Wednesday, January 15, 2025

ಪ್ರಕಾಶ್ ರಾಜ್ ನಿಧನ

ಪ್ರಕಾಶ್ ರಾಜ್
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಜನ್ನಾಪುರ ಹಾಲಪ್ಪ ಶೆಡ್ ನಿವಾಸಿ ಪ್ರಕಾಶ್ ರಾಜ್(೫೦) ಬುಧವಾರ ನಿಧನ ಹೊಂದಿದರು. 
    ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಇವರ ಅಂತ್ಯಕ್ರಿಯೆ ಮಿಲ್ಟ್ರಿಕ್ಯಾಂಪ್, ಬೈಪಾಸ್ ರಸ್ತೆ, ಹಿಂದೂ ರುದ್ರಭೂಮಿಯಲ್ಲಿ ಗುರುವಾರ ನೆರವೇರಲಿದೆ. 
    ಹಾಲಪ್ಪ ಶೆಡ್ ಅಂಗಾಳ ಪರಮೇಶ್ವರಿ ದೇವಸ್ಥಾನದ ಅರ್ಚಕ ರಮೇಶ್ ಹಾಗು ಮೋಹನ್ ಕುಮಾರ್ ಸೇರಿದಂತೆ ದೇವಸ್ಥಾನ ಸಮಿತಿ ಪ್ರಮುಖರು ಸಂತಾಪ ಸೂಚಿಸಿದ್ದಾರೆ. 

ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ, ಕಡಿತಕ್ಕೊಳಗಾದವರಿಗೆ ೫,೦೦೦ ರು. ನೀಡಿ

ಭದ್ರಾವತಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ಸಾಮಾಜಿಕ ಹೋರಾಟ ಶಶಿಕುಮಾರ್ ಗೌಡ ನೇತೃತ್ವದಲ್ಲಿ ಬುಧವಾರ ತಾಲೂಕು ಪಂಚಾಯಿತಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣರವರಿಗೆ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ಸಾಮಾಜಿಕ ಹೋರಾಟ ಶಶಿಕುಮಾರ್ ಗೌಡ ನೇತೃತ್ವದಲ್ಲಿ ಬುಧವಾರ ತಾಲೂಕು ಪಂಚಾಯಿತಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣರವರಿಗೆ ಮನವಿ ಸಲ್ಲಿಸಲಾಯಿತು. 
    ಬೀದಿ ನಾಯಿಗಳ ಹೆಚ್ಚಳದಿಂದಾಗಿ ಗ್ರಾಮಸ್ಥರಿಗೆ, ರಸ್ತೆಗಳಲ್ಲಿ ಸಂಚರಿಸುವ ಪಾದಚಾರಿಗಳಿಗೆ, ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ವಯೋವೃದ್ಧರು, ಮಹಿಳೆಯರು, ಮಕ್ಕಳು, ಅದರಲ್ಲೂ ಶಾಲೆಗೆ ಹೋಗುವ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸುತ್ತಿವೆ. ಈಗಾಗಲೇ ಈ ಸಂಬಂಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ಪ್ರಕರಣಗಳು ನಡೆದಿವೆ. ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು, ತಕ್ಷಣ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. 
    ನಗರಸಭೆ ವ್ಯಾಪ್ತಿಯಲ್ಲಿ ನಾಯಿ ಕಡಿತಕ್ಕೊಳಗಾದವರಿಗೆ ೫,೦೦೦ ರು. ಹಣ ನೀಡುತ್ತಿದ್ದು, ಇದೆ ರೀತಿ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲೂ ಕೂಡ ನಾಯಿ ಕಡಿತಕ್ಕೊಳಗಾದವರಿಗೆ ೫,೦೦೦ ರು. ಹಣ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. 

ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಮುಂದುವರೆದ ಹೋರಾಟ

ಜ.೧೯ಕ್ಕೆ ೨ ವರ್ಷ ಪೂರ್ಣ : ಇತಿಹಾಸ ಪುಟ ಸೇರಿದ ದಾಖಲೆ  

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ಸರ್.ಎಂ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ. 
    * ಅನಂತಕುಮಾರ್
    ಭದ್ರಾವತಿ :  ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶಾಶ್ವತವಾಗಿ ಮುಚ್ಚಲು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ೧೬ ಜನವರಿ ೨೦೨೩ರಂದು ಕೇಂದ್ರ ಉಕ್ಕು ಪ್ರಾಧಿಕಾರ ತೀರ್ಮಾನ ತೆಗೆದುಕೊಂಡಿದ್ದು, ಇದನ್ನು ವಿರೋಧಿಸಿ ವಿಐಎಸ್‌ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್ ವತಿಯಿಂದ ೧೯ ಜನವರಿ ೨೦೨೩ರಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಇದೀಗ ಹೋರಾಟ ೨ ವರ್ಷ ಪೂರೈಸುತ್ತಿದ್ದು, ಆದರೆ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. 
    ದಲಿತ ಚಳುವಳಿ ಸೇರಿದಂತೆ ಹಲವು ಚಳುವಳಿಗಳ ಉದಯಕ್ಕೆ ಕಾರಣವಾಗಿರುವ ಕ್ಷೇತ್ರದಲ್ಲಿ ಇತಿಹಾಸದಲ್ಲಿಯೇ ಇಷ್ಟು ದೊಡ್ಡ ಹೋರಾಟ ನಡೆದಿಲ್ಲ ಎಂಬುದು ವಿಶೇಷವಾಗಿದೆ. ಶತಮಾನ ಪೂರೈಸಿರುವ ಈ ಕಾರ್ಖಾನೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಗುತ್ತಿಗೆ, ಕಾಯಂ ಹಾಗೂ ನಿವೃತ್ತ ಕಾರ್ಮಿಕರು ಕಳೆದ ಎರಡು ವರ್ಷದಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಹೋರಾಟಕ್ಕೆ ಪ್ರತಿಫಲ ಇನ್ನು ಲಭಿಸಿಲ್ಲ ಎಂಬುದು ವಿಷಾದನೀಯ ಸಂಗತಿಯಾಗಿದೆ. 
    ಕಳೆದ ಸುಮಾರು ಮೂರು ದಶಕಗಳಿಂದ ಸಂಕಷ್ಟದಲ್ಲಿ ಮುನ್ನಡೆಯುತ್ತಿರುವ ಈ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಖಾಸಗೀಕರಣಗೊಳಿಸುವ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ಮುನ್ನಡೆಸಿಕೊಂಡು ಹೋಗುವ ನಿಟ್ಟಿನಲ್ಲಿ ಪ್ರಯತ್ನ ಕೈಗೊಂಡಿತ್ತು. ಆದರೆ ನಿರೀಕ್ಷೆಯಂತೆ ಪ್ರಯತ್ನ ಕೈಗೂಡದ ಹಿನ್ನಲೆಯಲ್ಲಿ ಅಂತಿಮವಾಗಿ ೨೦೨೩ರ ಜನವರಿ ತಿಂಗಳಿನಲ್ಲಿ ಮುಚ್ಚುವ ತೀರ್ಮಾನ ಕೈಗೊಂಡಿತ್ತು. ಇದರ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆನೀಡಿದ್ದರು. ಹಲವು ಏಳುಬೀಳುಗಳ ನಡುವೆ ಹೋರಾಟ ಇಂದಿಗೂ ಮುನ್ನಡೆಯುತ್ತಿದೆ. ಕಾರ್ಖಾನೆಯಲ್ಲಿ ಹೆಚ್ಚು ಸಂಕಷ್ಟಕ್ಕೆ ಒಳಗಾಗಿರುವ ಗುತ್ತಿಗೆ ಕಾರ್ಮಿಕರು ೨ ವರ್ಷಗಳಿಂದ ನಿರಂತರವಾಗಿ ಹೋರಾಟ ಮುಂದುವರೆಸಿಕೊಂಡು ಬಂದಿರುವುದೇ ದೊಡ್ಡ ಸವಾಲಾಗಿದೆ. 
    ಜ.೧೬ `ಭದ್ರಾವತಿಯ ಕರಾಳ ದಿನ' : 
    ಕಳೆದ ವರ್ಷ ಹೋರಾಟ ೧ ವರ್ಷ ಪೂರೈಸಿದ್ದ ಸಂದರ್ಭದಲ್ಲಿ ಯೂನಿಯನ್ ವತಿಯಿಂದ ಜ.೧೬ `ಭದ್ರಾವತಿಯ ಕರಾಳ ದಿನ' ಆಚರಿಸಲಾಗಿತ್ತು. ನಗರದ ಪ್ರಮುಖ ವೃತ್ತ, ರಸ್ತೆಗಳು ಸೇರಿದಂತೆ ನಗರಾದ್ಯಂತ ಪಂಜಿನ ಮೆರವಣಿಗೆ ನಡೆಸಲಾಗಿತ್ತು. ಕಾರ್ಖಾನೆ ಮುಂಭಾಗದಿಂದ ಶಿವಮೊಗ್ಗದಲ್ಲಿರುವ ಸಂಸದ ಬಿ.ವೈ ರಾಘವೇಂದ್ರ ಅವರ ನಿವಾಸದವರೆಗೂ ಬೈಕ್ ರ್‍ಯಾಲಿ ನಡೆಸಿ ನಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. 


