
ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ವತಿಯಿಂದ ಭದ್ರಾವತಿ ನಗರದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆಯಲ್ಲಿ ಹಲವಾರು ದೂರುಗಳು ಸಲ್ಲಿಕೆಯಾದವು.
ಭದ್ರಾವತಿ : ಸಂಬಂಧಪಟ್ಟ ದಾಖಲೆಗಳು ಸಮರ್ಪಕವಾಗಿದ್ದಲ್ಲಿ ಯಾವುದೇ ಪ್ರಕರಣವಾಗಿರಲಿ ಇತ್ಯರ್ಥಪಡಿಸಿಕೊಡಲಾಗುವುದು. ಎಲ್ಲಾ ದೂರುಗಳನ್ನು ಸ್ವೀಕರಿಸಲಾಗುವುದು. ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡದೆ ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆ ಯಶಸ್ವಿಗೊಳಿಸುವಂತೆ ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕ ಚಂದ್ರಶೇಖರ್ ಮನವಿ ಮಾಡಿದರು.
ಅವರು ಉಪ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ವತಿಯಿಂದ ನಗರದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆಯ ನೇತೃತ್ವವಹಿಸಿ ಮಾತನಾಡಿದರು.
ಪ್ರಮುಖವಾಗಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜುರವರು ತಮ್ಮ ದೂರುಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿ ಕಳೆದ ಹಲವಾರು ವರ್ಷಗಳಿಂದ ಲೋಕಾಯುಕ್ತ ಅಧಿಕಾರಿಗಳಿಗೆ ಸಭೆಯಲ್ಲಿ ದೂರು ಸಲ್ಲಿಸಲಾಗುತ್ತಿದೆ. ಆದರೆ ಯಾವುದೇ ದೂರುಗಳು ಇತ್ಯರ್ಥಗೊಂಡಿಲ್ಲ. ಕೇವಲ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುತ್ತಿದೆ. ಆದರೆ ಯಾವುದೇ ಕ್ರಮ ಅನುಷ್ಠಾನಗೊಳ್ಳುತ್ತಿಲ್ಲ ಎಂದು ದೂರಿದರು.
ಇದಕ್ಕೆ ಪ್ರತಿಯಾಗಿ ಮಾತನಾಡಿದ ಚಂದ್ರಶೇಖರ್, ಬೇರೆ ಅಧಿಕಾರಿಗಳ ರೀತಿ ನಾನಲ್ಲ. ನನ್ನ ಮೇಲೆ ವಿಶ್ವಾಸವಿಟ್ಟು ದೂರು ಸಲ್ಲಿಸಿ. ಸಮರ್ಪಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದರು.
ಸಾಮಾಜಿಕ ಕಾರ್ಯಕರ್ತರಾದ ಶಶಿಕುಮಾರ್ ಗೌಡ ದೂರು ಸಲ್ಲಿಸಿ, ಪ್ರತಿ ವರ್ಷ ಮಳೆಗಾಲದಲ್ಲಿ ಭದ್ರಾ ನದಿ ದಡದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಇವರಿಗೆ ತಾಲೂಕು ಆಡಳಿತ ಮತ್ತು ನಗರಸಭೆ ವತಿಯಿಂದ ಶಾಶ್ವತ ಪುನರ್ವಸತಿ ಕಲ್ಪಿಸಿಕೊಡುವಂತೆ ಸೂಚಿಸುವುದು. ಮಳೆಗಾಲದಲ್ಲಿ ವಿದ್ಯುತ್ ಕಂಬಗಳು ಹಾಗು ವಿದ್ಯುತ್ ತಂತಿಗಳು ಕೆಳಗೆ ಬಿದ್ದು ದುರ್ಘಟನೆಗಳು ಸಂಭವಿಸದಂತೆ ಎಚ್ಚರವಹಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸುವುದು. ನಗರಸಭೆ ವ್ಯಾಪ್ತಿಯಲ್ಲಿ ಬೀದಿನಾಯಿಗಳು ಹಾಗು ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಹಲವಾರು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಆದರೆ ನಗರಸಭೆ ಆಡಳಿತ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದು. ಜನ್ನಾಪುರ ಅಂತರಘಟ್ಟಮ್ಮ ಸಮುದಾಯ ಭವನ ಹಾಗು ಮಲ್ಲೇಶ್ವರ ಸಮುದಾಯ ಭವನಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತವಾಗಿ ಮನವಿ ಮಾಡಿದರೂ ಸಹ ನೀಡಿರುವುದಿಲ್ಲ. ಈ ಹಿನ್ನಲೆಯಲ್ಲಿ ದಾಖಲೆಗಳನ್ನು ನೀಡುವಂತೆ ಸೂಚಿಸುವುದು. ಕರ್ನಾಟಕ ನೀರಾವರಿ ನಿಗಮ ನಿಯಮಿತ, ಬಿ.