ಭದ್ರಾವತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ಹಾಗು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ೯೭ ಬೆಟಾಲಿಯನ್ ಕ್ಷಿಪ್ರ ಕಾರ್ಯಾಚರಣೆ ಪಡೆ(ಆರ್‌ಎಎಫ್) ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ವಿಶ್ವ ಮಲೇರಿಯಾ ದಿನ ಕಾರ್ಯಕ್ರಮಕ್ಕೆ ಕಮಾಂಡೆಂಟ್ ಕಮಲೇಶ್ ಕುಮಾರ್ ಚಾಲನೆ ನೀಡಿದರು.
ಭದ್ರಾವತಿ: ಕರ್ತವ್ಯದ ನಡುವೆಯೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ಮಲೇರಿಯಾ ಕುರಿತು ಹೆಚ್ಚಿನ ತಿಳುವಳಿಕೆ ಹೊಂದುವ ಮೂಲಕ ಮುನ್ನಚ್ಚರಿಕೆವಹಿಸುವಂತೆ ನಗರದ ಮಿಲ್ಟ್ರಿಕ್ಯಾಂಪ್ ೯೭ ಬೆಟಾಲಿಯನ್ ಕ್ಷಿಪ್ರ ಕಾರ್ಯಾಚರಣೆ ಪಡೆ(ಆರ್‌ಎಎಫ್) ಕಮಾಂಡೆಂಟ್ ಕಮಲೇಶ್ ಕುಮಾರ್ ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ಹಾಗು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ೯೭ ಬೆಟಾಲಿಯನ್ ಕ್ಷಿಪ್ರ ಕಾರ್ಯಾಚರಣೆ ಪಡೆ(ಆರ್‌ಎಎಫ್) ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ವಿಶ್ವ ಮಲೇರಿಯಾ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ದಿನ ಒತ್ತಡದಲ್ಲಿ ಕಾರ್ಯನಿರ್ವಹಿಸಬೇಕಾಗಿರುವ ಅಧಿಕಾರಿಗಳು, ಸಿಬ್ಬಂದಿಗಳು ಮಲೇರಿಯಾ ಸೇರಿದಂತೆ ಇನ್ನಿತರ ರೋಗಗಳು ಬಾರದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಅನುಸರಿಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮ ಹೆಚ್ಚಿನ ಸಹಕಾರಿಯಾಗಿದೆ ಎಂದರು.
ಪ್ರಾಸ್ತಾವಿಕವಾವಗಿ ಮಾತನಾಡಿದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗುಡದಪ್ಪ ಕಸಬಿ, ಮಲೇರಿಯಾ ದೇಶದ ಬಹುದೊಡ್ಡ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿದೆ. ಅಧಿಕ ಜನರು ಮಲೇರಿಯಾ ಅಪಾಯದಲ್ಲಿದ್ದಾರೆ. ಕಳೆದ ವರ್ಷ ಜಿಲ್ಲೆಯಲ್ಲಿ ೨೬ ಪ್ರಕರಣಗಳು ಪತ್ತೆಯಾಗಿದ್ದು, ಪ್ರಸ್ತುತ ೫ ಪ್ರಕರಣಗಳು ದಾಖಲಾಗಿವೆ ಎಂದರು.
ವಿಶ್ವದಾದ್ಯಂತ ಮಲೇರಿಯಾ ನಿರ್ಮೂಲನೆ ಮಾಡಬೇಕೆಂಬ ಉದ್ದೇಶದೊಂದಿಗೆ ಪ್ರತಿವರ್ಷ ವಿಶ್ವ ಮಲೇರಿಯಾ ದಿನ ಆಚರಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಈ ಬಾರಿ `ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ ಮರು ಹೂಡಿಕೆ ಮಾಡಿ, ಮರು ಕಲ್ಪನೆ ಮಾಡಿ, ಮರು ಉತ್ತೇಜನ ನೀಡೋಣ' ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಮಲೇರಿಯಾ ಕುರಿತು ಪ್ರತಿಯೊಬ್ಬರು ತಿಳುವಳಿಕೆ ಹೊಂದುವ ಮೂಲಕ ಬಾರದಂತೆ ಎಚ್ಚರವಹಿಸಬೇಕೆಂದರು.
೯೭ ಬೆಟಾಲಿಯನ್ ಕ್ಷಿಪ್ರ ಕಾರ್ಯಾಚರಣೆ ಪಡೆ(ಆರ್‌ಎಎಫ್) ಕಮಾಂಡೆಂಟ್-೨ ಸಚಿನ್ ಗಾಯಕ್‌ವಾಡ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಪ್ರಭಾರ ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹಿರಿಯ ಆರೋಗ್ಯ ನಿರೀಕ್ಷಕರಾದ ಆನಂದ ಮೂರ್ತಿ, ನೀಲೇಶ್ ರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ಹಾಗು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಮತ್ತು ೯೭ ಬೆಟಾಲಿಯನ್ ಕ್ಷಿಪ್ರ ಕಾರ್ಯಾಚರಣೆ ಪಡೆ(ಆರ್‌ಎಎಫ್) ಅಧಿಕಾರಿಗಳು ಹಾಗು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಆರ್‌ಎಎಫ್ ಸಬ್ ಇನ್ಸ್‌ಪೆಕ್ಟರ್ ರಾಜೀವ್ ಕುಮಾರ್ ನಿರೂಪಿಸಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಬಾಯಿ ವಂದಿಸಿದರು. ಇದಕ್ಕೂ ಮೊದಲು ಎಂಪಿಎಂ ಕಾರ್ಖಾನೆ ಮುಖ್ಯದ್ವಾರದಿಂದ ಬೈಕ್ ರ್‍ಯಾಲಿ ಆರಂಭಿಸಿ ಎಂಪಿಎಂ-ವಿಐಎಸ್‌ಎಲ್ ರಸ್ತೆ ಮಾರ್ಗವಾಗಿ ಅಂಬೇಡ್ಕರ್ ವೃತ್ತ, ಹೊಸಸೇತುವೆ ರಸ್ತೆ, ತಾಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ಹಾಲಪ್ಪ ವೃತ್ತ ಮೂಲಕ ಪುನಃ ಎಂಪಿಎಂ ಮುಖ್ಯದ್ವಾರಕ್ಕೆ ಬಂದು ತಲುಪಿತು.