ಶನಿವಾರ, ಜುಲೈ 26, 2025

ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಡುಗಡೆ : ಮುಳುಗಡೆ ಹಂತಕ್ಕೆ ತಲುಪಿದ ಹೊಸ ಸೇತುವೆ

ಭದ್ರಾ ಜಲಾಶಯದಿಂದ ನದಿಗೆ ಬಿಡುತ್ತಿರುವ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಭದ್ರಾವತಿ ನಗರದ ಹೃದಯ ಭಾಗದಲ್ಲಿರುವ ಹೊಸ ಸೇತುವೆ ಮುಳುಗಡೆ ಹಂತಕ್ಕೆ ತಲುಪಿದೆ. ಈ ಹಿನ್ನಲೆಯಲ್ಲಿ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಸೇತುವೆ ಎರಡು ಬದಿ ಬ್ಯಾರಿಗೇಡ್‌ಗಳನ್ನು ಅಳವಡಿಸಿ ಬಂದ್ ಮಾಡಲಾಗಿದೆ. 
     ಭದ್ರಾವತಿ: ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದೆ. ಜಲಾಶಯದ ಸುರಕ್ಷತೆ ಹಿನ್ನಲೆಯಲ್ಲಿ ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ನಗರದ ಹೃದಯ ಭಾಗದಲ್ಲಿರುವ ಹೊಸ ಸೇತುವೆ ಶನಿವಾರ ಸಂಜೆ ವೇಳೆಗೆ ಮುಳುಗಡೆ ಹಂತಕ್ಕೆ ತಲುಪಿದೆ. 
    ಪ್ರತಿ ವರ್ಷದಂತೆ ಈ ಬಾರಿ ಸಹ ಪ್ರವಾಹ ಉಂಟಾಗುವ ಭೀತಿ ಎದುರಾಗಿದ್ದು, ಹೊಸ ಸೇತುವೆ ಮುಳುಗಡೆ ಹಂತಕ್ಕೆ ತಲುಪಿರುವ ಹಿನ್ನಲೆಯಲ್ಲಿ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗಿದೆ. ಸೇತುವೆ ಎರಡು ಬದಿ ಬ್ಯಾರಿಕೇಡ್‌ಗಳ ಮೂಲಕ ಬಂದ್ ಮಾಡಲಾಗಿದ್ದು, ಪೊಲೀಸ್ ಹಾಗು ಗೃಹ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೇತುವೆ ಮೇಲಿನ ಸಂಚಾರ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ನಗರದಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿದ್ದು, ಸಂಚಾರಿ ಪೊಲೀಸರು ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ. ಈ ನಡುವೆ ಹಳೇಸೇತುವೆ ಬಳಿ ಇರುವ ಶ್ರೀ ಸಂಗಮೇಶ್ವರ ದೇವಸ್ಥಾನ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. 
        ಪ್ರವಾಹ ಭೀತಿ: 
    ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಇದರಿಂದಾಗಿ ನೀರಿನ ಪ್ರವಾಹ ಉಂಟಾಗಿ ತಗ್ಗು ಪ್ರದೇಶಗಳಿಗೆ ನುಗ್ಗುವ ಸಾಧ್ಯತೆ ಹೆಚ್ಚಾಗಿದೆ. ಪ್ರತಿ ವರ್ಷ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದ್ದು, ಇದರಿಂದಾಗಿ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. 
    ಪ್ರವಾಹ ಎದುರಿಸಲು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ನಗರಸಭೆ ಆಡಳಿತಗಳು ಈಗಾಗಲೇ ಸಿದ್ದತೆ ಕೈಗೊಂಡಿವೆ. ಸಂತ್ರರಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಈಗಾಗಲೇ ಸೂಚಿಸಲಾಗಿದ್ದು, ಮುಂದಿನ ಕೆಲವು ದಿನಗಳವರೆಗೆ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಭದ್ರಾ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣ ಏರಿಕೆಯಾಗಲಿದ್ದು, ಅದರಂತೆ ಹೊರಬಿಡುತ್ತಿರುವ ನೀರಿನ ಪ್ರಮಾಣದಲ್ಲೂ ಏರಿಕೆಯಾಗಲಿದೆ.  ಈ ನಡುವೆ ಇದೀಗ ಸರ್ಕಾರ ತಗ್ಗು ಪ್ರದೇಶಗಳ ಬಳಿ ತಡೆಗೋಡೆ ನಿರ್ಮಿಸಲು ಅನುದಾನ ಬಿಡುಗಡೆಗೊಳಿಸಿದ್ದು, ಮುಂದಿನ ವರ್ಷದಿಂದ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ. 

