Friday, March 21, 2025

ಅರಣ್ಯ ಸಚಿವರ ನೇತೃತ್ವದಲ್ಲಿ ಸಭೆ : ಎಂಪಿಎಂ ಕಾರ್ಖಾನೆ ಪುನರ್ ಪ್ರಾರಂಭಿಸುವ ಭರವಸೆ

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನರ್ ಪ್ರಾರಂಭಿಸುವ ಕುರಿತು ಸದನದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್  ಚರ್ಚಿಸಿದ ಪರಿಣಾಮ ಶುಕ್ರವಾರ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಸಭೆ ಜರುಗಿತು. 
    ಭದ್ರಾವತಿ : ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ (ಎಂ.ಪಿ.ಎಂ) ಪುನರ್ ಪ್ರಾರಂಭಿಸುವ ಸಂಬಂಧ ಅರಣ್ಯ ಇಲಾಖೆಯಿಂದ ಎದುರಾಗಿರುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದ್ದಾರೆ. 
    ಕಳೆದ ೩ ದಿನಗಳ ಹಿಂದೆ ಎಂಪಿಎಂ ಕಾರ್ಖಾನೆ ಪುನರ್ ಪ್ರಾರಂಭಿಸುವ ಕುರಿತು ಸದನದಲ್ಲಿ ನಾನು ಚರ್ಚಿಸಿದ ಪರಿಣಾಮ ಶುಕ್ರವಾರ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಸಭೆ ಜರುಗಿತು. ಪ್ರಸ್ತುತ ಎಂಪಿಎಂ ಕಾರ್ಖಾನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಸಚಿವರಿಗೆ ತಿಳಿಸುವ ಮೂಲಕ ಕಾರ್ಖಾನೆ ಪುನರ್ ಪ್ರಾರಂಭಿಸುವುದರಿಂದ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸುವಂತಹ ಕಾರ್ಯ ಸಾಕಾರಗೊಳ್ಳುವ ಕುರಿತು ಮನವರಿಕೆ ಮಾಡಿಕೊಡಲಾಯಿತು. 
    ಸಚಿವರು, ಅರಣ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಆದಷ್ಟು ಬೇಗನೆ ಕಾರ್ಖಾನೆಯನ್ನು ಪುನರ್ ಪ್ರಾರಂಭಿಸಲು ಎಲ್ಲ ರೀತಿಯ ಸಹಕಾರ ನೀಡಲು ಬದ್ಧರಿರುವುದಾಗಿ ತಿಳಿಸಿದ್ದು, ಇದರಿಂದಾಗಿ ಮುಂದಿನ ದಿನಗಳಲ್ಲಿ ಕಾರ್ಖಾನೆ ಪುನರ್ ಪ್ರಾರಂಭಿಸುವ ವಿಶ್ವಾಸ ಹೆಚ್ಚಾಗಿದೆ ಎಂದು ಶಾಸಕರು ತಿಳಿಸಿದ್ದಾರೆ. 

ಮಾ.೨೨ರಂದು ಪುನೀತ್‌ರಾಜ್‌ಕುಮಾರ್ ೫೦ನೇ ಹುಟ್ಟುಹಬ್ಬ



    ಭದ್ರಾವತಿ: ನಗರದ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್‌ರಾಜ್‌ಕುಮಾರ್‌ರವರ ೫೦ನೇ ವರ್ಷದ ಹುಟ್ಟುಹಬ್ಬ ಮಾ.೨೨ರ ಶನಿವಾರ ಸಂಜೆ ೪ ಗಂಟೆಗೆ ನ್ಯೂಟೌನ್ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ಆಯೋಜಿಸಲಾಗಿದೆ. 
    ನಗರಸಭೆ ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎರೇಹಳ್ಳಿ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. 
    ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ನಟರಾಜ್, ಸಂಘದ ಗೌರವ ಸಲಹೆಗಾರ ರಾಜವಿಕ್ರಂ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ದೇವರಾಜ್, ಹಿರಿಯ ಕಲಾವಿದ ಜೆ.ಪಿ ನಂಜುಂಡೇಗೌಡ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 
    ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ಮತ್ತು ರಂಗ ಕಲಾವಿದ ವೈ.ಕೆ ಹನುಮಂತಯ್ಯ ಅವರಿಗೆ ಸನ್ಮಾನ ನಡೆಯಲಿದೆ. ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದು, ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಕೇಂದ್ರ ಉಕ್ಕು ಸಚಿವರಿಂದ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರಿಗೆ ಕೆಲಸದ ದಿನ ಹೆಚ್ಚಿಸುವ ಭರವಸೆ

