ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಗ್ರಹ
ಭದ್ರಾವತಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಾತನಾಡಿದರು.
ಭದ್ರಾವತಿ: ನಗರದ ಹೃದಯ ಭಾಗದಲ್ಲಿ, ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪ ನಿರ್ಮಾಣಗೊಳ್ಳುತ್ತಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ತಕ್ಷಣ ಪೂರ್ಣಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಾರ್ಪಣೆಗೊಳಿಸಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಗ್ರಹಿಸಿದರು.
ಅವರು ಬುಧವಾರ ಹಳೆನಗರದ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಮಾರು ೭ ವರ್ಷಗಳ ಹಿಂದೆ ಆರಂಭಗೊಂಡ ಕಾಮಗಾರಿ ಇನ್ನೂ ಫೂರ್ಣಗೊಳಿಸದೆ ನಿರ್ಲಕ್ಷ್ಯ ವಹಿಸಲಾಗಿದೆ. ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರದ ವಿವಿಧ ಇಲಾಖೆಗಳಿಗೆ ಸಭೆ-ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಭವನದ ಅವಶ್ಯಕತೆ ಇದೆ. ಭವನ ಕಾಮಕಾರಿ ಪೂರ್ಣಗೊಳಿಸದೆ ನಿರ್ಲಕ್ಷತನವಹಿಸುತ್ತಿರುವುದು ಖಂಡನೀಯ ಎಂದರು.
ಪ್ರಪಂಚದ ಮಹಾನಾಯಕ, ೩೨ ಪದವಿಗಳನ್ನು ಪಡೆದ ಮೇಧಾವಿ ಡಾ. ಬಿ.ಆರ್ ಅಂಬೇಡ್ಕರ್‌ರವರನ್ನು ವಿಶ್ವಸಂಸ್ಥೆ ಸಹ ಗೌರವಿಸುತ್ತಿದೆ. ವಿಶ್ವಜ್ಞಾನಿ ಎಂಬ ಅಭಿಮಾನದೊಂದಿಗೆ ಪ್ರಪಂಚದ ಎಲ್ಲಾ ದೇಶಗಳು ಏ. ೧೪ರಂದು ಅಂಬೇಡ್ಕರ್‌ರವರನ್ನು ಸ್ಮರಿಸುತ್ತಿವೆ. ಇಂತಹ ಮಹಾನ್ ವ್ಯಕ್ತಿಗೆ ದಲಿತ ಚಳುವಳಿ ಹುಟ್ಟಿದ ನೆಲದಲ್ಲಿ ಪದೇ ಪದೇ ಅಪಮಾನಗೊಳಿಸಲಾಗುತ್ತಿದೆ. ಅಂಬೇಡ್ಕರ್‌ರವರಿಗೆ ಗೌರವ ನೀಡುವ ನಿಟ್ಟಿನಲ್ಲಿ ತಕ್ಷಣ ಕಾಮಗಾರಿ ಪೂರ್ಣಗೊಳಿಸಿ ಭವನ ಲೋಕಾರ್ಪಣೆಗೊಳಿಸಬೇಕೆಂದು ಒತ್ತಾಯಿಸಿದರು.
೨೦೧೮ರಲ್ಲಿ ಪ್ರಾರಂಭವಾದ ಭವನದ ಕಾಮಗಾರಿಗೆ ರಾಜ್ಯ ಸರ್ಕಾರದಿಂದ ೨ ಕೋ.ರು., ನಂತರ ೧.೫ ಕೋ.ರು., ನಗರಸಭೆಯಿಂದ ೫೦ ಲಕ್ಷ.ರು., ಶಾಸಕರ ನಿಧಿಯಿಂದ ೩೭ ಲಕ್ಷ ರು, ಸಂಸದರ ನಿಧಿ ೨೫ ಲಕ್ಷ ರು. ಮಂಜೂರಾಗಿದೆ. ಆದರೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶ್ ಕುಮಾರ್‌ರವರು ರಾಜ್ಯ ಸರ್ಕಾರದಿಂದ ಮಂಜೂರಾಗಿರುವ ೧.೫ ಕೋ.ರು. ಇದುವರೆಗೂ ಬಿಡುಗಡೆ ಮಾಡದೆ ಹಾಗೂ ನಿರ್ಮಿತಿ ಕೇಂದ್ರದ ಗುತ್ತಿಗೆದಾರ ನಾಗರಾಜ್‌ರವರು ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯವಹಿಸಿರುವುದು ಭವನದ ಕಾಮಗಾರಿ ಪೂರ್ಣಗೊಳ್ಳದಿರುವುದಕ್ಕೆ ಮುಖ್ಯ ಕಾರಣವಾಗಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಜನಪ್ರತಿನಿಧಿಗಳು ಉಂಟಾಗಿರುವ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.
ಅಲ್ಲದೆ ಅಂಬೇಡ್ಕರ್ ಭವನಕ್ಕೆ ಭೋಜನಾಲಯ ನಿರ್ಮಾಣ ಮತ್ತು ವಾಹನಗಳ ನಿಲುಗಡೆ ಸ್ಥಳದ ಅಭಿವೃದ್ಧಿಗೆ ೨ ಕೋ. ರು. ಅವಶ್ಯಕತೆ ಇದ್ದು, ತಕ್ಷಣ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಶಾಸಕರು, ಸಂಸದರು ಹಾಗೂ ಜಿಲ್ಲಾ ಮಂತ್ರಿಗಳು ಪತ್ರ ಬರೆಯಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಅಕ್ರಮ ಖಾನ್, ಸೋಮಣ್ಣ, ವೀರೇಶ್, ಆಶಾ, ಶಶಿಕಲಾ ಸೇರಿದಂತೆ ಇನ್ನಿತರರುಉಪಸ್ಥಿತರಿದ್ದರು.
ಭದ್ರಾವತಿ ನಗರದ ಹೃದಯ ಭಾಗದಲ್ಲಿ, ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪ ನಿರ್ಮಾಣಗೊಳ್ಳುತ್ತಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