Friday, June 20, 2025

ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ಸುಧಾರಣೆಗೆ ಉಚಿತ ಎಚ್‌ಪಿವಿ ಲಸಿಕಾ ಕಾರ್ಯಕ್ರಮ

ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳಿಂದ ಆಯೋಜನೆ 


ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ, ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರದಲ್ಲಿ ಶುಕ್ರವಾರ ೧೪ ರಿಂದ ೧೫ ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಉಚಿತ ಎಚ್‌ಪಿವಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 
    ಭದ್ರಾವತಿ: ದೇಶದಲ್ಲಿ ಹೆಣ್ಣು ಮಕ್ಕಳ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಎಚ್‌ಪಿವಿ ಲಸಿಕಾ ಕಾರ್ಯಕ್ರಮಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು, ಕರ್ನಾಟಕ(ಉತ್ತರ), ಶ್ರೀ ಸತ್ಯ ಸಾಯಿ ಟ್ರಸ್ಟ್, ಕರ್ನಾಟಕ ಪ್ರಿವೀವ್ ಹೆಲ್ತ್ ವತಿಯಿಂದ ಉಚಿತ ಎಚ್‌ಪಿವಿ ಲಸಿಕಾ ಕಾರ್ಯಕ್ರಮ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ತಿಳಿಸಿದರು. 
    ಅವರು ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ, ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ೧೪ ರಿಂದ ೧೫ ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಉಚಿತ ಎಚ್‌ಪಿವಿ ಲಸಿಕಾ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು. 
    ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠ ಸೇರಿದಂತೆ ಹಲವು ರೀತಿಯ ಕ್ಯಾನ್ಸರ್‌ಗಳಿಗೆ ಕಾರಣವಾಗುವ ರೋಗಾಣುಗಳ ವಿರುದ್ಧ ಹೋರಾಡಲು ಎಚ್‌ಪಿವಿ ಲಸಿಕೆ ಸಹಕಾರಿಯಾಗಿದ್ದು, ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ದೇಶ್ಯಾದ್ಯಂತ ಎಚ್‌ಪಿವಿ ಲಸಿಕೆ ಹಾಕುವ ಯೋಜನೆ ರೂಪಿಸಿಕೊಳ್ಳಲು ಮುಂದಾಗಿದೆ. ಇದಕ್ಕೆ ಪೂರಕವಾಗುವಂತೆ ಸಂಸ್ಥೆ ವತಿಯಿಂದ ಉಚಿತವಾಗಿ ಲಸಿಕೆ ಹಾಕುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಸಂಸ್ಥೆಯ ಆರ್ಥಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ಈ ಯೋಜನೆ ರೂಪಿಸಿಕೊಳ್ಳಲಾಗಿದೆ. ಒಟ್ಟಾರೆ ಹೆಣ್ಣು ಮಕ್ಕಳ ಆರೋಗ್ಯ ಸುಧಾರಿಸುವುದು ಪ್ರಮುಖ ಉದ್ದೇಶವಾಗಿದೆ ಎಂದರು. 
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಓ. ಮಲ್ಲಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಎಚ್‌ಪಿವಿ ಲಸಕಾ ಕಾರ್ಯಕ್ರಮ ಆಯೋಜಿಸುವ ನಿರೀಕ್ಷೆ ಇದೆ. ಪ್ರಸ್ತುತ ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು, ಕರ್ನಾಟಕ(ಉತ್ತರ), ಶ್ರೀ ಸತ್ಯ ಸಾಯಿ ಟ್ರಸ್ಟ್, ಕರ್ನಾಟಕ ಪ್ರಿವೀವ್ ಹೆಲ್ತ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಉಚಿತ ಲಸಿಕಾ ಕಾರ್ಯಕ್ರಮ ಹದಿಹರೆಯದ ಹೆಣ್ಣು ಮಕ್ಕಳಿಗೆ ಸಹಕಾರಿಯಾಗಿದೆ. ಕಾರ್ಯಕ್ರಮ ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದರು. 
    ಪ್ರಸ್ತುತ ಇಲಾಖೆ ವತಿಯಿಂದ ಮಳೆಗಾಲದಲ್ಲಿ ಎದುರಾಗುವ ಸಾಂಕ್ರಾಮಿಕ ರೋಗಗಳ ಬಗ್ಗೆ ಕಳೆದ ೨-೩ ತಿಂಗಳಿನಿಂದ ನಗರ ಹಾಗು ಗ್ರಾಮಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಇದರ ಜೊತೆಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಸಹ ಕೈಗೊಳ್ಳುತ್ತಿದೆ. ವೈಯಕ್ತಿಕ ಹಾಗು ಸುತ್ತಲಿನ ಪರಿಸರದಲ್ಲಿನ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ ನೀಡಲಾಗುತ್ತಿದೆ ಎಂದರು. 
    ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಪ್ರಸೂತಿ ಹಾಗು ಸ್ತ್ರೀ ರೋಗ ತಜ್ಞೆ ಡಾ. ವೀಣಾ ಭಟ್, ಶಿಕ್ಷಣ ಸಂಯೋಜಕ ಪರಮೇಶ್ವರಪ್ಪ ಸೇರಿದಂತೆ ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. 

No comments:

Post a Comment