ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಭದ್ರಾವತಿ ತಾಲೂಕಿನ ಮಜ್ಜಿಗೇನಹಳ್ಳಿ ಗ್ರಾಮದಲ್ಲಿ `ನಮ್ಮೂರು ನಮ್ಮ ಕೆರೆ' ಯೋಜನೆಯಡಿ ಪುನಶ್ಚೇತನಗೊಳಿಸಿದ ಮಜ್ಜಿ ಕಟ್ಟೆ ಕೆರೆ ಗ್ರಾಮಸ್ಥರಿಗೆ ಹಸ್ತಾಂತರಿಸಲಾಯಿತು.
ಭದ್ರಾವತಿ: ಕಳೆದ ಸುಮಾರು ಎರಡು ತಿಂಗಳ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ಮಜ್ಜಿಗೇನಹಳ್ಳಿ ಗ್ರಾಮದಲ್ಲಿ `ನಮ್ಮೂರು ನಮ್ಮ ಕೆರೆ' ಯೋಜನೆಯಡಿ ಮಜ್ಜಿ ಕಟ್ಟೆ ಕೆರೆ ಪುನಶ್ಚೇತನಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಇದೀಗ ಕೆರೆ ಪುನಶ್ಚೇತನಗೊಂಡು ಗ್ರಾಮಸ್ಥರಿಗೆ ಹಸ್ತಾಂತರಗೊಂಡಿದೆ. ಯೋಜನೆಗೆ ಚಾಲನೆ ನೀಡಿದ್ದ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಸಂತಸ ವ್ಯಕ್ತಪಡಿಸಿದ್ದಾರೆ.
ಶ್ರೀಗಳು ಕೆರೆ ಹಸ್ತಾಂತರ ಮತ್ತು ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯವಹಿಸಿ ಕೆರೆ ಪುನಶ್ವೇತನಗೊಂಡಿರುವ ಸಂಭ್ರಮ ಹಂಚಿಕೊಳ್ಳುವ ಜೊತೆಗೆ ಈ ನಿಟ್ಟಿನಲ್ಲಿ ಕೈಗೊಂಡ ಕಾರ್ಯಗಳನ್ನು ಸ್ಮರಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಸೇವಾ ಯೋಜನೆಗಳಿಗೆ ಪ್ರಶಂಸೆ ವ್ಯಕ್ತಪಡಿಸಿದರು.
ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೈಗೊಳ್ಳುತ್ತಿರುವ ಸಮಾಜಮುಖಿ ಕಾರ್ಯಗಳು ಅದರಲ್ಲೂ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗುತ್ತಿವೆ. ಮಹಿಳೆ ಸಬಲೀಕರಣಗೊಂಡಲ್ಲಿ ಇಡೀ ಕುಟುಂಬ ಅಭಿವೃದ್ಧಿ ಹೊಂದುತ್ತದೆ ಎಂಬ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪರಿಕಲ್ಪನೆ ನಿಜಕ್ಕೂ ಅದ್ಭುತವಾಗಿದೆ. ಈ ಹಿನ್ನಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಯೋಜನೆಯ ಜಿಲ್ಲಾ ನಿರ್ದೇಶಕ ಮುರಳಿಧರ ಶೆಟ್ಟಿ ಮಾತನಾಡಿ, ಕೆರೆ ಪುನಶ್ಚೇತನ ಕಾರ್ಯದಲ್ಲಿ ಗ್ರಾಮಸ್ಥರು ಹಾಗು ಕೆರೆ ಅಭಿವೃದ್ಧಿ ಸಮಿತಿ ಸಹಕಾರ ಸ್ಮರಿಸಿದರು. ತಾಲೂಕು ಯೋಜನಾಧಿಕಾರಿ ಪ್ರಕಾಶ್.ವೈ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಕೆರೆಯ ಸಂಪೂರ್ಣ ರೂಪರೇಷೆಯ ಬಗ್ಗೆ ಕಾಮಗಾರಿ ನಡೆದು ಬಂದ ಹಾದಿಯ ಬಗ್ಗೆ ರಚನೆಗೊಂಡ ಉತ್ತಮ ಕೆರೆಯ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ತಹಸೀಲ್ದಾರ್ ಪರುಸಪ್ಪ ಕುರುಬರ, ಕೆರೆ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಬಿ.ಎಚ್. ವಸಂತ ಹಾಗು ಅಧ್ಯಕ್ಷ ದೇವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಳಿಕಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಾಗಮ್ಮ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೇಖರ್ ನಾಯಕ್, ಮಜ್ಜಿಗೇನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಹೇಮಂತ್, ಕೈಗಾರಿಕಾ ಪ್ರದೇಶದ ಕಂಪನಿಗಳ ಮಾಲೀಕರುಗಳು., ಸೇವಾ ಪ್ರತಿನಿಧಿಗಳು. ಒಕ್ಕೂಟ ಪದಾಧಿಕಾರಿಗಳು, ಸದಸ್ಯರು. ಗ್ರಾಮಸ್ಥರಾದ ಓಂಕಾರಪ್ಪ, ಕೃಷ್ಣ ಮೂರ್ತಿ. ಆನಂದ ನಾಯ್ಕ್., ಮುರುಗೇಶ್, ಗಿರಿಯಪ್ಪ. ಗವಿಯಪ್ಪ. ಮೇಲ್ವಿಚಾರಕರಾದ ನಾಗಪ್ಪ ನಿರೂಪಿಸಿ, ಕೃಷಿ ಅಧಿಕಾರಿ ಧನಂಜಯ ಮೂರ್ತಿ ವಂದಿಸಿದರು.
No comments:
Post a Comment