ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ಸೂಪರ್ ಸೀಡ್‌ಗೆ ಡಿಎಸ್‌ಎಸ್ ಆಗ್ರಹ
ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಕಟ್ಟೆ ಗ್ರಾಮದ ಗ್ರಾಮಠಾಣಾ ಜಾಗದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ನಿವಾಸಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡದೆ ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ. ತಕ್ಷಣ ಗ್ರಾಮ ಪಂಚಾಯಿತಿ ಆಡಳಿತ ಸೂಪರ್ ಸೀಡ್ ಮಾಡುವ ಮೂಲಕ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಡಿಎಸ್‌ಎಸ್ ಮುಖಂಡರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಭದ್ರಾವತಿ : ತಾಲೂಕಿನ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಕಟ್ಟೆ ಗ್ರಾಮದ ಗ್ರಾಮಠಾಣಾ ಜಾಗದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ನಿವಾಸಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡದೆ ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ. ತಕ್ಷಣ ಗ್ರಾಮ ಪಂಚಾಯಿತಿ ಆಡಳಿತ ಸೂಪರ್ ಸೀಡ್ ಮಾಡುವ ಮೂಲಕ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಡಿಎಸ್‌ಎಸ್ ಮುಖಂಡರು ಆಗ್ರಹಿಸಿದ್ದಾರೆ.
ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಹಾಗೂ ಜಿಲ್ಲಾ ಸಂಚಾಲಕ ಚಿನ್ನಯ್ಯರವರು, ಹುಣಸೆಕಟ್ಟೆ ಗ್ರಾಮದ ಗ್ರಾಮಠಾಣಾ ಜಾಗದಲ್ಲಿ ೨೦೧೧ರಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ವಿವಿಧ ಜಾತಿ ಸಮುದಾಯಗಳ ಸುಮಾರು ೩೦ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಮೂಲ ಸೌಕರ್ಯಗಳಾದ ವಿದ್ಯುತ್ ದೀಪ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ, ತಾಲೂಕು ಆಡಳಿತ, ಜಿಲ್ಲಾಡಳಿತ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ನಮ್ಮ ಹೋರಾಟದ ಫಲವಾಗಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು ಎಂದರು.
ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಹೇಳಿರುವಂತೆ "ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಹ ಜೀವಿಸಲು ಅತ್ಯವಶ್ಯಕವಾದ ಕುಡಿಯುವ ನೀರು ಹಾಗೂ ಬೆಳಕು ಅಂದರೆ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಬೇಕಾಗಿರುವುದು ಆಡಳಿತ ವ್ಯವಸ್ಥೆಯಲ್ಲಿರುವ ನಮ್ಮ ಜವಾಬ್ದಾರಿ" ಎಂಬುದನ್ನು ಅರಿತಿರುವ ಜಿಲ್ಲಾಧಿಕಾರಿಗಳು ತಕ್ಷಣ ನಿವಾಸಿಗಳಿಗೆ ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಆದೇಶಿಸಿದರು. ಇದರ ಫಲವಾಗಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯಲು ಬೀದಿ ನಲ್ಲಿ ನೀರಿನ ವ್ಯವಸ್ಥೆ ಹಾಗೂ ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಆದರೆ ಸಂವಿಧಾನದ ಆಶಯದಂತೆ ಜನರು ಬದುಕಲು ಅತ್ಯಂತ ಅವಶ್ಯಕವಾಗಿರುವ ಕುಡಿಯುವ ನೀರು ಹಾಗೂ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಲು ನಿರಾಕರಿಸಿರುವ ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಸದಸ್ಯರ ಸದಸ್ಯತ್ವ ರದ್ದುಪಡಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಸೂಪರ್ ಸೀಡ್ ಮಾಡಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ಪ್ರಮುಖರಾದ ಸಿ. ಜಯಪ್ಪ, ರಂಗನಾಥ್, ಕಾಣಿಕ್‌ರಾಜ್, ಜಿಂಕ್‌ಲೈನ್ ಮಣಿ, ಪರಮೇಶ್ವರಪ್ಪ, ಸಂದೀಪ್, ನರಸಿಂಹ, ಮಂಜು, ಸುರೇಶ್, ಶಾಂತ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