ಆರ್.ಎಲ್.ಸಿ-೩ ಕಛೇರಿ ವತಿಯಿಂದ ಜನ್ನಾಪುರ ಅಂತರಘಟ್ಟಮ್ಮ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿರುವ ಕುರಿತು ಸರ್ಕಾರದ ಮಾನದಂಡಗಳ ಆದೇಶದ ಪ್ರತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದು ಹಾಗು ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುವ ಬಸ್, ಆಟೋ ಸೇರಿದಂತೆ ಶಾಲಾ ವಾಹನಗಳ ದಾಖಲೆಗಳನ್ನು ಪರಿಶೀಲನೆ ನಡೆಸುವಂತೆ ಹಾಗು ವಾಹನ ಚಾಲಕರುಗಳಿಗೆ ಸಂಚಾರಿ ನಿಯಮಗಳನ್ನು ಸಂಚಾರಿ ಪೊಲೀಸ್ ಠಾಣಾಧಿಕಾರಿಗಳಿಂದ ತಿಳಿಸಿಕೊಡುವಂತೆ ಸೂಚಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ತೀರ್ಥೇಶ್ ದೂರು ಸಲ್ಲಿಸಿ, ತಾಲೂಕಿನ ಕಸಬಾ-೧ರ ಸೀಗೆಬಾಗಿ ಗ್ರಾಮದ ಬೆಂಡೆಕಟ್ಟೆ ಕೆರೆ ಒತ್ತುವರಿಯಾಗಿದ್ದು, ಕೆರೆ ಜಾಗದಲ್ಲಿ ನಿವೇಶನಗಳು, ಮನೆ, ಸಾಮಿಲ್ ಹಾಗು ಕಟ್ಟಡಗಳು ನಿರ್ಮಾಣವಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ಒತ್ತುವರಿ ತೆರವುಗೊಳಿಸದೆ ನಿರ್ಲಕ್ಷ್ಯತನ ವಹಿಸಿದ್ದಾರೆ. ಅಲ್ಲದೆ ಕೆರೆ ಜಾಗಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ತಾಲೂಕು ಆಡಳಿತದಿಂದ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಕ್ರಮ ಕೈಗೊಳ್ಳಬೇಕು. ಮತ್ತೊಂದು ಪ್ರಕರಣದಲ್ಲಿ ನಗರಸಭೆ ವ್ಯಾಪ್ತಿಯ ಖಲಂದರ್ ನಗರದಲ್ಲಿ ೩ ಎಕರೆ ೧೬ ಗುಂಟೆ ವಿಸ್ತೀರ್ಣದ ಕೆರೆಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಮನೆ ಹಾಗು ಇನ್ನಿತರ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಆದರೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪವೆಸಗುತ್ತಿದ್ದಾರೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ದಲಿತ ಮುಖಂಡ ಕುಬೇಂದ್ರಪ್ಪ ಸೇರಿದಂತೆ ಇನ್ನಿತರರು ತಮ್ಮ ದೂರುಗಳನ್ನು ಸಲ್ಲಿಸಿ ಇತ್ಯರ್ಥಪಡಿಸುವಂತೆ ಸಭೆಯಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಗುರಾಜ್ ಎನ್. ಮೈಲಾರಿ ಉಪಸ್ಥಿತರಿದ್ದರು.
ಶಿಕ್ಷಣ, ಕಂದಾಯ, ನಗರಸಭೆ, ಲೋಕೋಪಯೋಗಿ, ನೀರಾವರಿ, ಕೃಷಿ, ಅರಣ್ಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳು ಹಾಗು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.