    ಹಲವು ವಿಭಿನ್ನ ಹೋರಾಟ:
    ಕಾರ್ಖಾನೆ ಉಳಿವಿಗಾಗಿ ಕಳೆದ ೨ ವರ್ಷದಿಂದ ನಿರಂತರವಾಗಿ ಹೋರಾಟ ನಡೆಯುತ್ತಿದ್ದು, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ, ರಸ್ತೆ ತಡೆ, ಭದ್ರಾವತಿ ಬಂದ್, ಪಾದಯಾತ್ರೆ, ಅರೆಬೆತ್ತಲೆ ಮೆರವಣಿಗೆ, ಪಂಜಿನ ಮೆರವಣಿಗೆ, ಸಹಿ ಅಭಿಯಾನ, ರಕ್ತದಲ್ಲಿ ಪತ್ರ ಚಳುವಳಿ ಸೇರಿದಂತೆ ಹಲವು ವಿಭಿನ್ನ ಹೋರಾಟಗಳನ್ನು ನಡೆಸಲಾಗಿದೆ. ಅಲ್ಲದೆ ಹೋರಾಟದ ಒಂದು ಭಾಗವಾಗಿ ಹಿರಿಯ ಚಲನಚಿತ್ರ ನಟ ಎಸ್. ದೊಡ್ಡಣ್ಣ ಅವರ ನೇತೃತ್ವದಲ್ಲಿ ಕಾರ್ಖಾನೆಯ ಶತಮಾನೋತ್ಸವ ವಿಜೃಂಭಣೆಯಿಂದ ಆಚರಿಸಲಾಗಿದೆ. ವಿಶೇಷವಾಗಿ ಹಲವು ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳಲಾಗಿದೆ.
    ಹೋರಾಟಕ್ಕೆ ವ್ಯಾಪಕ ಬೆಂಬಲ:
    ಕಾರ್ಮಿಕರ ಹೋರಾಟಕ್ಕೆ ವಿವಿಧ ಸಂಘ ಸಂಸ್ಥೆಗಳು, ಕಾರ್ಮಿಕ ಸಂಘಟನೆಗಳು, ರಾಜಕೀಯ ಪಕ್ಷಗಳು, ಮಹಿಳಾ ಸಂಘಟನೆಗಳು, ಶಾಲಾ-ಕಾಲೇಜುಗಳ ವಿದ್ಯಾ ಸಂಸ್ಥೆಗಳು, ಮಠ ಮಂದಿರಗಳು ರೈತರು ಸೇರಿದಂತೆ ಕ್ಷೇತ್ರದ ಸಮಸ್ತ ನಾಗರಿಕರು ಹೋರಾಟಕ್ಕೆ ಕಳೆದ ೨ ವರ್ಷಗಳಿಂದ ಬೆಂಬಲ ಸೂಚಿಸಿಕೊಂಡು ಬಂದಿದ್ದಾರೆ. 
    ಉಡುಪಿ ಪೇಜಾವರ ಶ್ರೀ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿ, ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ, ಹೊಸದುರ್ಗ ಕನಕ ಗುರು ಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಬೆಕ್ಕಿನ ಕಲ್ಮಠದ ಶ್ರೀ ಡಾ. ಮುರುಘ ರಾಜೇಂದ್ರ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಅಲಗೂಡು ವಿಶ್ವನಾಥ್, ಜೆಡಿಯು ಮುಖಂಡ ಮಹಿಮಾ ಜೆ. ಪಟೇಲ್ ಸೇರಿದಂತೆ ಪ್ರಮುಖರು ಹೋರಾಟದಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದ್ದಾರೆ.
    ಈ ನಡುವೆ ಪ್ರಧಾನಮಂತ್ರಿ, ಮುಖ್ಯಮಂತ್ರಿ, ಕೇಂದ್ರ ಹಾಗು ರಾಜ್ಯ ಸಚಿವರು, ಮಾಜಿ ಪ್ರಧಾನಿ, ಸಂಸದರು, ಶಾಸಕರು ಹಾಗು ಮೈಸೂರು ಸಂಸ್ಥಾನದ ಮಹಾರಾಜರಿಗೆ ಹಾಗು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ, ರಾಜ್ಯದ ವಿವಿಧ ಮಠಗಳ ಮಠಾಧೀಶರಿಗೆ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಲವು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಇಷ್ಟೆಲ್ಲಾ ಬೆಳವಣಿಗೆಗಳು ನಡೆದಿದ್ದರೂ ಸಹ ಇದುವರೆಗೂ ಹೋರಾಟಕ್ಕೆ ಯಾವುದೇ ಪ್ರತಿಫಲ ಲಭಿಸಿಲ್ಲ.
    ಬದಲಾದ ಸರ್ಕಾರಗಳು : 
    ಎರಡು ವರ್ಷಗಳ ಹೋರಾಟದ ಅವಧಿಯಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಬದಲಾವಣೆಗೊಂಡಿವೆ. ರಾಜ್ಯದಲ್ಲಿ ೨ನೇ ಬಾರಿಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಹಾಗು ಕೇಂದ್ರದಲ್ಲಿ ೩ನೇ ಬಾರಿಗೆ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹೊಸ ಸರ್ಕಾರಗಳು ರಚನೆಯಾಗಿವೆ. ರಾಜ್ಯ ಸರ್ಕಾರ ೨ ವರ್ಷ ಅಧಿಕಾರ ಪೂರೈಸುತ್ತಿದ್ದು, ಉಳಿದಂತೆ ಕೇಂದ್ರ ಸರ್ಕಾರ ೭ ತಿಂಗಳು ಪೂರೈಸಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಅದರಲ್ಲೂ ಬೃಹತ್ ಕೈಗಾರಿಕೆ ಹಾಗು ಉಕ್ಕು ಸಚಿವರಾಗಿದ್ದಾರೆ. ಅಧಿಕಾರವಹಿಸಿಕೊಂಡ ಕೆಲವೇ ದಿನಗಳಲ್ಲಿ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಹಲವು ಬಾರಿ ಕಾರ್ಖಾನೆ ಉಳಿಸಿಕೊಳ್ಳುವುದಾಗಿ ಹಾಗು ಅಗತ್ಯವಿರುವ ಬಂಡವಾಳ ತೊಡಗಿಸುವುದಾಗಿ ಭರವಸೆ ನೀಡಿದ್ದಾರೆ. ಇವರ ಭರವಸೆ ಈಡೇರುವ ಆಶಾಭಾವನೆಯಿಂದ ಕಾರ್ಮಿಕರು ಹಾಗು ಕುಟುಂಬ ವರ್ಗದವರು ಸೇರಿದಂತೆ ಕ್ಷೇತ್ರದ ಸಮಸ್ತ ನಾಗರೀಕರು ಎದುರು ನೋಡುತ್ತಿದ್ದಾರೆ. 


    ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭಗೊಂಡ ದೇಶದ ಎರಡನೇ ಅತಿದೊಡ್ಡ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಎಂದು ಹೆಗ್ಗಳಿಕೆಗೆ ಪಾತ್ರವಾಗಿರುವ, ದೇಶ ಹಾಗು ರಾಜ್ಯದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿರುವ, ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ದಿವಾನರಾಗಿದ್ದ ಭಾರತರತ್ನ, ಶ್ರೇಷ್ಠ ತಂತ್ರಜ್ಞಾನಿ, ಸರ್.ಎಂ ವಿಶ್ವೇಶ್ವರಾಯ ಅವರ ಪರಿಶ್ರಮದ ಫಲವಾಗಿ ಸ್ಥಾಪನೆಗೊಂಡಿರುವ ಹಾಗು ಮಲೆನಾಡಿನ ಏಕೈಕ ಬೃಹತ್ ಕಾರ್ಖಾನೆ ಎಂಬ ಪ್ರಶಂಸೆಗೆ ಪಾತ್ರವಾಗಿರುವ ಈ ಕಾರ್ಖಾನೆ ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
    ಕೇಂದ್ರ ಸರ್ಕಾರ ಈ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಇಚ್ಛಾಶಕ್ತಿ ಪ್ರದರ್ಶಿಸಬೇಕಾಗಿದೆ. ಸೂಕ್ತ ನಿಲುವು ಕೈಗೊಳ್ಳುವ ಮೂಲಕ  ಕಾರ್ಮಿಕರ ಹಾಗು ಕ್ಷೇತ್ರದ ನಾಗರೀಕರ ಹಿತಕಾಪಾಡಬೇಕಾಗಿದೆ.
 
