Saturday, February 22, 2025

ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಕನ್ನಡ ಕಲಿಯಿರಿ : ಪರುಸಪ್ಪ ಕುರುಬರ

ಭದ್ರಾವತಿಯಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಈ ಬಾರಿ ಸಹ ಹಳೇನಗರದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಾತೃಭಾಷೆ ದಿನಾಚರಣೆ ತಹಸೀಲ್ದಾರ್ ಪರುಸಪ್ಪ ಕುರುಬರ ಉದ್ಘಾಟಿಸಿದರು.  
    ಭದ್ರಾವತಿ: ಕಡ್ಡಾಯವಾಗಿ ಎಲ್ಲಾ ಕಛೇರಿಗಳಲ್ಲೂ ಕನ್ನಡ ಭಾಷೆ  ಬಳಸಬೇಕು. ಎಲ್ಲರೂ ಕನ್ನಡದಲ್ಲಿ ಮಾತನಾಡುವುದನ್ನು ಕಲಿಯಬೇಕು. ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು. 
    ಅವರು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಈ ಬಾರಿ ಸಹ ಹಳೇನಗರದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಾತೃಭಾಷೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.   
    ಉರ್ದು ಶಾಲೆಯಲ್ಲಿ ವಿಶೇಷವಾಗಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಿಸಿಕೊಂಡು ಬರುತ್ತಿರುವುದು ತುಂಬಾ ಸಂತೋಷದ ವಿಷಯವಾಗಿದೆ. ನಮ್ಮ ಮಾತೃ ಭಾಷೆಯಾದ ಕನ್ನಡ ನಾವೆಲ್ಲರೂ ಸರಿಯಾಗಿ ಅರ್ಥಮಾಡಿಕೊಂಡು ಕಲಿಯುವ ಮೂಲಕ ಇತರರಿಗೂ ಕಲಿಸಬೇಕೆಂದರು. 
  ವಿಶ್ವ ಮಾತೃ ಭಾಷೆ ದಿನಾಚರಣೆ ಕುರಿತು ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಪ್ರೊ. ಎಂ. ಚಂದ್ರಶೇಖರಯ್ಯ ಮಾತನಾಡಿ, ಕನ್ನಡ ಭಾಷೆಯ ಬೆಳವಣಿಗೆ ಕನ್ನಡದ ಅಸ್ತಿತ್ವ ಮತ್ತು ಕನ್ನಡ ಬಳಸುವ ರೀತಿಯ ಸೂಚಕವಾಗಿದೆ. ಪ್ರಸ್ತುತ ಕನ್ನಡ ವಿಶ್ವದ ಪ್ರಮುಖ ಭಾಷೆಗಳಲ್ಲಿ ಒಂದಾಗಿದೆ. ಬೇರೆ ಭಾಷೆಯವರು ಕನ್ನಡ ಭಾಷೆಯನ್ನು ಕಲಿತು ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಕಲಾವಿದರು, ಸಾಹಿತಿ, ಕವಿಗಳಾಗಿ ಮುಂಚೂಣಿಯಲ್ಲಿದ್ದಾರೆ. ಇಂತಹವರ ಸಾಲಿನಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ದ.ರಾ ಬೇಂದ್ರೆ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಹ ಸೇರಿದ್ದಾರೆ ಎಂದರು. 
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಶಾಲೆಯ ಮುಖ್ಯ ಶಿಕ್ಷಕಿ ಶಹನ ಫಾತೀಮ ಸೇರಿದಂತೆ ಇನ್ನಿತರರು ಮಾತನಾಡಿದರು. ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 
  ವೇದಿಕೆಯ ಖಜಾಂಚಿ ಗಂಗರಾಜ್, ಮಲ್ಲಿಕಾ, ಕೋಕಿಲ, ಸುಚಿತ್ರ ಸೇರಿದಂತೆ ಶಾಲೆಯ ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಣ ಬೆಳೆಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು

ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳಲು ಭದ್ರಾವತಿ ನಗರದ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಶನಿವಾರ ವಿಶೇಷ ರೈಲಿನಲ್ಲಿ ಪ್ರಯಾಣ ಬೆಳೆಸಿದರು. 
    ಭದ್ರಾವತಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳಲು ನಗರದ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಶನಿವಾರ ವಿಶೇಷ ರೈಲಿನಲ್ಲಿ ಪ್ರಯಾಣ ಬೆಳೆಸಿದರು. 
    ನಗರದ ರೈಲ್ವೆ ನಿಲ್ದಾಣಕ್ಕೆ ಶಿವಮೊಗ್ಗದಿಂದ ಸಂಜೆ ೫.೨೦ಕ್ಕೆ ಆಗಮಿಸಿದ ರೈಲಿನಲ್ಲಿ ಮಂಗೋಟೆ ರುದ್ರೇಶ್, ಕವಿತಾ ರಾವ್, ಬಾರಂದೂರು ಪ್ರಸನ್ನ, ರವಿಕುಮಾರ್, ಸುಲೋಚನಾ, ದೇವರಾಜ್ ಸೇರಿದಂತೆ ಬಿಜೆಪಿ ಪಕ್ಷದ ಹಾಗು ಹಿಂದೂಪರ ಸಂಘಟನೆಗಳ  ಮುಖಂಡರು, ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ಪ್ರಯಾಣ ಬೆಳೆಸಿದರು. ಇದಕ್ಕೂ ಮೊದಲು ರೈಲ್ವೆ ನಿಲ್ದಾಣದಲ್ಲಿ ಮುಖಂಡರು, ಕಾರ್ಯಕರ್ತರು ಸಂಭ್ರಮ ಹಂಚಿಕೊಂಡರು. 
    ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಹಿಂದುಳಿದ ಮೋರ್ಚಾದ ರಾಜಶೇಖರ್ ಉಪ್ಪಾರ ಸೇರಿದಂತೆ ಇನ್ನಿತರರು ಶುಭಕೋರಿದರು.