Sunday, February 16, 2025

ಪ್ಯಾರಾ ಅಥ್ಲೆಟಿಕ್ಸ್ : ರಾಷ್ಟ್ರಮಟ್ಟಕ್ಕೆ ಎಂ.ಜಿ ಅಭಿಜಿತ್ ಆಯ್ಕೆ

ಎಂ.ಜಿ ಅಭಿಜಿತ್  
    ಭದ್ರಾವತಿ: ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ವಿಕಲಚೇತನ ಎಂ.ಜಿ ಅಭಿಜಿತ್ ೨೩ನೇ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. 
    ಚೆನ್ನೈ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಫೆ.೧೭ ರಿಂದ ೨೦ರವರೆಗೆ ಕ್ರೀಡಾಕೂಟ ನಡೆಯಲಿದ್ದು, ಅಭಿಜಿತ್ ೧೦೦ ಮೀಟರ್ ಹಾಗು ೪೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. 
    ಅಭಿಜಿತ್ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದರು. ಇವರಿಗೆ ಸಿದ್ದಾರ್ಥ ಅಂಧರ ಕೇಂದ್ರ  ಅಧ್ಯಕ್ಷ ಶಿವಬಸಪ್ಪ, ಆಡಳಿತಾಧಿಕಾರಿ ಶಾರದ ಶಿವಬಸಪ್ಪ ಮತ್ತು ಕಾರ್ಯದರ್ಶಿ ಎಂ. ಗುರುಮೂರ್ತಿ ಅಭಿನಂದಿಸಿದ್ದಾರೆ.

ಶ್ರೀ ಕೃಷ್ಣ ದೇವಸ್ಥಾನದ ಮೊದಲ ವರ್ಷದ ವಾರ್ಷಿಕೋತ್ಸವ


ಭದ್ರಾವತಿ ತಾಲೂಕಿನ ಗೊಲ್ಲ-ಯಾದವ ಸಂಘದ ವತಿಯಿಂದ ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ರಸ್ತೆ, ಮೆಸ್ ಸರ್ಕಲ್ ಶ್ರೀ ಕೃಷ್ಣ ದೇವಸ್ಥಾನದ ಮೊದಲ ವರ್ಷದ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆ ಜರುಗಿದವು. ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. 
    ಭದ್ರಾವತಿ : ತಾಲೂಕಿನ ಗೊಲ್ಲ-ಯಾದವ ಸಂಘದ ವತಿಯಿಂದ ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ರಸ್ತೆ, ಮೆಸ್ ಸರ್ಕಲ್ ಶ್ರೀ ಕೃಷ್ಣ ದೇವಸ್ಥಾನದ ಮೊದಲ ವರ್ಷದ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆ ಜರುಗಿದವು. 
    ದೇವತಾ ಪ್ರಾರ್ಥನೆ, ಗುರು ಪ್ರಾರ್ಥನೆ, ಗಣಪತಿ ಪೂಜೆ, ಮಹಾ ಸಂಕಲ್ಪ, ಸ್ವಸ್ತಿ ಪುಣ್ಯಾಹವಾಚನ, ಪಂಚಗವ್ಯ ಪ್ರೋಕ್ಷಣೆ, ಆಚಾರ್ಯಾದಿ ಋತ್ವಿಗ್ವರಣ, ಕಳಶ ಪೂಜೆ, ಗಣಪತಿ ಮಂಡಲ ಆರಾಧನೆ, ನವಗ್ರಹ ಪೂಜೆ, ಕಲಾತತ್ವ ಕಳಶ ಪೂಜೆ, ಮಂಡಲ ಪೂಜೆ, ಅಗ್ನಿ ಪ್ರತಿಷ್ಠೆ, ಗಣಪತಿ ಹೋಮ, ನವಗ್ರಹ ಹೋಮ, ಪರಿವಾರ ದೇವತಾ ಹೋಮ, ಕಲಾತತ್ವ ಹೋಮ, ಪೂರ್ಣಾಹುತಿ, ಕಳಶಾಭಿಷೇಕ, ಅಲಂಕಾರ, ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಹಾಗು ರಾಜಬೀದಿ ಉತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಪ್ರಧಾನ ಅರ್ಚಕ ಗುರುಮೂರ್ತಿಯವರ ಸಾರಥ್ಯದಲ್ಲಿ ನೆರವೇರಿದವು. 
    ಗೊಲ್ಲ-ಯಾದವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗು ಗೊಲ್ಲ-ಯಾದವ ಸಮಾಜದವರು ಮತ್ತು ಗಣ್ಯರು, ದಾನಿಗಳು, ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು. 