`ಮನೆ-ಮನೆಗೆ ಪೊಲೀಸ್' ಸದುಪಯೋಗಪಡಿಸಿಕೊಳ್ಳಿ : ಸ್ನೇಹಪರ, ಸೌಹಾರ್ದ ಸಮಾಜ ನಿರ್ಮಿಸಿ

ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮನವಿ 

ಭದ್ರಾವತಿ ನಗರದ ವೀರಶೈವ ಸಭಾಭವನದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಭದ್ರಾವತಿ ಉಪವಿಭಾಗದ ವತಿಯಿಂದ ಶನಿವಾರ `ಮನೆ-ಮನೆಗೆ ಪೊಲೀಸ್-೨೦೨೫' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮಾತನಾಡಿದರು. 
    ಭದ್ರಾವತಿ: ನಾಗರಿಕರು ಮತ್ತು ಪೊಲೀಸರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಮೂಲಕ ಸ್ನೇಹಿಮಯಿಯನ್ನಾಗಿಸುವ ಉದ್ದೇಶದಿಂದ ಶಿವಮೊಗ್ಗ ಪೊಲೀಸ್ ವತಿಯಿಂದ ನೂತನವಾಗಿ `ಮನೆ-ಮನೆಗೆ ಪೊಲೀಸ್-೨೦೨೫' ಕಾರ್ಯಕ್ರಮ ರೂಪಿಸಲಾಗಿದ್ದು, ಇದರ ಸದುಪಯೋಗಪಡೆದುಕೊಳ್ಳುವಂತೆ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮನವಿ ಮಾಡಿದರು. 
    ಅವರು ಶನಿವಾರ ನಗರದ ವೀರಶೈವ ಸಭಾಭವನದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಭದ್ರಾವತಿ ಉಪವಿಭಾಗದ ವತಿಯಿಂದ ಏರ್ಪಡಿಸಲಾಗಿದ್ದ `ಮನೆ-ಮನೆಗೆ ಪೊಲೀಸ್-೨೦೨೫' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
    ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆ ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಸೆದು ಸೌಹಾರ್ದ ಸಮಾಜ ನಿರ್ಮಿ ಸುವ ಉದ್ದೇಶಹೊಂದಿದೆ. ಪೊಲೀಸರು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ ಸ್ಪಂದಿಸಬೇಕು ಹಾಗೂ ಜನರು ಕೂಡ ಪೊಲೀಸರೊಂದಿಗೆ ಸಹಕರಿಸಬೇಕು ಎಂದರು. 
    ಈ ಹಿಂದೆ ಬೀಟ್ ಮತ್ತು ಸಬ್ ಬೀಟ್ ವ್ಯವಸ್ಥೆ ಜಾರಿಯಲ್ಲಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದಿನ ಮೈಕ್ರೊ ಲೆವೆಲ್ ಕಾರ್ಯಕ್ರಮ ಇದಾಗಿದೆ. ಪೊಲೀಸ್ ಇಲಾಖೆಗೆ ಸಂಬಂಧಿಸಿದ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದರಿಂದ ಪೊಲೀಸರು ಮತ್ತು ಜನರಲ್ಲಿ ಅರಿವು ಮೂಡುತ್ತದೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆಯಿಂದ ಜನರಲ್ಲಿ ಸುರಕ್ಷತಾ ಭಾವ ಸೃಷ್ಟಿಯಾಗುತ್ತದೆ. ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ ವೇಳೆ ಏನೇ ಸಮಸ್ಯೆ ಇದ್ದರೂ ಮುಕ್ತವಾಗಿ ತಿಳಿಸಬೇಕು. ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಉತ್ತಮ ಸಂಬಂಧ ಹೊಂದಬೇಕೆಂದು ಸಲಹೆ ನೀಡಿದರು.
