ವಿಶ್ವ ಪರಿಸರ ದಿನಾಚರಣೆಯಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಕರೆ
ಭದ್ರಾವತಿ ನಗರಸಭೆ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆಗೆ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಭದ್ರಾವತಿ: ಪ್ರಸ್ತುತ ನಾವು ಬದುಕಲು ಶುದ್ಧ ಗಾಳಿ, ನೀರು ಮತ್ತು ಬೆಳಕಿನ ಅವಶ್ಯಕತೆ ಇದ್ದು, ಈ ಹಿನ್ನಲೆಯಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರ ಹಸಿರಿನಿಂದ ಕಂಗೊಳಿಸಬೇಕು. ಇದಕ್ಕೆ ಪೂರಕವಾಗಿ ಪ್ರತಿಯೊಬ್ಬರು ಒಂದೊಂದು ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಪೋಷಿಸಿ ಬೆಳೆಸಬೇಕೆಂದು ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಕರೆ ನೀಡಿದರು.
ಅವರು ಮಂಗಳವಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆಗೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರಸ್ತುತ ನಮ್ಮ ಸುತ್ತಮುತ್ತಲಿನ ಪರಿಸರ ಸಾಕಷ್ಟು ಹಾಳಾಗಿದ್ದು, ಇದರಿಂದಾಗಿ ನಾವುಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದೇವೆ. ಇದನ್ನು ಸರಿಪಡಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಬ್ಬರು ಒಂದೊಂದು ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಪೋಷಿಸಿದರೆ ಪರಿಸರ ಸಾಕಷ್ಟು ಸುಧಾರಣೆಯಾಗಲಿದೆ. ಈ ನಿಟ್ಟಿನಲ್ಲಿ ನಗರಸಭೆ ಆಡಳಿತ ಸಹ ಹೆಚ್ಚಿನ ಗಮನ ಹರಿಸಿದ್ದು, ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಪರಿಸರ ಸಂರಕ್ಷಿಸುವ ಕಾರ್ಯ ಕೈಗೊಳ್ಳುತ್ತಿದೆ ಎಂದರು.
ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಎಂ. ಸುಹಾಸಿನಿ ಮಾತನಾಡಿ, ಪರಿಸರ ಸಂರಕ್ಷಿಸುವ ಉದ್ದೇಶದಿಂದ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಜಂಟಿಯಾಗಿ ರೂಪಿಸಿರುವ ಯೋಜನೆಯೊಂದನ್ನು ನಗರಸಭೆ ವತಿಯಿಂದ ಅನುಷ್ಠಾನಗೊಳಿಸಲು ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಶಾಲಾ-ಕಾಲೇಜು, ಸರ್ಕಾರಿ ಕಟ್ಟಡಗಳು, ಉದ್ಯಾನವನಗಳು ಸೇರಿದಂತೆ ಖಾಲಿ ಜಾಗಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಸುಮಾರು ಎರಡು ವರ್ಷಗಳವರೆಗೆ ಪೋಷಿಸಿ ನಿರ್ವಹಣೆ ಮಾಡುವ ಮೂಲಕ ಎಲ್ಲೆಡೆ ಹಸಿರಿನಿಂದ ಕಂಗೊಳಿಸುವಂತೆ ಮಾಡಲಾಗುವುದು. ಇದಕ್ಕೆ ಪೂರಕವಾಗುವಂತೆ ಸ್ವಸಹಾಯ ಸಂಘಗಳ ಮಹಿಳೆಯರಿಗೆ ತರಬೇತಿ ನೀಡಲಾಗಿದ್ದು, ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸಹ ಕಲ್ಪಿಸಿಕೊಡಲಾಗುವುದು ಎಂದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ಬಿ.ಟಿ ನಾಗರಾಜ್, ಲತಾ ಚಂದ್ರಶೇಖರ್, ಚನ್ನಪ್ಪ, ಶಶಿಕಲಾ ನಾರಾಯಣಪ್ಪ, ಬಸವರಾಜ್ ಬಿ. ಆನೇಕೊಪ್ಪ, ಅನುಸುಧಾ ಮೋಹನ್ ಪಳನಿ, ಪ್ರಭಾರ ಪೌರಾಯುಕ್ತರಾದ ಎಂ. ಸುನಿತಾ ಕುಮಾರಿ, ಪರಿಸರ ಅಭಿಯಂತರ ಪ್ರಭಾಕರ್ ಸೇರಿದಂತೆ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಸ್ವಸಹಾಯ ಸಂಘಗಳ ಒಕ್ಕೂಟದ ಮಹಿಳೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment