ನಗರಸಭೆ ಸಾಮಾನ್ಯಸಭೆಯಲ್ಲಿ ಆಡಳಿತ ರೂಢ ಪಕ್ಷದ ಸದಸ್ಯರಿಂದಲೇ ಪ್ರತಿಭಟನೆ

ಕುಡಿಯುವ ನೀರಿನ ಸಮಸ್ಯೆ ಉಲ್ಬಣ, ಯುಜಿಡಿ ಕಾಮಗಾರಿ ನಿರ್ಲಕ್ಷ್ಯದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬುಧವಾರ ಭದ್ರಾವತಿ ನಗರಸಭೆಯಲ್ಲಿ ನಡೆದ ಸಭೆಯಲ್ಲಿ ಆಡಳಿತ ರೂಢ ಪಕ್ಷದ ಸದಸ್ಯರೇ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಅದರಲ್ಲೂ ಸದಸ್ಯೆ ಲತಾ ಚಂದ್ರಶೇಖರ್ ಬಳೆ ತೋರಿಸಿ ಆಕ್ರೋಶ ಹೊರ ಹಾಕಿದರು.
ಭದ್ರಾವತಿ: ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಅಲ್ಲದೆ ವಾರ್ಡ್‌ಗಳಲ್ಲಿ ಚರಂಡಿ, ರಸ್ತೆ ಸೇರಿದಂತೆ ಯುಜಿಡಿ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸದೆ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆಂದು ಆಡಳಿತ ರೂಢ ಪಕ್ಷದ ಸದಸ್ಯರೇ ಬುಧವಾರ ನಡೆದ ಸಾಮಾನ್ಯಸಭೆಯಲ್ಲಿ ಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಆರಂಭದಲ್ಲಿ ಆಡಳಿತ ರೂಢ ಪಕ್ಷದ ವಾರ್ಡ್ ನಂ.೬ರ ಸದಸ್ಯ ಆರ್. ಶ್ರೇಯಸ್ ವಾರ್ಡ್ ನಂ.೩ರ ಸದಸ್ಯ ಜಾರ್ಜ್ ಮತ್ತು ವಾರ್ಡ್ ನಂ.೩೩ರ ಪಕ್ಷೇತರ ಸದಸ್ಯ ಆರ್. ಮೋಹನ್ ಕುಮಾರ್ ಸಭೆಯ ಬಾವಿಗಿಳಿದು ಪ್ರತಿಭಟಿಸುವ ಮೂಲಕ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ಅಭಿಯಂತರರಾದ ಶಿವಪ್ರಸಾದ್ ಹಾಗು ಪ್ರಸಾದ್ ಮತ್ತು ಸಂತೋಷ್ ಪಾಟೀಲ್ ಸೇರಿದಂತೆ ಇನ್ನಿತರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿರುವ ಕುರಿತು ಮಾಹಿತಿ ನೀಡಿದರೂ ಸಹ ಯಾರು ಗಮನ ಹರಿಸುತ್ತಿಲ್ಲ. ಇದರಿಂದಾಗಿ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಕ್ಷಣ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.
ಈ ನಡುವೆ ಅಧಿಕಾರಿಗಳು ಸಮಜಾಯಿಷಿ ನೀಡಲು ಪ್ರಯತ್ನಿಸಿದರೂ ಸಹ ಸಾಧ್ಯವಾಗಲಿಲ್ಲ. ಸದಸ್ಯರಾದ ಬಿ.ಕೆ ಮೋಹನ್, ಬಿ.ಟಿ ನಾಗರಾಜ್, ಚನ್ನಪ್ಪ, ವಿ. ಕದಿರೇಶ್, ಟಿಪ್ಪುಸುಲ್ತಾನ್, ಕೆ. ಸುದೀಪ್ ಕುಮಾರ್ ಸೇರಿದಂತೆ ಇನ್ನಿತರ ಸದಸ್ಯರು ಸುಮಾರು ಅರ್ಧ ತಾಸು ಅಧಿಕಾರಿಗಳ ವರ್ತನೆ ಹಾಗು ವಾರ್ಡ್‌ಗಳಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು. ಈ ನಡುವೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಮಾತನಾಡಿ, ೧ ವಾರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ಈ ನಡುವೆ ವಿದ್ಯುತ್ ಸಮಸ್ಯೆಯಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪದ ಹಿನ್ನಲೆಯಲ್ಲಿ ಮೆಸ್ಕಾಂ ಅಧಿಕಾರಿಗಳಿಂದ ವಿದ್ಯುತ್ ಸಮಸ್ಯೆ ಕುರಿತು ಮಾಹಿತಿ ಪಡೆಯಲಾಯಿತು.