    ೪ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಇಂದಿರಾ ಮೈಲಾರ ಚೆಟ್ಟಿಯಾರ್ ಮಾತನಾಡಿ, ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿ ಮತ್ತು ಆಡಳಿತ ಸ್ನೇಹಿಯಾಗಿಸಲು ಸರ್ಕಾರ ಮುಂದಾಗಿದೆ. ಗೃಹ ಇಲಾಖೆ ಮತ್ತು ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು. ಪೊಲೀಸ್ ವ್ಯವಸ್ಥೆ ಬಗ್ಗೆ ಜನರಲ್ಲಿ ಇರುವ ಹೆದರಿಕೆ ತೊಲಗಬೇಕು. ಈ ಯೋಜನೆಯಡಿ ಸ್ಥಳೀಯ ಪೊಲೀಸ್ ಸಿಬ್ಬಂದಿಗಳು ಮನೆ ಮನೆಗೆ ಬಂದು ಜನರೊಂದಿಗೆ ಸಂವಾದ ನಡೆಸುವುದು ಸ್ವಾಗತಾರ್ಹ. ಮನೆಗಳಿಗೆ ಭೇಟಿ ನೀಡುವ ವೇಳೆ ಸಮವಸ್ತ್ರ ಧರಿಸದಿದ್ದರೆ ಉತ್ತಮ. ಹಾಗೂ ಮಕ್ಕಳೊಂದಿಗೆ ಸ್ನೇಹದಿಂದ ಮಾತನಾಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಲಹೆ ನೀಡಿದ ಅವರು ಜನರ ಮಾತನ್ನು ತಾಳ್ಮೆಯಿಂದ ಆಲಿಸಿ, ಸ್ಪಂದಿಸಬೇಕೆಂದರು.
    ಪೊಲೀಸ್ ಉಪ ಅಧೀಕ್ಷಕ ಕೆ.ಆರ್ ನಾಗರಾಜ್ ಮಾತನಾಡಿ, ಜನರ ಸಮಸ್ಯೆಗಳನ್ನು ಅರಿತು ಸ್ಪಂದಿಸಲು ಇಲಾಖೆ ಈ ಹಿಂದೆ ನಗರ ಪ್ರದೇಶದಲ್ಲಿ ಮೊಹಲ್ಲಾ ಸಭೆ, ಗ್ರಾಮಗಳಲ್ಲಿ ಬೀಟ್ ವ್ಯವಸ್ಥೆ ರೂಪಿಸಿಕೊಂಡಿತ್ತು. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ `ಮನೆ-ಮನೆಗೆ ಪೊಲೀಸ್' ವ್ಯವಸ್ಥೆ ಜಾರಿಗೆ ತಂದಿದೆ.  ೫೦-೬೦ ಮನೆಗಳ ಸಮೂಹ ರಚಿಸಿ, ಪ್ರತಿ ಬೀಟ್ ಪೊಲೀಸ್‌ಗೆ ಆಯಾ ಜವಾಬ್ದಾರಿ ನೀಡಿ, ಸಾರ್ವಜನಿಕರೊಂದಿಗೆ ಸಂವಾದ ಮಾಡಲಾಗುತ್ತದೆ. ಓಣಿ-ಓಣಿಗೆ ಪೊಲೀಸರು ಬಂದು ಮಾತನಾಡುತ್ತಾರೆ. ಸಮಸ್ಯೆಗಳಿದ್ದರೆ ಠಾಣಾ ವ್ಯಾಪ್ತಿ, ಉಪವಿಭಾಗ ಹೀಗೆ ವಿವಿಧ ಹಂತಗಳಲ್ಲಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಮುಖ್ಯವಾಗಿ ಭದ್ರತೆ, ಸುರಕ್ಷತೆ, ಅಪರಾಧಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು. ಪ್ರತಿ ತಿಂಗಳ ೨ನೇ ಶನಿವಾರದಂದು ಆಯಾ ಠಾಣಾ ವ್ಯಾಪ್ತಿಗಳಲ್ಲಿನ ಸಾರ್ವಜನಿಕ ಸಂಪರ್ಕ ಸಭೆ ನಡೆಸಲಾಗುವುದು ಎಂದರು.
    ಪೊಲೀಸ್ ನಗರ ವೃತ್ತ ನಿರೀಕ್ಷ  ಶ್ರೀಶೈಲಕುಮಾರ್,  ಗ್ರಾಮಾಂತರ ವೃತ್ತ ನಿರೀಕ್ಷಕ ಜಗದೀಶ್ ಹಂಚಿನಾಳ, ಹೊಳೆಹೊನ್ನೂರು ವೃತ್ತ ನಿರೀಕ್ಷಕ ಶಿವಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಕಾರ್ಯಕ್ರಮದಲ್ಲಿ `ಮನೆ-ಮನೆಗೆ ಪೊಲೀಸ್-೨೦೨೫' ಕಾರ್ಯಕ್ರಮ ಕುರಿತಾದ ಕರಪತ್ರ, ಬೀಟ್ ಬುಕ್ ಬಿಡುಗಡೆ ಮಾಡಲಾಯಿತು. ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಸ್ಥಳೀಯರು, ಪೊಲೀಸ್ ಇಲಾಖೆ ವಿವಿಧ ಠಾಣೆಗಳ ಠಾಣಾಧಿಕಾರಿಗಳು, ಸಿಬ್ಬಂದಿಗಳು ಹಾಗು ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳುಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಹುಟ್ಟುಹಬ್ಬದ ಶುಭಾಶಯ ಕೋರಿ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ

ಭದ್ರಾವತಿ ಜನ್ನಾಪುರ ಶ್ರೀ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ವತಿಯಿಂದ ವಿಧಾನಪರಿಷತ್ ಸದಸ್ಯೆ ಬಲ್ಕೀಶ್‌ಬಾನುರವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ : ಜನ್ನಾಪುರ ಶ್ರೀ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ವತಿಯಿಂದ ವಿಧಾನಪರಿಷತ್ ಸದಸ್ಯೆ ಬಲ್ಕೀಶ್‌ಬಾನುರವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. 
