ಭದ್ರಾವತಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸೇರಿದಂತೆ ನಗರದ ವಿವಿಧೆಡೆ ಆ.೧೫ರಂದು ೭೯ನೇ ಸ್ವಾತಂತ್ರ್ಯೋತ್ಸವ ನಡೆಯಲಿದೆ.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿದ್ದು, ತಹಸೀಲ್ದಾರ್ ಪರುಸಪ್ಪ ಕುರುಬರ ಬೆಳಿಗ್ಗೆ ೯ ಗಂಟೆಗೆ ಧ್ವಜಾರೋಹಣ ನೇರವೇರಿಸಲಿದ್ದಾರೆ. ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ, ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ವಿಐಎಸ್‌ಎಲ್ ಕಾರ್ಖಾನೆ :
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಬೆಳಿಗ್ಗೆ ೯ ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದು, ನಂತರ ಪಥ ಸಂಚಲನ ವಂದನೆ ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಕಾಯಂ ಹಾಗು ಗುತ್ತಿಗೆ ಕಾರ್ಮಿಕರು, ಅಧಿಕಾರಿಗಳು ಹಾಗು ಕುಟುಂಬ ವರ್ಗದವರು, ವಿವಿಧ ಶಾಲಾ-ಕಾಲೇಜುಗಳು, ಸಂಘ-ಸಂಸ್ಥೆಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್ ಕುಮಾರ್ ಕೋರಿದ್ದಾರೆ.
ಬಿಪಿಎಲ್ ಸಂಘ:
ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದ ವತಿಯಿಂದ ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ ೯ ಗಂಟೆಗೆ ಧ್ವಜಾರೋಹಣ ನೆರವೇರಲಿದೆ.
೧೦ ಗಂಟೆಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ನಡೆಯಲಿದ್ದು, ಮಧ್ಯಾಹ್ನ ೧೨.೩೦ಕ್ಕೆ ಕಛೇರಿ ಉದ್ಘಾಟನೆ ನೆರವೇರಲಿದೆ. ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಯುವ ಮುಖಂಡ ಬಿ.ಎಸ್ ಬಸವೇಶ್, ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ಗುತ್ತಿಗೆದಾರ ಎಂ.ಜಿ ರಾಮಚಂದ್ರನ್, ನಗರಸಭೆ ಸದಸ್ಯ ಐ.ವಿ ಸಂತೋಷ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಂಘದ ಅಧ್ಯಕ್ಷ ಬಿ. ಜಗದೀಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ತರಂಗ ಕಿವುಡು ಮಕ್ಕಳ ಶಾಲೆ:
ನಗರದ ನ್ಯೂಟೌನ್ ಶಿವಭದ್ರ ಟ್ರಸ್ಟ್, ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆ.೧೫ರಂದು ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
ಶಾಲಾ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಳಿಗ್ಗೆ ೮.೩೦ಕ್ಕೆ ಹಿರಿಯ ಪತ್ರಕರ್ತ ಕಣ್ಣಪ್ಪ ಧ್ವಜಾರೋಹಣ ನೆರವೇರಿಸಲಿದ್ದು, ಟ್ರಸ್ಟ್ ಅಧ್ಯಕ್ಷ ಡಾ. ಟಿ. ನರೇಂದ್ರಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಸಿ.ಆರ್ ಗುರುರಾಜು, ಬಿ. ಮಂಜುನಾಥ್, ಮಹಮದ್ ಆರೀಫ್ ಮತ್ತು ಕೆ. ಅನಂತ ಕೃಷ್ಣನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