ಮನೆ ಬಾಗಿಲಿಗೆ ಬರುವವರಿಗೆ ಸೂಕ್ತ ಮಾಹಿತಿ ನೀಡಿ : ಎಸ್. ಪುಟ್ಟರಾಜು

ಎಸ್. ಪುಟ್ಟರಾಜು
ಭದ್ರಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿದ್ದು, ಈ ಹಿನ್ನಲೆಯಲ್ಲಿ ಜಾತಿಗಣತಿಗೆ ಮನೆ ಮನೆಗೆ ಬರುವವರಿಗೆ ಸೂಕ್ತ ದಾಖಲಾತಿಗಳೊಂದಿಗೆ ಮಾಹಿತಿ ನೀಡುವುದು ಅಗತ್ಯವಾಗಿದೆ. ತಾಲೂಕಿನ ಶೋಷಿತ ಮಾದಿಗ ಸಮಾಜದ ಮುಖಂಡರು, ಚಿಂತಕರು, ನೌಕರರು, ಕೂಲಿ ಕಾರ್ಮಿಕರು ಮತ್ತು ಸ್ತ್ರೀಶಕ್ತಿ ಸಮುದಾಯದವರು, ವಿದ್ಯಾರ್ಥಿಗಳು ಒಗ್ಗಟ್ಟಾಗಿ ಶೋಷಿತ ಸಮಾಜದ ಹಿತ ದೃಷ್ಟಿಯಿಂದ ಈ ಕುರಿತು ಎಲ್ಲೆಡೆ ಜಾಗೃತಿ ಮೂಡಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಅಧ್ಯಕ್ಷ ಎಸ್. ಪುಟ್ಟರಾಜು ಕೋರಿದ್ದಾರೆ.
ಒಳಮೀಸಲಾತಿಗಾಗಿ ಕಳೆದ ಸುಮಾರು ಮೂರು ದಶಗಳಿಂದ ಹೋರಾಟ ನಡೆಸಿಕೊಂಡು ಬಂದಿರುವ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯದ ಹರಿಕಾರ ಸಿದ್ದರಾಮಯ್ಯರವರು ಸಂತಸದ ಸುದ್ದಿ ನೀಡಿದ್ದು, ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿಗೆ ಮುಂದಾಗಿರುವುದು ಉತ್ತಮ ನಿರ್ಧಾರವಾಗಿದೆ. ಹೋರಾಟದ ಫಲ ಒಳಮೀಸಲು ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯಗಳಿಗೆ ಇದೆ ಎಂಬ ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾನೂನು ತೊಡಕು ಆಗದ ರೀತಿ ಎಚ್ಚರಿಕೆ ಹೆಜ್ಜೆ ಇಟ್ಟಿದ್ದ ಸಿದ್ದರಾಮಯ್ಯ ಸರ್ಕಾರ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ್‌ರವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚಿಸಿತು. ಆಯೋಗ ಮಧ್ಯಂತರ ವರದಿ ಸಲ್ಲಿಸಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿ ನಡೆಸಿ ಎಂಪೋರಿಕಲ್ ದತ್ತಾಂಶ ಪಡೆದು ಜಾರಿಗೊಳಿಸುವುದರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನೆ ಸಲ್ಲಿಸುವುದು ಸೇರಿ ಯಾವುದೇ ರೀತಿ ಕಾನೂನು ತೊಡಕು ಎದುರಾಗದು ಎಂಬ ಸಲಹೆ ನೀಡಿದ ಮೇರೆಗೆ ತಕ್ಷಣವೇ ಸರ್ಕಾರ ಸಚಿವ ಸಂಪುಟದಲ್ಲಿ ಜಾತಿಗಣತಿಗೆ ಒಪ್ಪಿಗೆ ನೀಡಿದೆ. ಈ ಮೂಲಕ ನೊಂದ ಜನರ ಪರವಾಗಿ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಸರ್ಕಾರ ಜಾತಿಗಣತಿಗೆ ಆಡಳಿತಾತ್ಮಕ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಜೂನ್ ತಿಂಗಳಿನಲ್ಲಿ ಜಾರಿಗೊಳಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಮಾಜ ಕಲ್ಯಾಣ ಖಾತೆ ಮಾಜಿ ಸಚಿವ ಎಚ್. ಆಂಚನೇಯರವರು ವಿಶೇಷ ಕಾಳಜಿವಹಿಸಿ ಹಗಲಿರುಳು ಒಳಮೀಸಲಾತಿ ಜಾರಿಗಾಗಿ ಶ್ರಮಿಸುತ್ತಾ ಬಂದಿದ್ದಾರೆ. ಜೊತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ, ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ, ಸಮುದಾಯದ ಎಲ್ಲಾ ಶಾಸಕರು, ಮಾಜಿ ಶಾಸಕರು, ದಲಿತಪರ ಸಂಘಟನೆಗಳು ಕಳೆದ ಸುಮಾರು ೩೦ ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದು, ಹೋರಾಟಕ್ಕೆ ಇದೀಗ ಫಲ ಲಭಿಸಿದೆ. ಇದನ್ನು ಸಮುದಾಯದವರು ಸರಿಯಾಗಿ ಅರ್ಥಮಾಡಿಕೊಂಡು. ಜಾತಿಗಣತಿಗೆ ಮನೆ ಬಾಗಿಲಿಗೆ ಬರುವವರಿಗೆ ಆಧಾರ್ ಕಾರ್ಡ್ ಸಂಖ್ಯೆ ಜೊತೆಗೆ ಜೀವನ ಪರಿಸ್ಥಿತಿ, ಶೈಕ್ಷಣಿಕ, ಸಾಮಾಜಿಕ ಹಾಗು ಆರ್ಥಿಕ ಪರಿಸ್ಥಿತಿಯನ್ನು ದಾಖಲಿಸಲು ಸಹಕರಿಸಿ ಸಮುದಾಯದವರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗುವಂತೆ ಪುಟ್ಟರಾಜು ಮನವಿ ಮಾಡಿದ್ದಾರೆ.