ವೈಭವಯುತ ವೈಕುಂಠ ಏಕಾದಶಿ : ಸಹಸ್ರಾರು ಭಕ್ತರಿಂದ ವೈಕುಂಠನಾಥನ ದರ್ಶನ

ನಗರದ ಪ್ರಮುಖ ದೇವಾಲಯಗಳಲ್ಲಿ ಬೆಳಿಗ್ಗೆಯಿಂದಲೇ ಸಾಲುಗಟ್ಟಿ ನಿಂತ ಭಕ್ತರು 

ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ, ಮುಜರಾಯಿ ಇಲಾಖೆಗೆ ಒಳಪಟ್ಟಿರುವ ವಂಕೀಪುರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ಭಕ್ತರಿಗೆ ಕಲ್ಪಿಸಲಾಗಿರುವ ವೈಕುಂಠನಾಥನ ದರ್ಶನ ಕಣ್ಮನ ಸೆಳೆಯಿತು. 
    ಭದ್ರಾವತಿ: ನಗರದ ಪ್ರಮುಖ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಂಗಳವಾರ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಸಹಸ್ರಾರು ಭಕ್ತರು ಬೆಳಿಗ್ಗೆಯಿಂದ ಸ್ವಾಮಿಯ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತು. ಇದಕ್ಕೆ ಪೂರಕವಾಗಿ ದೇವಸ್ಥಾನ ಆಡಳಿತ ಮಂಡಳಿಗಳು ಸಹ ಸಿದ್ದತೆಗಳನ್ನು ಕೈಗೊಂಡಿದ್ದವು. 
    ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ, ಮುಜರಾಯಿ ಇಲಾಖೆಗೆ ಒಳಪಟ್ಟಿರುವ ವಂಕೀಪುರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಬೆಳಿಗ್ಗೆ ೪.೩೦ಕ್ಕೆ ಪ್ರಾಕಾರ ಉತ್ಸವ, ಪರಮಪದ ಮಹಾದ್ವಾರದ ಪೂಜೆ, ಶ್ರೀ ವೈಕುಂಠನಾಥನ ದರ್ಶನ ನಂತರ ಶ್ರೀ ಗೋದಾದೇವಿ ಅಮ್ಮನವರ ಉತ್ಸವದೊಂದಿಗೆ ವಿವಿಧ ಭಜನಾ ಮಂಡಳಿಯವರಿಂದ ನಗರ ಸಂಕೀರ್ತನೆ ಹಾಗು ಶ್ರೀ ಕೃಷ್ಣ ಗೆಳೆಯರ ಬಳಗದಿಂದ ಚಂಡೇವಾದ್ಯ ನಡೆಯಿತು. 
    ಮಧ್ಯಾಹ್ನ ಸುಡು ಬಿಸಿಲಿನಲ್ಲೂ ಭಕ್ತರು ಸಾಲುಗಟ್ಟಿ ನಿಂತಿರುವುದು ಕಂಡು ಬಂದಿದ್ದು, ಮತ್ತೊಂದೆಡೆ ಪಾಸ್ ಮೂಲಕ ವಿಶೇಷ ದರ್ಶನದ ವ್ಯವಸ್ಥೆಗೂ ಅವಕಾಶ ಕಲ್ಪಿಸಲಾಗಿತ್ತು. ಆದರೆ ಭಕ್ತರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದ ಕಾರಣ ಪೊಲೀಸರು ಸರದಿಸಾಲು ನಿಯಂತ್ರಿಸಲು ಹರಸಾಹಸ ಪಡುವಂತಾಯಿತು. 


ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ, ಮುಜರಾಯಿ ಇಲಾಖೆಗೆ ಒಳಪಟ್ಟಿರುವ ವಂಕೀಪುರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ವೈಕುಂಠನಾಥನ ದರ್ಶನಕ್ಕೆ ಸುಡು ಬಿಸಿಲಿನಲ್ಲೂ ಸಾಲುಗಟ್ಟಿ ನಿಂತಿರುವ ಭಕ್ತರು. 
    ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಎಸ್. ರಂಗನಾಥಶರ್ಮ ಹಾಗು ಸಹಾಯಕ ಅರ್ಚಕ ಎಸ್. ಶ್ರೀನಿವಾಸನ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಿ. ರಮಾಕಾಂತ ಹಾಗು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. 
    ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ಶಾಸಕರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಸೇರಿದಂತೆ ಸಹಸ್ರಾರು ಭಕ್ತರು ವೈಕುಂಠನಾಥ ದರ್ಶನ ಪಡೆದರು. 
    ಶ್ರೀ ತಿರುಮಲ ವೆಂಕಟೇಶ್ವರಸ್ವಾಮಿ ದೇವಸ್ಥಾನ : 
    ನಗರಸಭೆ ವಾಡ್ ನಂ.೨ರ ವ್ಯಾಪ್ತಿಯ ಬಿ.ಎಚ್ ರಸ್ತೆ, ಲೋಯರ್ ಹುತ್ತಾ ಶ್ರೀ ತಿರುಮಲ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಭವಯುತವಾಗಿ ವೈಕುಂಠ ಏಕಾದಶಿ  ಜರುಗಿತು. 
    ಬೆಳಿಗ್ಗೆ ೪ ಗಂಟೆಗೆ ಲಕ್ಷ ಪುಷ್ಪಾರ್ಚನೆ, ವಿಷ್ಣು ಸಹಸ್ರನಾಮ ಮತ್ತು ದೇವರ ಉತ್ಸವ, ೬.೩೦ಕ್ಕೆ ಮಹಾಮಂಗಳಾರತಿ, ೬.೪೫ರಿಂದ ವೈಕುಂಠ ದೇವರ ದರ್ಶನ ನಡೆಯಿತು. ಈ ದೇವಸ್ಥಾನದಲ್ಲೂ ಸಹ ಸಹಸ್ರಾರು ಭಕ್ತರು ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತು. ಅಲ್ಲದೆ ಇಲ್ಲೂ ಸಹ ಪಾಸ್ ಮೂಲಕ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. 
    ದೇವಸ್ಥಾನ ಆಡಳಿತ ಮಂಡಳಿಯಿಂದ ಭಕ್ತರಿಗೆ ಲಾಡು ಹಾಗು ಹಾಲು ಪ್ರಸಾದ ವಿತರಣೆ ವ್ಯವಸ್ಥೆ ಕೈಗೊಳ್ಳಲಾಗಿತ್ತು. ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ಕೈಗೊಳ್ಳಲಾಗಿದ್ದ ವೈಭವಯುತ ಅಲಂಕಾರ ಭಕ್ತರ ಕಣ್ಮನ ಸೆಳೆಯಿತು. 
 

ಭದ್ರಾವತಿ ನಗರಸಭೆ ವಾಡ್ ನಂ.೨ರ ವ್ಯಾಪ್ತಿಯ ಬಿ.ಎಚ್ ರಸ್ತೆ, ಲೋಯರ್ ಹುತ್ತಾ ಶ್ರೀ ತಿರುಮಲ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಭವಯುತವಾಗಿ ವೈಕುಂಠ ಏಕಾದಶಿ  ಜರುಗಿತು. ದೇವಸ್ಥಾನದಲ್ಲಿ ಕೈಗೊಳ್ಳಲಾಗಿದ್ದ ಅಲಂಕಾರ ಭಕ್ತರ ಕಣ್ಮನ ಸೆಳೆಯಿತು.