ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್
ಭದ್ರಾವತಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಹಳೇನಗರದ ಕನಕಮಂಟಪದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನಾಡ ಧ್ವಜಾರೋರಹಣ ನೆರವೇರಿಸಿದರು.
ಭದ್ರಾವತಿ : ಕನ್ನಡ ನಾಡಿನ ನೆಲ-ಜಲ-ಭಾಷೆಯ ಮೇಲಿನ ಪ್ರೀತಿ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಕವಿ ಆಶಯದಂತೆ ಅದು ನಿತ್ಯೋತ್ಸವವಾಗಬೇಕು. ಈ ನಿಟ್ಟಿನಲ್ಲಿ ಕನ್ನಡಿಗರಾದ ನಾವುಗಳು ಮುನ್ನಡೆಯಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ನಾಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಮ್ಮ ಆಚರಣೆಗಳು ಕೇವಲ ಮೇಲ್ನೋಟಕ್ಕೆ ಸೀಮಿತವಾಗಬಾರದು. ನೆಲ-ಜಲ-ಭಾಷೆ ಮೇಲಿನ ಪ್ರೀತಿ ನಿರಂತರವಾಗಿರಬೇಕು. ನಮ್ಮ ನಾಡಿಗಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸುವ ಮೂಲಕ ಆವರ ದಾರಿಯಲ್ಲಿ ನಾವುಗಳು ಸಹ ಸಾಗಬೇಕು. ಆಗ ಮಾತ್ರ ಕನ್ನಡ ನೆಲ-ಜಲ-ಭಾಷೆ ಉಳಿಸಿಕೊಳ್ಳಲು ಸಾಧ್ಯ ಎಂದರು.
ಎಂಪಿಎಂ ಆರಂಭಕ್ಕೆ ಕೇಂದ್ರ ಸರ್ಕಾರ ಎನ್‌ಓಸಿ ನೀಡಲಿ:
ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಸಹ ಹೆಚ್ಚಿನ ಅನುದಾನ ನೀಡುತ್ತಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರ ಕಾರ್ಖಾನೆಗೆ ಸೇರಿದ ಅರಣ್ಯ ಭೂಮಿಗೆ ಎನ್‌ಓಸಿ ನೀಡಬೇಕು. ಒಂದು ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಒಂದು ವೇಳೆ ಕಾರ್ಖಾನೆಗೆ ಎನ್‌ಓಸಿ ಲಭಿಸಿದ್ದಲ್ಲಿ ಕೇವಲ ೩ ತಿಂಗಳಲ್ಲಿ ಕಾರ್ಖಾನೆ ಪುನರ್ ಆರಂಬಿಸಲಾಗುವುದು. ಇದರಿಂದ ಸಾವಿರಾರು ಜನರಿಗೆ ಉದ್ಯೋಗ ಲಭಿಸಲಿದೆ ಎಂದರು.
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನಯನ್ನು ಕೇಂದ್ರ ಸರ್ಕಾರ ಇದೀಗ ಅಭಿವೃದ್ಧಿ ಪಡಿಸುವುದಾಗಿ ಹೇಳುತ್ತಿದ್ದು, ಆದರೆ ಇನ್ನೂ ಕಾರ್ಯಗತವಾಗಿಲ್ಲ. ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ತಕ್ಷಣ ಗಮನ ಹರಿಸಬೇಕು. ಕಾರ್ಖಾನೆ ಅಭಿವೃದ್ಧಿಗೊಳ್ಳುವುದನ್ನು ನಾವು ಸಹ ಸ್ವಾಗತಿಸುತ್ತೇವೆ ಎಂದರು.
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಎನ್.ಕೆ ಹೇಮಂತ್, ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆ. ತಿಮ್ಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ವಿವಿಧ ಕ್ಷೇತ್ರಗಳ ಸಾಧಕರಾದ ಡಾ. ಕೃಷ್ಣ ಎಸ್. ಭಟ್, ಡಾ. ಡಿ. ನಾಗರಾಜ್ ಸೇರಿದಂತೆ ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಿಂದ ಕನಕಮಂಟಪ ಮೈದಾನದವರೆಗೂ ತಾಯಿ ಭುವನೇಶ್ವರಿ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