    ಟ್ರಸ್ಟ್ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್‌ರವರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಹೋರಾಟ ಪ್ರಾರಂಭಿಸಿ ಜನವರಿ, ೨೦೨೭ಕ್ಕೆ ೫೦ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಸರ್ಕಾರದ ಸಹಕಾರದಿಂದ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಪಣತೊಟ್ಟಿರುವುದರಿಂದ ಪ್ರಾಥಮಿಕ ಹಂತವಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗಿದೆ. 
    ಭದ್ರಾ ಜಲಾಶಯದ ಮುಂಭಾಗದಲ್ಲಿ ಖಾಲಿ ಇರುವ ನೂರಾರು ಎಕರೆ ವಿಶಾಲವಾದ ಖಾಲಿ ಜಾಗದಲ್ಲಿ ಕೆ.ಆರ್.ಎಸ್ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಆಕರ್ಷಣೀಯ ಪ್ರವಾಸಿಗರ ತಾಣವನ್ನಾಗಿ ಮಾಡುವುದು. ಆರಳಿಕೊಪ್ಪ ಗ್ರಾಮಪಂಚಾಯತಿ ವ್ಯಾಪ್ತಿ ಗೊಂದಿ ಗ್ರಾಮದಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಸಮೀಪವಿರುವ ಖಾಲಿ ಜಾಗದಲ್ಲಿ ಉದ್ಯಾನವನ್ನು ಅಭಿವೃದ್ಧಿಪಡಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವುದು. ಗೊಂದಿ ಅಣೆಕಟ್ಟಿಯಲ್ಲಿ ತಡೆಗೋಡೆ ಹಾಗೂ ಚೈನ್‌ಲಿಂಕ್ ಮೆಸ್ ಇಲ್ಲದೇ ಪ್ರವಾಸಿಗರು ಅಪ್ಪಿತಪ್ಪಿ ಆಣೆಕಟ್ಟು ಕೆಳಗೆ ಬಿದ್ದು ಸಾವು ಸಂಭವಿಸುವ ಸಂಭವವಿರುವುದರಿಂದ ಇದನ್ನು ತಡೆಗಟ್ಟಲು ಹಾಗೂ ಸೂಕ್ತ ರಕ್ಷಣೆ ಒದಗಿಸಲು ಗೊಂದಿ ಆಣೆಕಟ್ಟು ಸುತ್ತಲೂ ಚೈನ್ ಲಿಂಕ್ ಕಲ್ಪಿಸುವುದು. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲಾ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಮಾಡುವುದು. ಗೊಂದಿ ಅಣೆಕಟ್ಟೆಯಿಂದ ಕಡಗುಂಚಿ ಗ್ರಾಮದವರೆಗೆ ತುಂಗಾ ಅಣೆಕಟ್ಟಿನಲ್ಲಿ ಹೂಳು ತೆಗೆಯುವುದು ಹಾಗೂ ತುಂಗಾ ಅಣೆಕಟ್ಟಿನಲ್ಲಿರುವ ಹೂಳು ತೆಗೆಯಲು ಸರ್ಕಾರದಿಂದ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸುವಂತೆ ಮನವಿಯಲ್ಲಿ ಕೋರಲಾಗಿದೆ. 
    ಟ್ರಸ್ಟ್ ಗೌರವಾಧ್ಯಕ್ಷ ವಿಶ್ವೇಶ್ವರರಾವ್, ಸಂಚಾಲಕ ಎಂ.ವಿ ಚಂದ್ರಶೇಖರ್ ಹಾಗು ಮೊಹಮ್ಮದ್ ರಫಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.