ಮೈಸೂರು ಮಹಾರಾಜರ ಕೊಡುಗೆಯಾಗಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ ಕುಮಾರಸ್ವಾಮಿಯವರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಶ್ರೀ ಮಠದ ವತಿಯಿಂದ ಈಗಾಗಲೇ ಪ್ರಧಾನಮಂತ್ರಿಯವರನ್ನು ಸಹ ಭೇಟಿ ಮಾಡಿ ಚರ್ಚಿಸಲಾಗಿದೆ. ನಮ್ಮ ನಿರಂತರ ಪ್ರಯತ್ನದ ನಡುವೆ ಎಲ್ಲರ ಸಹಕಾರ ಅಗತ್ಯವಿದೆ. 
        - ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಪೀಠಾಧ್ಯಕ್ಷರು, ಶ್ರೀ ಕ್ಷೇತ್ರ ಆದಿಚುಂಚನಗಿರಿ. 
 -----------------------------------------

ಪ್ರಾಮಾಣಿಕವಾಗಿ ಕಾರ್ಮಿಕರ ಹೋರಾಟಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಜೊತೆಗೆ ರಾಜ್ಯ ಸರ್ಕಾರದಿಂದ ಕಾರ್ಖಾನೆಗೆ ಅಗತ್ಯವಿರುವ ಗಣಿ ಸಹ ಮಂಜೂರಾತಿ ಮಾಡಿಸಿಕೊಡಲಾಗಿದೆ. ಅಲ್ಲದೆ ಕೇಂದ್ರ ಸರ್ಕಾರಕ್ಕೆ ಬಂಡವಾಳ ತೊಡಗಿಸುವಂತೆ ಮನವಿ ಸಹ ಮಾಡಲಾಗಿದೆ. ಇದೀಗ ಕೇಂದ್ರ ಸರ್ಕಾರ ಇಚ್ಛಾ ಶಕ್ತಿ ಪ್ರದರ್ಶಿಸಬೇಕಾಗಿದೆ. ಕಾರ್ಮಿಕರ ಮುಂದಿನ ಹೋರಾಟಗಳಿಗೂ ನನ್ನ ಬೆಂಬಲವಿರುತ್ತದೆ.
                          - ಬಿ.ಕೆ ಸಂಗಮೇಶ್ವರ್, ಶಾಸಕರು, ಭದ್ರಾವತಿ.
 ................................................................

ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಚರ್ಚಿಸಲಾಗಿದೆ. ಸುಮಾರು ೧೫ ಸಾವಿರ ಕೋ. ರು. ಬಂಡವಾಳ ತೊಡಗಿಸುವ ಉದ್ದೇಶ ಹೊಂದಲಾಗಿದ್ದು, ಈ ಸಂಬಂಧ ವರದಿ ಸಲ್ಲಿಸಲು ತಂತ್ರಜ್ಞರ ತಂಡ ಕಾರ್ಖಾನೆಗೆ ಭೇಟಿ ನೀಡಲಿದೆ. ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. 
- ಎಚ್.ಡಿ ಕುಮಾರಸ್ವಾಮಿ, ಕೇಂದ್ರ ಸಚಿವರು, ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ. 
 
.......................................................................
ನಮ್ಮ ಹೋರಾಟ ಜ.೧೯ಕ್ಕೆ ೨ ವರ್ಷ ಪೂರೈಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಹೋರಾಟ ಮುಂದುವರೆಯಲಿದ್ದು, ಈ ಬಾರಿ ಜ.೧೬ ಕರಾಳ ದಿನ ಆಚರಿಸುವುದಿಲ್ಲ. ಕಳೆದ ವರ್ಷ ಕಾರ್ಖಾನೆ ಉಳಿಸಿಕೊಳ್ಳುವ ಕುರಿತು ಯಾರಿಂದಲೂ ದೃಢ ನಿರ್ಧಾರ, ನಿಲುವು ವ್ಯಕ್ತವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕರಾಳ ದಿನ ಆಚರಿಸುವ ಮೂಲಕ ಪಂಜಿನ ಮೆರವಣಿಗೆ ಹಾಗು ಸಂಸದರ ನಿವಾಸದವರೆಗೂ ಬೈಕ್ ರ್‍ಯಾಲಿ ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಬಾರಿ ಯಾವುದೇ ಹೋರಾಟ ನಡೆಸುವುದಿಲ್ಲ. ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿಯವರು ಈಗಾಗಲೇ ಹಲವಾರು ಕಾರ್ಖಾನೆ ಉಳಿಸಿಕೊಳ್ಳುವ ಸಂಬಂಧ ಭರವಸೆ ನೀಡಿದ್ದು, ಕುಮಾರಸ್ವಾಮಿಯವರು ನಮ್ಮ ರಾಜ್ಯದವರೇ ಆಗಿದ್ದು, ಅವರ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಈ ಹಿನ್ನಲೆಯಲ್ಲಿ ಕಾದು ನೋಡುವ ಮೂಲಕ ಮುಂದಿನ ಹೋರಾಟ ರೂಪಿಸಲಾಗುವುದು.
                 - ಸುರೇಶ್, ಅಧ್ಯಕ್ಷರು, ವಿಐಎಸ್‌ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್ 
 
 ........................................................................

ಈ ಬಾರಿ ನಮ್ಮ ಬೇಡಿಕೆ ಈಡೇರುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ನಾವು ಇತ್ತೀಚೆಗೆ ದೆಹಲಿಗೆ ತೆರಳಿ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದೇವೆ. ಸಂಸದ ಬಿ.ವೈ ರಾಘವೇಂದ್ರ ಹಾಗು ಕುಮಾರಸ್ವಾಮಿ ಅವರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಈಗಾಗಲೇ ಕುಮಾರಸ್ವಾಮಿಯವರು ೧೫ ಸಾವಿರ ಕೋ.ರು. ಬಂಡವಾಳ ತೊಡಗಿಸುವುದಾಗಿ ಭರವಸೆ ನೀಡಿದ್ದಾರೆ. ಸಚಿವರು ತಾವು ನೀಡಿರುವ ಭರವಸೆ ಉಳಿಸಿಕೊಳ್ಳುವ ವಿಶ್ವಾಸವಿದೆ. 
                     - ಜೆ. ಜಗದೀಶ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ, ಭದ್ರಾವತಿ.