ಆರ್. ವೇಣುಗೋಪಾಲ್
ಭದ್ರಾವತಿ: ನಗರದ ಜನ್ನಾಪುರ ನಗರಸಭೆ ಎನ್‌ಟಿಬಿ ಶಾಖಾ ಕಛೇರಿ ಆವರಣದಲ್ಲಿ ಮೆಸ್ಕಾಂ ವಿದ್ಯುತ್ ಬಿಲ್ ಪಾವತಿಸುವ ಕೌಂಟರ್ ಪುನಃ ಪ್ರಾರಂಭಿಸುವಂತೆ ಹಾಗು ತಾಲೂಕಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯ ಸರಿಪಡಿಸುವಂತೆ ಆಗ್ರಹಿಸಿ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ.
ಟ್ರಸ್ಟ್ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಆರ್. ವೇಣುಗೋಪಾಲ್ ಮನವಿ ಸಲ್ಲಿಸಿದ್ದು, ನಗರಸಭಾ ವ್ಯಾಪ್ತಿಯ ಜನ್ನಾಪುರ, ಎನ್.ಟಿ.ಬಿ ಕಛೇರಿ ಆವರಣದಲ್ಲಿ ಸುಮಾರು ೪೦ ವರ್ಷದಿಂದ ವಿದ್ಯುತ್ ಬಿಲ್ ಪಾವತಿಸುವ ಕೌಂಟರ್ ಕಾರ್ಯ ನಿರ್ವಹಿಸುತ್ತಿದೆ. ಈ ಕೌಂಟರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ವರ್ಗದವರು ನಿವೃತ್ತಿಗೊಂಡ ಮೇಲೆ ಕೌಂಟರ್ ಸ್ಥಗಿತಗೊಂಡಿದೆ. ಈ ಭಾಗದಲ್ಲಿ ಅನೇಕ ಕೊಳಚೆ ಪ್ರದೇಶಗಳು ಬರುತ್ತಿದ್ದು, ಇವರಲ್ಲಿ ಬಹುತೇಕ ಆನಕ್ಷರಸ್ಥರಾಗಿರುವುದರಿಂದ ಇವರುಗಳಿಗೆ ಮೊಬೈಲ್‌ನಲ್ಲಿ ವಿದ್ಯುತ್ ಬಿಲ್ ಪಾವತಿಸುವ ಬಗ್ಗೆ ತಿಳುವಳಿಕೆ ಇರುವುದಿಲ್ಲ. ನಿವಾಸಿಗಳು ವಿದ್ಯುತ್ ಬಿಲ್ ಕಟ್ಟಲು ತುಂಬಾ ದೂರ ಹೋಗಬೇಕಾಗಿದೆ. ಇವರೆಲ್ಲರೂ ಬಡತನ ರೇಖೆಗಿಂತ ಕೆಳಮಟ್ಟದಲ್ಲಿ ಜೀವನ ನಡೆಸುತ್ತಿದ್ದು, ಇವರುಗಳಿಗೆ ಮಳೆಗಾಲದಲ್ಲಿ ಹಾಗೂ ಬೇಸಿಗೆ ಕಾಲದಲ್ಲಿ ವಿದ್ಯುತ್ ಬಿಲ್ ಕಟ್ಟಲು ತುಂಬಾ ತೊಂದರೆಯಾಗುತ್ತಿದೆ ಎಂದು ಅಳಲು ತೋರ್ಪಡಿಸಿಕೊಳ್ಳಲಾಗಿದೆ.
ಈ ಭಾಗದ ನಿವಾಸಿಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಕೌಂಟರ್ ಪುನಃ ಪ್ರಾರಂಭಿಸುವುದರ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿದೆ.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂಗನಮನೆ, ತಾವರಘಟ್ಟ ಮತ್ತು ಕಂಬದಾಳು ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ಇದರಿಂದ ಗ್ರಾಮಸ್ಥರಿಗೆ, ರೈತರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸೂಕ್ತವಾದ ಜಾಗದಲ್ಲಿ ತುರ್ತಾಗಿ ಸರ್ವೀಸ್ ಸ್ಟೇಷನ್ ಕಾರ್ಯಾರಂಭ ಮಾಡುವುದರ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ.
No comments:
Post a Comment