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಭದ್ರಾವತಿ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ನಿಯೋಗ ಶುಕ್ರವಾರ ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಿಗೆ ಕೆಲಸದ ದಿನ ಹೆಚ್ಚಿಸುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರ ಸ್ವಾಮಿಯವರು ಭರವಸೆ ನೀಡಿದ್ದಾರೆ. 
    ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಗುತ್ತಿಗೆ ಕಾರ್ಮಿಕರ ನಿಯೋಗ ಶುಕ್ರವಾರ ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. 
    ಕಾರ್ಖಾನೆ ಅಭಿವೃದ್ಧಿ ಹೊಂದುವ ಯಾವುದೇ ಲಕ್ಷಣಗಳು ಕಂಡು ಬರುತ್ತಿಲ್ಲ. ಇದರಿಂದಾಗಿ ಕಾರ್ಮಿಕ ವಲಯ ಹಾಗು ಕ್ಷೇತ್ರದ ಜನತೆಯಲ್ಲಿ ಆತಂಕ ಛಾಯೆ ಆವರಿಸಿಕೊಂಡಿದ್ದು, ಅಲ್ಲದೆ ಗುತ್ತಿಗೆ ಕಾರ್ಮಿಕರಿಗೆ ಕೆಲಸದ ದಿನಗಳು ಹೆಚ್ಚಳವಾಗದ ಕಾರಣ ಸಂಕಷ್ಟದಲ್ಲಿ ಬದುಕುವಂತಾಗಿದೆ ಎಂದು ಎಂದು ನಿಯೋಗ ಅಳಲು ವ್ಯಕ್ತಪಡಿಸಿದೆ.  
    ಸಚಿವ ಕುಮಾರಸ್ವಾಮಿ ನಿಯೋಗಕ್ಕೆ ಸ್ಪಂದಿಸಿ ಕಾರ್ಖಾನೆ ಅಭಿವೃದ್ಧಿ ಹಾಗು ಗುತ್ತಿಗೆ ಕಾರ್ಮಿಕರಿಗೆ ಕೆಲಸ ದಿನ ಹೆಚ್ಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆಂದು ಗುತ್ತಿಗೆ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್ ತಿಳಿಸಿದ್ದಾರೆ.  
    ನಿಯೋಗದಲ್ಲಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸೇರಿದಂತೆ ಪದಾಧಿಕಾರಿಗಳು, ನಿರ್ದೇಶಕರು ಪಾಲ್ಗೊಂಡಿದ್ದರು. 

ಮಾ.೨೩ರಂದು ದೈವಜ್ಞ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಭದ್ರಾವತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಮಾಹಿತಿ ನೀಡಿದರು. 
    ಭದ್ರಾವತಿ: ಮುಂಬರಲಿರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಆದೇಶದ ಮೇರೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಮಾ.೨೩ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹೇಳಿದರು. 
    ನಗರದ ಕೋಡಿಹಳ್ಳಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ.  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರುಗಳು ಸಭೆಯಲ್ಲಿ ಉಪಸ್ಥಿತರಿರುವರು ಎಂದರು. 
    ಮುಂಬರಲಿರುವ ತಾಲೂಕು ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಮೂಲಕ ಅಭ್ಯರ್ಥಿಗಳ ಗೆಲುವಿಗೆ ಶಕ್ತಿ ಮೀರಿ ಶ್ರಮಿಸಲಾಗುವುದು. ಈ ಹಿನ್ನಲೆಯಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಪಕ್ಷದ ಚುನಾಯಿತ ಪ್ರತಿನಿಧಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು. 
    ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಮುಖಂಡರಾದ ಸಿ. ಜಯಪ್ಪ, ಮಂಜಪ್ಪ, ಬಿ. ಗಂಗಾಧರ್, ಅಮೀರ್ ಜಾನ್, ಜುಂಜ್ಯಾನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.