ಕುಡಿಯುವ ನೀರಿನ ಯೋಜನೆಯ ಗುದ್ದಲಿಪೂಜೆ, ಉದ್ಘಾಟನೆಗೆ ಕ್ರಮ ಕೈಗೊಳ್ಳಿ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸೂಚನೆ 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್. ಹೇಮಂತ್ 
    ಭದ್ರಾವತಿ : ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಷ್ಟಾಚಾರ ಪಾಲನೆ(ಪ್ರೋಟೋ ಕಾಲ್) ಪ್ರಕಾರ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಗುದ್ದಲಿಪೂಜೆ ಹಾಗು ಉದ್ಘಾಟನೆ ಕಾರ್ಯ ನೆರವೇರಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್. ಹೇಮಂತ್‌ರವರು ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ರವರಿಗೆ ಸೂಚಿಸಿದ್ದಾರೆ. 
    ಕಳೆದ ಸುಮಾರು ೧ ತಿಂಗಳ ಹಿಂದೆ ಜನ್ನಾಪುರ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಟ್ರಸ್ಟ್ ಛೇರ್‍ಮನ್ ಆರ್. ವೇಣುಗೋಪಾಲ್‌ರವರ ನೇತೃತ್ವದಲ್ಲಿ ಮನವಿ ಸಲ್ಲಿಸಿ, ತಾಲೂಕಿನ ಗ್ರಾಮಾಂತರ ವ್ಯಾಪ್ತಿಯ ಉಂಬ್ಳೆಬೈಲು ಹಾಗು ಕಲ್ಲಹಳ್ಳಿ ಗ್ರಾ ಪಂಚಾಯಿತಿ ಮತ್ತು ೨೮ ಹಳ್ಳಿಗಳಲ್ಲಿ ಹಾಗು ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಹಾಗು ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತು ೨೩ ಹಳ್ಳಿಗಳಲ್ಲಿ, ಆನವೇರಿ ಗ್ರಾಮ ಪಂಚಾಯಿತಿ ಮತ್ತು ೩೭ ಹಳ್ಳಿಗಳಲ್ಲಿ ಕುಂಸಿ ಮತ್ತು ಗಾಜನೂರು ಗ್ರಾಮ ಪಂಚಾಯಿತಿ ಮತ್ತು ೮೯ ಹಳ್ಳಿಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಶಿಷ್ಟಾಚಾರ ಪಾಲನೆ ಪ್ರಕಾರ ಗುದ್ದಲಿ ಪೂಜೆ ಕಾರ್ಯಕ್ರಮ ಕೈಗೆತ್ತಿಕೊಳ್ಳಲು ಹಾಗು ತಾಲೂಕಿನ ಅಂತರಗಂಗೆ ಮತ್ತು ೨೧ ಹಳ್ಳಿಗಳಿಗೆ, ದೊಡ್ಡೇರಿ ಮತ್ತು ಇತರೆ ೧೬ ಹಳ್ಳಿಗಳಲ್ಲಿ ಹಾಗು ತಡಸ ಮತ್ತು ೪ ಹಳ್ಳಿಗಳಲ್ಲಿ ಕುಡಿಯುವ ನೀರಿನ ಕಾಮಗಾರಿ ಯೋಜನೆ ಪೂರ್ಣಗೊಂಡಿರುವುದರಿಂದ ಶಿಷ್ಟಾಚಾರ ಪಾಲನೆ ಪ್ರಕಾರ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಕೈಗೆತ್ತಿಕೊಳ್ಳಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಲಾಗಿತ್ತು. 
    ಇದಕ್ಕೆ ಸ್ಪಂದಿಸಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರು ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ರವರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.