ಗುರುವಾರ, ಜುಲೈ 17, 2025

ಸ್ತನ ಕ್ಯಾನ್ಸರ್ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದುಕೊಳ್ಳಿ : ಡಾ. ಅನುರಾಧ ಪಟೇಲ್

ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಗುರುವಾರ ರೋಟರಿ ಕ್ಲಬ್ ಸಹಯೋಗದೊಂದಿಗೆ ಶಿವಮೊಗ್ಗ ನಾರಾಯಣ ಹೃದಯಾಲಯ ವತಿಯಿಂದ ಸ್ತನ  ಕ್ಯಾನ್ಸರ್ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.  
    ಭದ್ರಾವತಿ: ಮಹಿಳೆಯರು ಸ್ತನ ಕ್ಯಾನ್ಸರ್ ಕುರಿತು ಆತಂಕಪಡುವ ಅಗತ್ಯವಿಲ್ಲ. ಅಲ್ಲದೆ ಯಾವುದೇ ರೀತಿ ಹಿಂಜರಿಕೆಗೆ ಒಳಗಾಗದೆ ಸೂಕ್ತ ಸಮಯದಲ್ಲಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವಂತೆ ನಗರದ ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಹೇಳಿದರು. 
    ನಗರದ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಗುರುವಾರ ರೋಟರಿ ಕ್ಲಬ್ ಸಹಯೋಗದೊಂದಿಗೆ ಶಿವಮೊಗ್ಗ ನಾರಾಯಣ ಹೃದಯಾಲಯ ವತಿಯಿಂದ ಏರ್ಪಡಿಸಲಾಗಿದ್ದ ಸ್ತನ  ಕ್ಯಾನ್ಸರ್ ತಪಾಸಣಾ ಶಿಬಿರದ ನೇತೃತ್ವವಹಿಸಿ ಮಾತನಾಡಿದರು. 
    ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇರಲಿ ಮಹಿಳೆಯರು ಮೊದಲು ತಮ್ಮ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು. ಮಹಿಳೆಯರು ಆರೋಗ್ಯವಂತರಾಗಿದ್ದರೆ ಕುಟುಂಬ ನೆಮ್ಮೆದಿಯಿಂದ ಇರಲು ಸಾಧ್ಯ ಎಂದರು. 
    ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು. ತಜ್ಞ ವೈದ್ಯೆ ಡಾ. ಸ್ವಾತಿ ಸ್ತನ ಕ್ಯಾನ್ಸರ್ ಕುರಿತು ಮಾಹಿತಿ ನೀಡಿ, ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಗುಣಮುಖರಾಗುವಂತೆ ಕರೆ ನೀಡಿದರು.  ರೋಟರಿ ಕ್ಲಬ್ ಅಧ್ಯಕ್ಷ ಕೆ.ಎಚ್ ಶಿವಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ಕ್ಲಬ್ ಪ್ರಮುಖರಾದ ಕೂಡ್ಲಿಗೆರೆ ಹಾಲೇಶ್, ಶ್ರೀನಿವಾಸ್, ದುಷ್ಯಂತ್‌ರಾಜ್, ಗಿರೀಶ್ ಮತ್ತು ರೋಟರಿ ಕ್ಲಬ್ ಪದಾಧಿಕಾರಿಗಳು, ನಿರ್ದೇಶಕರು, ನಾರಾಯಣ ಹೃದಯಾಲಯ ಆಸ್ಪತ್ರೆ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಗಣೇಶ್, ಶಿಬಿರದ ಸಂಯೋಜಕ ರವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