ಕುಡಿಯುವ ನೀರಿನ ಸಮಸ್ಯೆ ಜೊತೆಗೆ ವಾರ್ಡ್‌ಗಳಲ್ಲಿ ಚರಂಡಿ, ರಸ್ತೆ ಸೇರಿದಂತೆ ಯುಜಿಡಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಅಧಿಕಾರಿಗಳು ಹಾಗು ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸುವಲ್ಲಿ ನಿರ್ಲಕ್ಷ್ಯತನವಹಿಸಿದ್ದಾರೆ. ಅವರಿಗೆ ಕಾಮಗಾರಿ ನಡೆಸಲು ಸಾಧ್ಯವಾಗದಿದ್ದರೆ ಕೈಗಳಿಗೆ ಬಳೆ ಧರಿಸಿಕೊಂಡು ಇರಲಿ ಎಂದು ವಾರ್ಡ್ ನಂ. ೩೪ರ ಸದಸ್ಯೆ ಲತಾ ಚಂದ್ರಶೇಖರ್ ಬಳೆ ಪ್ರದರ್ಶಿಸುವ ಮೂಲಕ ಆಕ್ರೋಶ ಹೊರ ಹಾಕಿದರು. ಸುಮಾರು ೬ ತಿಂಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ. ವಾರ್ಡ್‌ಗಳ ನಿವಾಸಿಗಳು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಕಾಮಗಾರಿ ತಕ್ಷಣ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗು ಗುತ್ತಿಗೆದಾರರಿಗೆ ಹಲವು ಬಾರಿ ಮನವಿ ಮಾಡಿದರೂ ಸಹ ಏನೂ ಪ್ರಯೋಜನವಾಗಿಲ್ಲ ಎಂದು ಅಳಲು ತೋರ್ಪಡಿಸಿಕೊಂಡರು.
ಗುತ್ತಿಗೆದಾರ ಸತೀಶ್ ಪರವಾಗಿ ಜಿಪಿಎ ಹೋಲ್ಡರ್ ಪಡೆದಿರುವ ಅಭಿಲಾಷ್ ಸಭೆಗೆ ಹಣದ ಸಮಸ್ಯೆ ಎದುರಾಗಿರುವ ಕುರಿತು ಮಾಹಿತಿ ನೀಡಿದರು. ಈಗಾಗಲೇ ನಡೆಸಿರುವ ಕಾಮಗಾರಿಗೆ ಇನ್ನೂ ಹಣ ಬಂದಿಲ್ಲ. ಈ ಹಿನ್ನಲೆಯಲ್ಲಿ ವಿಳಂಬವಾಗಿದೆ. ಆದರೂ ಸಹ ಕಾಮಗಾರಿ ಪೂರ್ಣಗೊಳಿಸಲಾಗುವುದು. ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಈ ನಡುವೆ ಸದಸ್ಯ ಚನ್ನಪ್ಪ ಮಾತನಾಡಿ, ಕಾಮಗಾರಿ ಮುಕ್ತಾಯಗೊಳಿಸುವುದು ಗುತ್ತಿಗೆದಾರರ ಜವಾಬ್ದಾರಿಯಾಗಿದೆ. ಈಗಾಗಲೇ ಮುಂಗಡ ಹಣ ಸಹ ಪಾವತಿಸಲಾಗಿದೆ. ಆದರೂ ಸಹ ಕಾಮಗಾರಿ ಪೂರ್ಣಗೊಳಿಸದಿರುವುದು ಸರಿಯಲ್ಲ ಎಂದರು.
ಈ ನಡುವೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಮಾತನಾಡಿ, ಚರಂಡಿ, ರಸ್ತೆ ಸೇರಿದಂತೆ ಯುಜಿಡಿ ಕಾಮಗಾರಿಗಳನ್ನು ಮುಂದಿನ ೧೫ ದಿನಗಳಲ್ಲಿ ಬಗೆಹರಿಸುವುದಾಗಿ ಭರವಸೆ ನೀಡಿದರು.
ಸದಸ್ಯರಾದ ಟಿಪ್ಪು ಸುಲ್ತಾನ್, ಬಿ.ಟಿ ನಾಗರಾಜ್ ಸೇರಿದಂತೆ ಇನ್ನಿತರರು ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗಗಳನ್ನು ಕಬಳಿಸಲಾಗುತ್ತಿದೆ. ಈ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ಸಭೆ ಆರಂಭವಾಗಿ ೨ ತಾಸು ಕಳೆದರೂ ಸಹ ಅಜೆಂಡಾದಲ್ಲಿನ ಪ್ರಸ್ತಾವನೆಗಳ ಕುರಿತು ಚರ್ಚೆ ನಡೆಯಲಿಲ್ಲ. ನಗರಸಭೆ ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್ ಉಪಸ್ಥಿತರಿದ್ದರು.