Thursday, February 13, 2025

ಶಿಕ್ಷಣ ನಿಯಮ ಉಲ್ಲಂಘಿಸಿ ಕೆಲಸಕ್ಕೆ ನೇಮಿಸಿಕೊಂಡು ವಂಚನೆ

ಕ್ರಮಕ್ಕೆ ಆಗ್ರಹಿಸಿ ಫೆ.೧೭ರಂದು ಬಿಇಓ ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ 

ಭದ್ರಾವತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ಮಾತನಾಡಿದರು. 
    ಭದ್ರಾವತಿ : ನೆಪಮಾತ್ರಕ್ಕೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಂಡು ನಂತರ ಅವರನ್ನು ಬೇರೆ ಬೇರೆ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಿಕ್ಷಣ ನಿಯಮಗಳನ್ನು ಉಲ್ಲಂಘಿಸಿರುವ ಜೊತೆಗೆ ಅವರಿಗೆ ನ್ಯಾಯ ಬದ್ಧವಾಗಿ ಸಿಗಬೇಕಾದ ಸೌಲಭ್ಯದಿಂದ ವಂಚಿಸುತ್ತಿರುವ ಘಟನೆ ನಗರದ ನ್ಯೂಟೌನ್ ಸೆಂಟ್ ಚಾರ್ಲ್ಸ್ ಹೈಸ್ಕೂಲ್‌ನಲ್ಲಿ ನಡೆಯುತ್ತಿದ್ದು, ಇದನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಂಚನೆಗೊಳಗಾದವರಿಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯಿಸಿ ಫೆ.೧೭ರಂದು ಬೆಳಿಗ್ಗೆ ೧೧ ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮುಂಭಾಗಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ತಿಳಿಸಿದರು. 
    ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಉಚಿತ ಶಿಕ್ಷಣ ಕಡ್ಡಾಯ ಮಾಡಿದ್ದರೂ ಸರ್ಕಾರಿ ಶಾಲಾ-ಕಾಲೇಜುಗಳು ದುಸ್ಥಿತಿಗೊಂಡು, ಖಾಸಗಿ ಶಾಲಾ-ಕಾಲೇಜುಗಳು ನಿಯಮ ಮೀರಿ ಕಾನೂನು ಉಲ್ಲಂಘನೆ ಮಾಡುತ್ತಿರುವ ಕ್ರಮ ಸಮಿತಿ ಖಂಡಿಸುತ್ತದೆ ಎಂದರು. 
    ದೇಶದಲ್ಲಿ ಶಿಕ್ಷಣ ವಂಚಿತರಿಗೆ ಕ್ರೈಸ್ತ ಸಮಾಜ ಶಿಕ್ಷಣದ ಸೇವೆ ಮಾಡಿರುವುದು ಅಪಾರವಾದದ್ದು. ದೀನ ದಲಿತರಿಗೆ ಸೇವೆ ಸಲ್ಲಿಸಿದ, ಕುಷ್ಠ ರೋಗಿಗಳ ಸೇವೆ ಮಾಡಿದ ಮದರ್ ತೆರೇಸಾರವರ ಮಾನವೀಯತೆ ಮರೆಯುವಂತದ್ದಲ್ಲ. ಆದರೆ ನಗರದ ಸೆಂಟ್ ಚಾರ್ಲ್ಸ್ ಹೈಸ್ಕೂಲ್‌ನಲ್ಲಿ ಶಿಕ್ಷಣ ನಿಯಮಗಳನ್ನು ಉಲ್ಲಂಘಸಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಅನ್ಯಾಯ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೈಸ್ಕೂಲ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದರು. 
    ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ಸದಸ್ಯರಾದ ವಿನ್ನಿ ಡಿಸೋಜಾ ಕೋಂ ಲಿಗೋರಿಯಾ ಎಂಬುವರು ಕಳೆದ ೧೭ ವರ್ಷಗಳಿಂದ ಸೆಂಟ್ ಚಾರ್ಲ್ಸ್ ಹೈಸ್ಕೂಲ್ ಸಮ್ಮುಖದಲ್ಲಿರುವ ಕರುಣ ಸೇವಾ ಕೇಂದ್ರ ಮತ್ತು ಕರುಣ ಮಹಿಳಾ ಮಂಡಳಿಗಳ ಒಕ್ಕೂಟದಲ್ಲಿ ಕೆಲಸ ನಿರ್ವಹಿಸಿಕೊಂಡು ಬಂದಿದ್ದಾರೆ. ಇವರ ಪಿ.ಎಫ್ ಹಣ ಹೈಸ್ಕೂಲ್ ಮತ್ತು ಸೊಸೈಟಿ ಆಫ್ ದ ಸಿಸ್ಟರ್ ಆಫ್ ಎಸ್.ಟಿ ಚಾರ್ಲ್ಸ್ ಹೆಸರಿನಲ್ಲಿ ಶಿವಮೊಗ್ಗದ ಪಿ.ಎಫ್ ಕಛೇರಿಯಲ್ಲಿರುವ ಖಾತೆಗೆ ಜಮಾ ಮಾಡಲಾಗಿದೆ. ಅಲ್ಲದೆ ಇವರ ವೇತನ ಪ್ರತಿ ತಿಂಗಳು ಇವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಆದರೆ ಕಳೆದ ೫ ವರ್ಷಗಳಿಂದ ಸಿಸ್ಟರ್ ಹೆಲೆನ್ ಮೊರಾಸ್‌ರವರು ಇವರಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದು, ಮೂಡುಬಿದರೆಯಲ್ಲಿರುವ ಇವರ ಸ್ವಂತ ಮನೆಯಲ್ಲಿ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದು, ಇದಕ್ಕೆ ಒಪ್ಪದ ಹಿನ್ನಲೆಯಲ್ಲಿ ಇವರ ವಿರುದ್ಧ ಸ್ವಸಹಾಯ ಸಂಘಗಳ ಸದಸ್ಯರಿಗೆ ಸುಳ್ಳು ಸುದ್ದಿಗಳನ್ನು ಹರಡುವ ಜೊತೆಗೆ ೧೦ ವರ್ಷಗಳವರೆಗೆ ನಿರಂತರವಾಗಿ ಇವರ ಪಿ.ಎಫ್ ಹಣ ಪಾವತಿಸಿದರೆ ೬೦ ವರ್ಷಗಳ ನಂತರ ಪ್ರತಿ ತಿಂಗಳು ೨ ರಿಂದ ೩ ಸಾವಿರ ರು. ಪಿಂಚಣಿ ಬರುತ್ತದೆ ಎಂಬ ಸಂಕಟದಿಂದ ಇವರ ಜೊತೆಗೆ ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ೧೦ ರಿಂದ ೧೨ ಜನರನ್ನು ಸಹ ಅರ್ಧದಲ್ಲಿಯೇ ಕೆಲಸದಿಂದ ತೆಗೆದು ಹಾಕಿದ್ದಾರೆಂದು ಆರೋಪಿಸಿದರು. 
    ಈ ಸಂಬಂಧ ವಿನ್ನಿ ಡಿಸೋಜಾರವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಹೈಸ್ಕೂಲ್‌ಗೆ ನೋಟಿಸ್ ನೀಡಲಾಗಿತ್ತು. ಆದರೆ ನೋಟಿಸ್‌ಗೆ ಸುಳ್ಳು ಮಾಹಿತಿ ನೀಡಲಾಗಿದೆ. ವಿನ್ನಿ ಡಿಸೋಜಾರವರು ಸ್ಕೂಲ್ ಅಥವಾ ಸೇವಾ ಕೇಂದ್ರ ಅಥವಾ ಮಹಿಳಾ ಮಂಡಳಿಗಳ ಒಕ್ಕೂಟದಲ್ಲಿ ಯಾವುದೇ ಕೆಲಸ ನಿರ್ವಹಿಸಿರುವುದಿಲ್ಲ. ಈ ಹಿನ್ನಲೆಯಲ್ಲಿ ಇವರಿಗೆ ಯಾವುದೇ ವೇತನವಾಗಲಿ, ಪಿ.ಎಫ್ ಹಣವಾಗಲಿ ಪಾವತಿಸಿರುವುದಿಲ್ಲ ಎಂದು ತಿಳಿಸಿರುತ್ತಾರೆ ಸುಳ್ಳು ಮಾಹಿತಿ ನೀಡಿರುವುದನ್ನು ಸಮಿತಿ ಖಂಡಿಸುವ ಜೊತೆಗೆ ತಕ್ಷಣ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕಾರ್ಮಿಕ ಇಲಾಖಾಧಿಕಾರಿಗಳು ಸೂಕ್ತ ತನಿಖೆ ನಡೆಸಿ ಸ್ಕೂಲ್ ನೋಂದಣಿ ರದ್ದುಗೊಳಿಸಿ ವಂಚನೆಗೊಳಗಾದವರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದರು.   
    ಪತ್ರಿಕಾಗೋಷ್ಠಿಯಲ್ಲಿ ಟಿ.ಜಿ ಬಸವರಾಜಯ್ಯ, ಬ್ರಹ್ಮಲಿಂಗಯ್ಯ, ಎಂ.ವಿ ಚಂದ್ರಶೇಖರ್, ಸೀನಪ್ಪ, ವಿನ್ನಿ ಡಿಸೋಜಾ, ಮೇರಿಯಮ್ಮ ಮತ್ತು ಗ್ರೇಸಿ ಉಪಸ್ಥಿತರಿದ್ದರು.