ಸೋಮವಾರ, ಸೆಪ್ಟೆಂಬರ್ 15, 2025

ವರ್ಷಾಂತ್ಯದೊಳಗೆ ವಿಐಎಸ್‌ಎಲ್ ಮರುನಿರ್ಮಾಣಕ್ಕೆ ಚಾಲನೆ ನೀಡಿ ಗುತ್ತಿಗೆ ಕಾರ್ಮಿಕರ ಹಿತಕಾಪಾಡಿ

ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಸಂಸ್ಥಾಪಕ ಅಧ್ಯಕ್ಷರಾದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯರವರ ಜನ್ಮದಿನದ ಅಂಗವಾಗಿ ಸೋಮವಾರ ಗುತ್ತಿಗೆ ಕಾರ್ಮಿಕರ ಸಂಘದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 
    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಡಿಸೆಂಬರ್ ಅಂತ್ಯದೊಳಗೆ ಮರುನಿರ್ಮಾಣಗೊಳಿಸುವ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡುವ ಮೂಲಕ ಪ್ರಸ್ತುತ ಎದುರಿಸುತ್ತಿರುವ ಸಂಕಷ್ಟಗಳನ್ನು ದೂರ ಮಾಡಬೇಕೆಂದು ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. 
    ಕಾರ್ಖಾನೆ ಸಂಸ್ಥಾಪಕ ಅಧ್ಯಕ್ಷರಾದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯರವರ ಜನ್ಮದಿನದ ಅಂಗವಾಗಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಪದಾಧಿಕಾರಿಗಳು,  ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಪ್ರಕ್ರಿಯೆಯಿಂದ ಕೈಬಿಡುವುದು, ಅಗತ್ಯವಿರುವ ಬಂಡವಾಳ ತೊಡಗಿಸುವುದು, ಗುತ್ತಿಗೆ ಕಾರ್ಮಿಕರಿಗೆ ತಿಂಗಳ ಪೂರ್ತಿ ಕೆಲಸ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ೯೭೦ ದಿನಗಳಿಂದ ಕಾರ್ಖಾನೆ ಮುಂಭಾಗ ಹೋರಾಟ ನಡೆಸಲಾಗುತ್ತಿದೆ. ಆದರೆ ಬೇಡಿಕೆಗಳು ಇದುವರೆಗೂ ಈಡೇರಿಲ್ಲ. ಇದರಿಂದಾಗಿ ಗುತ್ತಿಗೆ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಸರ್ಕಾರ ಅವರ ಹಿತಕಾಪಾಡಲು ಮುಂದಾಗಬೇಕೆಂದರು. 
    ಈಗಾಗಲೇ ಕಾರ್ಖಾನೆ ಹೊಸದಾಗಿ ಮರು ನಿರ್ಮಾಣಗೊಳಿಸುವುದಾಗಿ ಕೇಂದ್ರ ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿಯವರು ಭರವಸೆ ನೀಡಿದ್ದು, ಅಲ್ಲದೆ ಈ ನಿಟ್ಟಿನಲ್ಲಿ ಸಂಸದ ಬಿ.ವೈ ರಾಘವೇಂದ್ರರವರು ಸಹ ಸಾಕಷ್ಟು ಶ್ರಮಿಸುತ್ತಿದ್ದಾರೆ. ಈ ವರ್ಷದ ಅಂತ್ಯದೊಳಗೆ ಮರುನಿರ್ಮಾಣಗೊಳ್ಳುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಗುತ್ತಿಗೆ ಕಾರ್ಮಿಕರ ಬೇಡಿಕೆಗಳು ಈಡೇರಿಸಬೇಕೆಂದು ಕೋರಿದರು. 
    ಇದಕ್ಕೂ ಮೊದಲು ಕಾರ್ಖಾನೆ ಆಡಳಿತ ಕಛೇರಿ ಆವರಣದಲ್ಲಿರುವ ಸರ್.ಎಂ. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ವಂದನೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಗುತ್ತಿಗೆ ಕಾರ್ಮಿಕರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