ಶುಕ್ರವಾರ, ಅಕ್ಟೋಬರ್ 24, 2025

ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತ : ಕಾರ್ಮಿಕ ಸಾವು

ಪ್ರಕಾಶ್ 
    ಭದ್ರಾವತಿ: ನಗರದ ಜನ್ನಾಪುರ ನಿವಾಸಿ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಈಶ್ವರ್ ಇಂಡಸ್ಟ್ರಿ ಕಾರ್ಮಿಕ ಪ್ರಕಾಶ್(೪೪) ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. 
    ಪತ್ನಿ, ಪುತ್ರ ಹಾಗು ಪುತ್ರಿ ಇಬ್ಬರು ಸಣ್ಣ ಮಕ್ಕಳು ಇದ್ದಾರೆ. ಪ್ರಕಾಶ್ ಗ್ಯಾಸ್ ಕಟ್ಟಿಂಗ್ ಕೆಲಸದಲ್ಲಿ ತೊಡಗಿರುವಾಗ ಬೆಳಿಗ್ಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ನಡುವೆ ಮೃತದೇಹದ ಶವ ಪರೀಕ್ಷೆ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಿ ನಂತರ ಕುಟುಂಬಸ್ಥರಿಗೆ ಹಿಂದಿರುಗಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ನಗರದ ಬೈಪಾಸ್ ರಸ್ತೆ, ಬಾಳೆಮಾರನಹಳ್ಳಿ ರಸ್ತೆಯಲ್ಲಿರುವ ಶ್ರೀ ಸತ್ಯಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು. 
    ಶಾಸಕರ ನೇತೃತ್ವದಲ್ಲಿ ಪರಿಹಾರ :
    ಮೃತ ಕಾರ್ಮಿಕ ಪ್ರಕಾಶ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಗುತ್ತಿಗೆದಾರರ ಜೊತೆ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್‌ರವರು ಮಾತುಕತೆ ನಡೆಸಿದ್ದು, ಅಂತಿಮವಾಗಿ ೩ ಲಕ್ಷ ರು. ಪರಿಹಾರ ನೀಡಲಾಗಿದೆ. 
    ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯಲ್ಲಿ ಪ್ರಕಾಶ್ ಈ ಹಿಂದೆ ಗುತ್ತಿಗೆ ಕಾರ್ಮಿಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಾರ್ಖಾನೆಯಲ್ಲಿ ಕೆಲಸದ ದಿನ ಕಡಿತಗೊಳಿಸಿದ ಹಿನ್ನಲೆಯಲ್ಲಿ ಈಶ್ವರ್ ಇಂಡಸ್ಟ್ರಿಯಲ್ಲಿ ಕೆಲಸಕ್ಕೆ ಸೇರ್ಪಡೆಗೊಂಡಿದ್ದರು. 
ಶಾಸಕ ಬಿ.ಕೆ ಸಂಗಮೇಶ್ವರ್, ಬಿ.ಎಸ್ ಗಣೇಶ್, ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರು ಹಾಗು ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಪ್ರಕಾಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