಪಕವಾಗಿ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಹಾಗು ಶಾಲೆಯ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಅನುದಾನ ನೆರವಾಗಲಿದೆ. ಈ ಯೋಜನೆಗೆ ತಾಲೂಕಿನ ೨೫ ರಿಂದ ೩೦ ಶಾಲೆಗಳು ಪೈಪೋಟಿ ನಡೆಸಿದ್ದವು. ಈ ಯೋಜನೆ ಪಡೆಯುವ ನಿಟ್ಟಿನಲ್ಲಿ ಅನುಸರಿಸಬೇಕಾದ ಎಲ್ಲಾ ಮಾನದಂಡಗಳನ್ನು ಈ ಶಾಲೆ ಹೊಂದಿದೆ. ಈ ಹಿನ್ನಲೆಯಲ್ಲಿ ಈ ಶಾಲೆಯನ್ನು ಕೇಂದ್ರ ಸರ್ಕಾರವೇ ನೇರವಾಗಿ ಆಯ್ಕೆ ಮಾಡಿದೆ ಎಂದರು. 
    ಈ ಶಾಲೆ ಆಯ್ಕೆಯಾಗುವಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹಾಗು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿಯವರ ಮಾರ್ಗದರ್ಶನ ಹೆಚ್ಚಿನದ್ದಾಗಿದೆ. ಪೋಷಕರು ಈ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸುವ ಮೂಲಕ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿದ್ದಾರೆ. 

No comments:

Post a Comment